ಗದಗ: ಜಿಲ್ಲೆಯಲ್ಲಿ ಡೆಂಘೀ ಹಾಗೂ ಇತರೆ ಕೀಟಜನ್ಯ ರೋಗಗಳು ಹರಡದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಘೀ ದಿನ ಮತ್ತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಲೇರಿಯಾ, ಡೆಂಘೀ, ಚಿಕೂನ್‌ ಗುನ್ಯಾ ರೋಗಗಳು ಹರಡದಂತೆ ತಡೆಯಲು ಆರೋಗ್ಯ ಇಲಾಖೆಯು ವಿವಿಧ ಇಲಾಖೆಗಳ ಸಮನ್ವಯತೆಯೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯ ಕುರಿತು ವ್ಯಾಪಕ ಅರಿವು ಮೂಡಿಸಬೇಕು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿರುವ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು.

ಸೊಳ್ಳೆ ಉತ್ಪತ್ತಿಯಾಗುತ್ತಿರುವ ಸ್ಥಳಗಳನ್ನು ಗುರುತಿಸಿ ಸೊಳ್ಳೆ ನಾಶಕ ದ್ರಾವಣವನ್ನು ಸಿಂಪಡಿಸಬೇಕು. ಶಾಲೆಗಳಲ್ಲಿ ಕಡ್ಡಾಯವಾಗಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬಸ್ ಡಿಪೋಗಳಲ್ಲಿ ಖಾಲಿ ಟೈರ್‌ಗಳಲ್ಲಿ ಹಾಗೂ ಘನತ್ಯಾಜ್ಯಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಖಾಲಿ ಟೈರ್‌ಗಳ ಮೇಲೆ ಟಾರ್ಪಾಲನ್ ಹಾಕಿ, ಅವುಗಳನ್ನು ತಕ್ಷಣ ವಿಲೇವಾರಿ ಮಾಡಲು ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾಹಿತಿ ನೀಡಿ, ಜಿಲ್ಲೆಯಲ್ಲಿ 2026ರ ಜನವರಿಯಿಂದ ಏಪ್ರಿಲ್‌ವರೆಗೆ ಮಲೇರಿಯಾ ಪ್ರಕರಣಗಳಿಗೆ ಸಂಬಂಧಿಸಿದಂತೆ 1,20,029 ರಕ್ತಲೇಪನ ಪರೀಕ್ಷೆಗಳನ್ನು ಕೈಗೊಳ್ಳಲಾಗಿದ್ದು, 2 ಪ್ರಕರಣಗಳು ಖಚಿತಪಟ್ಟಿವೆ. ಡೆಂಘೀ ರೋಗಕ್ಕೆ ಸಂಬಂಧಿಸಿದಂತೆ 607 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 17 ಪ್ರಕರಣಗಳು ಹಾಗೂ ಚಿಕೂನ್‌ ಗುನ್ಯಾಕ್ಕೆ ಸಂಬಂಧಿಸಿದಂತೆ 109 ರಕ್ತದ ಮಾದರಿ ಪರೀಕ್ಷಿಸಲಾಗಿದ್ದು, 7 ಪ್ರಕರಣಗಳು ಖಚಿತಪಟ್ಟಿವೆ ಎಂದರು.

ಸಹಾಯಕ ಕೀಟಶಾಸ್ತ್ರಜ್ಞರಾದ ಅನ್ನಪೂರ್ಣ ಶೆಟ್ಟರ್ ಅವರು ಸೊಳ್ಳೆಯ ಜೀವನಚಕ್ರ ಹಾಗೂ ಲಾರ್ವಾಹಾರಿ ಮೀನುಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ ಅವರು ಸ್ವಾಗತಿಸಿ, ಸಭೆಯ ಉದ್ದೇಶಗಳನ್ನು ವಿವರಿಸಿದರು.


ಸಭೆಯಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಡಾ.ರಾಜೇಂದ್ರ ಬಸರಿಗಿಡದ, ಡಾ. ಅರುಂಧತಿ ಕುಲಕರ್ಣಿ ಸೇರಿದಂತೆ ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.