ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

| Published : Jul 05 2024, 12:50 AM IST

ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ 189 ಡೆಂಘೀ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಬೇಕು. ಹಾಸ್ಟಲ್‌ಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳನ್ನು ತೆರವುಗೊಳಿಸಿ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಘೀ ನಿಯಂತ್ರಣ ದಿನದ ಪ್ರಯುಕ್ತ ನಡೆದ ಅಂತರ ಇಲಾಖೆ ಸಮನ್ವಯ ಸಭೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ವರದಿಯಾಗುವ ಸ್ಥಳಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ರೋಗ ಹರಡದಂತೆ ನಿಯಂತ್ರಿಸಬೇಕು ಎಂದರು.

ಜಿಲ್ಲೆಯಲ್ಲಿ 189 ಡೆಂಘೀ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಬೇಕು. ಹಾಸ್ಟಲ್‌ಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.

ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳನ್ನು ತೆರವುಗೊಳಿಸಿ. ಶುದ್ಧ ಕುಡಿಯುವ ನೀರನ್ನು ಬಳಸಬೇಕು ಎಂದರು.

ಮಳೆಗಾಲ ಪ್ರಾರಂಭವಾಗಿದೆ. ಸ್ಥಳೀಯ ಸಂಸ್ಥೆಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳನ್ನು ಪರಿಶೀಲಿಸಿ, ಎಲ್ಲಿಯೋ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಸಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ಸಾರ್ವಜನಿಕರಿಗೆ ಶುದ್ಧ, ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವುದು ಮುಖ್ಯ. ಸ್ಥಳೀಯ ಸಂಸ್ಥೆಗಳು ನೀರನ್ನು ಪರೀಕ್ಷಿಸಿ ವರದಿ ಪಡೆದ ತಕ್ಷಣ ಆರೋಗ್ಯ ಇಲಾಖೆಯೊಂದಿಗೆ ಹಂಚಿಕೊಂಡು ವಿಶ್ಲೇಷಣೆ ನಡೆಸಿ, ನೀರಿನಲ್ಲಿ ರೋಗವಾಹಕ ಅಂಶಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದರು.

ಶಾಲೆ 100 ಮೀ ವ್ಯಾಪ್ತಿ ತಂಬಾಕು ಮಾರಾಟ ನಿಷೇಧ:

ಜಿಲ್ಲೆಯ ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿ ಅಂಗಡಿಗಳಲ್ಲಿ ತಂಬಾಕು ಮಾರಾಟ ಕಂಡು ಬಂದಲ್ಲಿ ಅಂಗಡಿಗಳ ಪರವಾನಗಿ ರದ್ದು ಪಡಿಸಬೇಕು. ಕೆಲ ಶಾಲೆಗಳ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆಯ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದರು.

ತಂಬಾಕು ಮಾರಾಟ ಮಾಡುವವರು ಇನ್ನೂ ಮುಂದೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿ ತಂಬಾಕು ಮಾರಾಟ ರಹದಾರಿ ಪಡೆಯಬೇಕಿದೆ. ಇದಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಸಮಿತಿ ರಚಿಸಿಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 2023ರ ಏಪ್ರಿಲ್ ಮಾಹೆಯಿಂದ ಮಾರ್ಚ್ 2024ರ ವರೆಗೆ ಜಿಲ್ಲೆಯಲ್ಲಿ ಒಟ್ಟು 88 ಕಡೆ ಕೋಟ್ಪಾ ದಾಳಿ ನಡೆಸಿ 1,34,860 ರು. ದಂಡ ವಿಧಿಸಿದೆ. 1031 ಪ್ರಕರಣಗಳು ದಾಖಲಾಗಿವೆ ಎಂದರು.

ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್ ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್ ರಾಜಮೂರ್ತಿ, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.