ಕನ್ನಡಪ್ರಭ ವಾರ್ತೆ ಮೈಸೂರು
ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆ.ಆರ್.ಎಸ್, ಕಬಿನಿ ಅಣೆಕಟ್ಟುಗಳಲ್ಲಿ ಇರುವ ನೀರಿನ ಲಭ್ಯತೆಯ ಮಾಹಿತಿಯನ್ನು ಪಡೆದ ಅವರು ಜೂನ್ ಅಂತ್ಯದವರೆಗೆ ಅಣೆಕಟ್ಟುಗಳಲ್ಲಿರುವ ನೀರಿನ ಪ್ರಮಾಣ ಸಾಕಾಗುತ್ತದೆ. ಕಬಿನಿ ಅಣೆಕಟ್ಟಿನಿಂದ ಕುಡಿಯುವ ನೀರಿಗೆ ಅಗತ್ಯವಿದ್ದಾಗ ಕಬಿನಿಯಿಂದ ಚಾನೆಲ್ ಮೂಲಕ ನೀರನ್ನು ಕಾಲ ಕಾಲಕ್ಕೆ ಹರಿಸಿ ಕುಡಿಯುವ ನೀರನ್ನು ಪೂರೈಸುವಂತೆ ಕಬಿನಿ ನೀರಾವರಿ ನಿಗಮದ ಅಧಿಕಾರಿಗಳಿಗೆ ತಿಳಿಸಿದರು.
ತಹಸೀಲ್ದಾರರು ತಾಲೂಕು ಮಟ್ಟದಲ್ಲಿ ಪ್ರತಿ ವಾರ ಕುಡಿಯುವ ನೀರಿನ ನಿರ್ವಹಣೆ ಕುರಿತು ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿ ಸಭೆ ನಡೆಸಬೇಕು ಎಂದು ಸೂಚಿಸಿದರು.ಬೇಸಿಗೆ ಕಾಲ ಆರಂಭವಾಗಿದ್ದು, ಕಾಡ್ಗಿಚ್ಚು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೈಗೊಳ್ಳಬೇಕು. ಕಳೆದ ವರ್ಷ ಚಾಮುಂಡಿಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದರು.
ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಮಾತನಾಡಿ, ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಬರಬಹುದಾದ ಗ್ರಾಮಗಳನ್ನು ಗುರುತಿಸಿಕೊಳ್ಳಿ. ಕುಡಿಯುವ ನೀರಿನ ಸಮಸ್ಯೆ ಉಂಟಾದ ನಂತರ ಕ್ರಮ ವಹಿಸುವ ಬದಲು ಮೊದಲೇ ಕ್ರಮ ವಹಿಸಬೇಕು. ನೀರಿನ ನಲ್ಲಿಗಳಿಗೆ ಆಫ್ ಅಂಡ್ ಆನ್ ಕ್ಯಾಪ್ ಗಳನ್ನು ಅಳವಡಿಸಬೇಕು. ಅಗತ್ಯವಿದ್ದರೆ ಕೊಳವೆಬಾವಿಗಳನ್ನು ಕೊರೈಸಲು ಕ್ರಮ ವಹಿಸಲಾಗುವುದು ಎಂದರು.
ನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.