ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಬೇಸಿಗೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಮಂಗಳವಾರ ಮದ್ದೂರು ಕ್ಷೇತ್ರದ ವಿವಿಧ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರ ವ್ಯಾಪ್ತಿ ಆಬಲವಾಡಿ, ಹಾಗಲಹಳ್ಳಿ, ಕಬ್ಬಾರೆ, ಅಣ್ಣೂರು, ಕಾರ್ಕಳ್ಳಿ, ಕೆ.ಎಚ್.ಕೊಪ್ಪಲು, ಕೆರಮೇಗಲದೊಡ್ಡಿ, ದೇವರಹಳ್ಳಿ, ಗೌಡಯ್ಯನದೊಡ್ಡಿ, ಕುರಿಕೆಂಪನ ದೊಡ್ಡಿ, ಚನ್ನಸಂದ್ರ, ಕೆ.ಹೊನ್ನಲಗೆರೆ, ಡಿ.ಮಲ್ಲಿಗೆರೆ, ರಾಜೇಗೌಡನದೊಡ್ಡಿ, ಕದಲಿಪುರ, ಬೆಳತೂರು, ಆನೆದೊಡ್ಡಿ ಸೇರಿದಂತೆ 16 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡು ಬಂದಿದೆ ಎಂದರು.
ಸಮಸ್ಯೆ ನಿವಾರಣೆಗೆ ಹಾಲಿ ಕೆಟ್ಟು ನಿಂತಿರುವ ಕೊಳವೆ ಬಾವಿಗಳನ್ನು ದುರಸ್ತಿ ಮಾಡಿ ನೀರು ಪೂರೈಕೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಕೆಲವು ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗೆ ಬಳಸುತ್ತಿರುವ ರೈತರ ಕೊಳವೆ ಬಾವಿಗಳ ಮೂಲಕವೂ ಹಣ ಪಾವತಿ ಮಾಡಿ ಸಮಸ್ಯೆ ತೀವ್ರವಾಗಿರುವ ಗ್ರಾಮಗಳಿಗೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.ಜಲಜೀವನ್ ಮಿಷನ್ ಯೋಜನೆ ಈಗಾಗಲೇ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಇವುಗಳನ್ನು ಚಾಲನೆಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಒಂದು ತಿಂಗಳು ಗಡುವು ನೀಡಲಾಗಿದೆ. ಈ ಸಂಬಂಧ ಟಾಸ್ಕ್ ಫೋರ್ಸ್ ಸಮಿತಿ ಸಭೆ ಕರೆದು ಚರ್ಚೆ ನಡೆಸಲಾಗಿದೆ. ಅಲ್ಲದೇ, ನೀರಿನ ಸಮಸ್ಯೆ ತೀವ್ರವಾಗಿರುವ ಕಡೆಗಳಲ್ಲಿ ಮರು ಟೆಂಡರ್ ಕರೆದು ಬೋರ್ ವೆಲ್ ಅಳವಡಿಸಲು ತಾಕೀತು ಮಾಡಲಾಗಿದೆ ಎಂದರು.
ಕಳೆದ ಬೇಸಿಗೆ ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿರಲಿಲ್ಲ. ಆದರೆ, ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೃಷಿ ಚಟುವಟಿಕೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಲಾಗಿತ್ತು. ಇದರಿಂದ ಅಂತರ್ಜಲ ವೃದ್ಧಿಗೊಂಡ ಪರಿಣಾಮ ಬೋರ್ ವೆಲ್ ಗಳಲ್ಲಿ ಅಷ್ಟಾಗಿ ನೀರಿನ ಸಮಸ್ಯೆ ಕಾಡಲಿಲ್ಲ. ಈಗ ಸಕಾಲದಲ್ಲಿ ಮಳೆಯಾದರೆ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದರು.ಬೇಸಿಗೆ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜೊತೆಗೆ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಮತ್ತು ಗ್ರಾಪಂ ಪಿಡಿಒಗಳು ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಕೆಲವೊಂದು ಸರ್ಕಾರಿ ಇಲಾಖೆಗಳು ಸ್ವಂತ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದೆ. ಪಾಳು ಬಿದ್ದಿರುವ ರೇಷ್ಮೆ ಇಲಾಖೆ ಜಾಗದಲ್ಲಿ ಸರ್ಕಾರ ಕಟ್ಟಡಗಳನ್ನು ನಿರ್ಮಿಸಿ ಅಲ್ಲಿ ಕಚೇರಿ ಗಳು ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಳ್ಳುವ ಬಗ್ಗೆ ನಾನು ಚಿಂತನೆ ನಡೆಸಿದ್ದೇನೆ ತಿಳಿಸಿದರು.ಕೆಲವೊಂದು ಸರ್ಕಾರಿ ಇಲಾಖೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಖಾಲಿ ಇರುವ ಸರ್ಕಾರಿ ನಿವೇಶನಗಳಲ್ಲಿ ಅಧಿಕಾರಿಗಳ ವಸತಿ ಗೃಹ ನಿರ್ಮಿಸಿ ಮೂಲ ಸೌಲಭ್ಯ ದೊರಕಿಸಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಡಾ.ಸ್ಮಿತಾರಾಮು, ತಾಪಂ ಇಒ ರಾಮಲಿಂಗಯ್ಯ, ಆಡಳಿತ ಅಧಿಕಾರಿ ರವೀಂದ್ರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.