ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಗೆ ಅಗತ್ಯ ಕ್ರಮ ವಹಿಸಿ

| Published : Feb 20 2025, 12:47 AM IST

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.೧ರಿಂದ ೨೦ರವರೆಗೆ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ನಡೆಯಲಿದ್ದು, ಯಾವುದೇ ಲೋಪದೋಷಗಳಾಗದಂತೆ ನಿಗಾವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ಮುತ್ತ ೨೦೦ ಮೀಟರ್ ಪ್ರದೇಶವನ್ನು ನಿಗಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝೆರಾಕ್ಸ್ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.೧ರಿಂದ ೨೦ರವರೆಗೆ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ನಡೆಯಲಿದ್ದು, ಯಾವುದೇ ಲೋಪದೋಷಗಳಾಗದಂತೆ ನಿಗಾವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಕ್ಯಾಮರಾ ಕಣ್ಗಾವಲು ವ್ಯವಸ್ಥೆಗೆ ಕ್ರಮವಹಿಸುವಂತೆ ತಿಳಿಸಿದರು.

ಹಾಸನ ಜಿಲ್ಲೆಯಲ್ಲಿ ೧೫೪೪೦ ಹೊಸ ವಿದ್ಯಾರ್ಥಿಗಳು, ೪೦೦ ಖಾಸಗಿ ವಿದ್ಯಾರ್ಥಿಗಳು, ೫೮೩ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೧೬೪೨೩ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೆ ಉತ್ತಮವಾಗಿ ಪರೀಕ್ಷೆ ಬರೆಯುವಂತೆ ಶುಭಹಾರೈಸಿದ್ದಾರೆ. ಹಾಸನ ನಗರದಲ್ಲಿ ೧೨, ಆಲೂರು ೧, ಅರಸೀಕೆರೆ ೬, ಅರಕಲಗೂಡು ೩, ಬೇಲೂರು ೨, ಚನ್ನರಾಯಪಟ್ಟಣ ೪, ಜಾವಗಲ್೧, ಹೊಳೆನರಸೀಪುರ ೩ ಹಾಗೂ ಸಕಲೇಶಪುರದಲ್ಲಿ ೧ ಕೇಂದ್ರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೩೩ ಪರೀಕ್ಷಾ ಕೇಂದ್ರಗಳಲ್ಲಿ ೭೧೯೯ ಬಾಲಕರು ಹಾಗೂ ೯೨೨೪ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದ ಸುತ್ತ ಮುತ್ತ ೨೦೦ ಮೀಟರ್ ಪ್ರದೇಶವನ್ನು ನಿಗಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝೆರಾಕ್ಸ್ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಕಾರ್ಯನಿರ್ವಹಿಸುವ ಸಿಬ್ಬಂದಿಯನ್ನು ಹೊರತುಪಡಿಸಿ ಮಾಧ್ಯಮದವರು ಮತ್ತು ಪರೀಕ್ಷೆಗೆ ಸಂಬಂಧಪಡದವರು ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮೊಬೈಲ್, ರಿಸ್ಟ್ ವಾಚ್, ಬ್ಲೂ ಟೂತ್ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ಬಳಸದಂತೆ ನಿಷೇಧಿಸಲಾಗಿದೆ ಎಂದರು. ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಪ್ರಥಮ ಬಾರಿಗೆ ವೆಬ್ ಕಾಸ್ಟಿಂಗ್ ಮೂಲಕ ಪ್ರತಿ ಪರೀಕ್ಷಾ ಕೇಂದ್ರಗಳ ಚಲನವಲನ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಕ್ಕೆ ವಿದ್ಯುತ್ ಸಂಪರ್ಕ ನಿರಂತರವಾಗಿ ಇರುವಂತೆ ನೋಡಿಕೊಳ್ಳಲು ಚೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು. ಮಕ್ಕಳಿಗೆ ಅಗತ್ಯವಿದ್ದಲ್ಲಿ ಪ್ರಥಮ ಚಿಕಿತ್ಸೆ ಒದಗಿಸಲು, ಪರೀಕ್ಷಾ ಕೇಂದ್ರಕ್ಕೆ ಆಶಾ ಕಾರ್ಯಕರ್ತೆಯರನ್ನು ನೇಮಿಸಿ ಎಂದು ತಿಳಿಸಿದರು. ಅಂಧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕ್ರಮವಹಿಸಿ ಅವಕಾಶ ಕಲ್ಪಿಸಿ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಿಂದ ಪರೀಕ್ಷೆಗೆ ಬರುವ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿ ಬಸ್‌ಗಳಲ್ಲಿ ಮಕ್ಕಳನ್ನು ಕರೆತರಲು ಕ್ರಮವಹಿಸುವಂತೆ ಸೂಚಿಸಿದರು. ಪರೀಕ್ಷಾ ಕೊಠಡಿಯಲ್ಲಿ ಮಕ್ಕಳಿಗೆ ಕುಡಿಯುವ ನೀರು, ಫ್ಯಾನ್ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರಲ್ಲದೆ, ಸಿ.ಸಿ. ಟಿವಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ ಖಾತರಿಪಡಿಸಿಕೊಳ್ಳಲು ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಖಜಾನೆ ಉಪ ನಿರ್ದೇಶಕ ಕವಿತ, ಉಪ ವಿಭಾಗಾಧಿಕಾರಿ ಶೃತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಂಗಾಧರ ಕೆ.ಪಿ. ಹಾಗೂ ವಿವಿಧ ಕಾಲೇಜಿನ ಪ್ರಾಂಶುಪಾಲರು ಸಭೆಯಲ್ಲಿ ಹಾಜರಿದ್ದರು.