ನೀರಿನ ಸಮಸ್ಯೆಗೆ ಮುಂಜಾಗ್ರತಾ ಕ್ರಮ ವಹಿಸಿ

| Published : Apr 22 2025, 01:48 AM IST

ಸಾರಾಂಶ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಮುಂಚಿತವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಯಾರಿ ಮಾಡಿಕೊಳ್ಳಬೇಕು. ಗ್ರಾಮಗಳಲ್ಲಿ ಹಾಗೂ ಜನವಸತಿ ಪ್ರದೇಶದಲ್ಲಿ ನೀರಿನ ಸಮಸ್ಯೆ ಎದುರಾದಲ್ಲಿ ಕೂಡಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಮುಂಚಿತವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಯಾರಿ ಮಾಡಿಕೊಳ್ಳಬೇಕು. ಗ್ರಾಮಗಳಲ್ಲಿ ಹಾಗೂ ಜನವಸತಿ ಪ್ರದೇಶದಲ್ಲಿ ನೀರಿನ ಸಮಸ್ಯೆ ಎದುರಾದಲ್ಲಿ ಕೂಡಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬೇಸಿಗೆ ನಿರ್ವಹಣೆ, ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವ ಕುರಿತು ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಒಂದು ತಿಂಗಳಲ್ಲಿ ನೀರಿನ ಕೊರತೆಯಾಗುವ ಗ್ರಾಮಗಳನ್ನು ಗುರುತಿಸಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆಯಾಗಿ ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಎಲ್ಲ ತಾಲೂಕುಗಳಲ್ಲಿ ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು ಎಂದರು.ಒಂದು ವೇಳೆ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿ ನೀರಿನ ಕೊರತೆ ಎದುರಾದಲ್ಲಿ, ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಡುಗಡೆ ಕೋರಿ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಮುಂದಿನ 20 ದಿನಗಳಲ್ಲಿ ಜಲಾಶಯಗಳಲ್ಲಿನ ನೀರಿನ ಮಟ್ಟ ಪರಿಶೀಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕಿಲ್ಲ. ಬರುವ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಸಂಗ್ರಹಣೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ವಿಡಿಯೋ ಸಂವಾದ ಮೂಲಕ ವಿವರಿಸಿದರು.

ಅದೇ ರೀತಿಯಲ್ಲಿ ಅಥಣಿ ತಾಲೂಕಿನಲ್ಲಿ ಸದ್ಯಕ್ಕೆ ಯಾವುದೇ ನೀರಿನ ಸಮಸ್ಯೆ ಇಲ್ಲ. ಆದರೆ, ಕೊಟ್ಟಲಗಿ, ತೆಲಸಂಗ ಮತ್ತು ಸುತ್ತ ಮುತ್ತಲಿನ ಐದು ಊರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆದರೆ, ಪಂಚಾಯತಿ ವ್ಯಾಪ್ತಿಯಲ್ಲಿ ಬೋರ್ವೆಲ್ ಮತ್ತು ಟ್ಯಾಂಕರ್‌ಗಳು ಕಾರಣ ನೀರು ಸರಬರಾಜು ಮಾಡಲಾಗುವುದು ಎಂದ ಅಥಣಿ ತಹಸೀಲ್ದಾರ್ ವಿವರಿಸಿದರು.ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ್ ನಾಯಕ, ಬೆಳಗಾವಿ ತಹಸೀಲ್ದಾರ್‌ ಬಸವರಾಜ ನಾಗರಾಳ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.