ಮಳೆ ಬೀಳುವ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಹಿಸಿ : ಸಚಿವ ಜಾರ್ಜ್‌

| Published : May 23 2024, 01:01 AM IST

ಮಳೆ ಬೀಳುವ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಹಿಸಿ : ಸಚಿವ ಜಾರ್ಜ್‌
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತುಗಳ ಬಗ್ಗೆ ಪೂರ್ವ ಸಿದ್ಧತೆ ಹಾಗೂ ಪರಿಹಾರ ಕ್ರಮಗಳ ಕುರಿತು ಬುಧವಾರ ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ವಿಡಿಯೋ ಕೇಂದ್ರದ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಆಗಿರುವ ಮಳೆ ಮತ್ತು ಇತರೆ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಜಿಲ್ಲೆಯ ಮಳೆಯ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫೆರೆನ್ಸ್

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತುಗಳ ಬಗ್ಗೆ ಪೂರ್ವ ಸಿದ್ಧತೆ ಹಾಗೂ ಪರಿಹಾರ ಕ್ರಮಗಳ ಕುರಿತು ಬುಧವಾರ ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ವಿಡಿಯೋ ಕೇಂದ್ರದ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಆಗಿರುವ ಮಳೆ ಮತ್ತು ಇತರೆ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಬಳಿಕ ಮಾತನಾಡಿದ ಸಚಿವರು, ಮಳೆ ಬೀಳುವ ಪ್ರದೇಶಗಳಲ್ಲಿ ಹಾಗೂ ಇತರೆ ಭಾಗಗಳಲ್ಲೂ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಳ್ಳಬೇಕು, ರಸ್ತೆ ಬದಿ ಮರಗಳನ್ನು ತೆರವುಗೊಳಿಸುವುದು ಸೇರಿದಂತೆ ರಸ್ತೆಗಳ ಮೇಲೆ ಮಳೆ ನೀರು ಹರಿಯದಂತೆ ವೈಜ್ಞಾನಿಕವಾಗಿ ಚರಂಡಿ ತೆಗೆದು ಸಮರ್ಪಕವಾಗಿ ನೀರು ಹೊರ ಹೋಗಲು ಕ್ರಮವಹಿಸಬೇಕು ಎಂದು ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಹಾಗೂ ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತಿಗಳಲ್ಲೂ ಮುಂಜಾಗ್ರತೆ ವಹಿಸಲು ಸಿದ್ಧತೆ ಮಾಡಿ ಕೊಳ್ಳಬೇಕು. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ಔಷಧಿ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳ ಕೊರತೆ ಯಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಗ್ರಾಮ ಮಟ್ಟದ ಅಧಿಕಾರಿಗಳು 24/7 ಅವಧಿಯಲ್ಲಿ ಕೆಲಸ ಮಾಡಲು ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮ ಮಟ್ಟದಲ್ಲಿ ಹೆಚ್ಚಿನ ಅನಾಹುತ ಕಂಡು ಬಂದಲ್ಲಿ ತಕ್ಷಣ ಮೇಲಾಧಿಕಾರಿ ಅಥವಾ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅತಿವೃಷ್ಟಿ ಸಂದರ್ಭದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ನಿಭಾಯಿಸಲು ಎಲ್ಲಾ ಅಧಿಕಾರಿಗಳು ಸನ್ನದ್ಧ ರಾಗಿರಬೇಕು. ಮೆಸ್ಕಾಂ, ಅರಣ್ಯ, ಪಿಡಬ್ಲ್ಯೂಡಿ, ಪಿಆರ್‌ಇಡಿ, ಪಶುಸಂಗೋಪನೆ ಇಲಾಖೆ, ಕೃಷಿ, ತೋಟಗಾರಿಕೆ, ಮತ್ತಿತರ ಇಲಾಖೆಗಳು ಸಂಪೂರ್ಣ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಹೇಳಿದರು.ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಗಳನ್ನು ನಡೆಸಲಾಗಿದೆ. ಇದರ ಸಮರ್ಪಕ ನಿರ್ವಹಣೆಗೆ ಜಿಲ್ಲೆಯಲ್ಲಿ ಪೂರ್ವ ಸಿದ್ಧತೆ ಮಾಡಲು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ನಾಲ್ಕು ವರ್ಷಗಳ ಸಾಲಿನ ಅತಿವೃಷ್ಟಿಯಿಂದ ಉಂಟಾದ ಭೂಕುಸಿತ ಹಾಗೂ ಹಾನಿಗಳ ಆಧಾರದ ಮೇರೆಗೆ ಈಗಾಗಲೇ ಜಿಲ್ಲೆಯಲ್ಲಿ ಅಂತಹ ಪ್ರದೇಶಗಳನ್ನು ಗುರುತಿಸಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ವಿಪತ್ತಿನ ಸಮಯದಲ್ಲಿ ಸಂತ್ರಸ್ತರನ್ನು ಸ್ಥಳಾಂತರಿಸಲು ಸುಸ್ಥಿತಿ ಕಾಳಜಿ ಕೇಂದ್ರ ಗಳನ್ನು ಗುರುತಿಸಿ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಎನ್ ಡಿ ಆರ್ ಎಫ್ ನಿಂದ ತರಬೇತಿ ಪಡೆದ ಜಿಲ್ಲೆಯಲ್ಲಿರುವ ಸ್ವಯಂ ಸೇವಕರನ್ನು ಗುರುತಿಸಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ವಿಪತ್ತು ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕುರಿತು ತರಬೇತಿ ಸಹ ನೀಡಲಾಗಿದೆ. ವಿವಿಧ ಇಲಾಖೆಗಳಲ್ಲಿರುವ ವಿಪತ್ತು ನಿರ್ವಹಣಾ ಸಾಮಾಗ್ರಿಗಳ ಮಾಹಿತಿ ಪಡೆಯಲಾಗಿದೆ ಎಂದರು.

ಈಗಾಗಲೇ ರಸ್ತೆ ಬದಿಯಲ್ಲಿ ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ತಿಳಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದ್ದು, ವಿಪತ್ತು ನಿರ್ವಹಣೆಗೆ ಅವಶ್ಯವಿರುವ ಎಲ್ಲಾ ರೀತಿಯ ಉಪಕರಣಗಳನ್ನು ವ್ಯವಸ್ಥೆ ಮಾಡಿ ಅವಶ್ಯವಿರುವ ವೈದ್ಯಕೀಯ ಉಪಕರಣಗಳು, ಔಷಧಿಗಳು ದಾಸ್ತಾನು ಮಾಡಿ ಕೊಳ್ಳಲಾಗಿದೆ ಎಂದು ಹೇಳಿದರು.ಇಲ್ಲಿವರೆಗೂ ಮಳೆ ಹಾನಿಯಿಂದಾದ ಎರಡು ಜಾನುವಾರುಗಳು, ಇಬ್ಬರು ಮರ ಬಿದ್ದು ಸಾವನ್ನಪ್ಪಿದ್ದು, ಒಬ್ಬರು ಸಿಡಿಲಿಗೆ ಬಲಿಯಾಗಿದ್ದು, ಒಂದು ವಿದ್ಯುತ್ ಸ್ಪರ್ಶದಿಂದ ಸಾವು, ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ರೈತರು ಬೆಳೆದ ಬೆಳೆಗಳು ಸ್ವಲ್ಪ ಮಟ್ಟಿನ ಹಾನಿಯಾಗಿದ್ದು, ಇವುಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ. ಕೃಷಿ ತೋಟಗಾರಿಕೆ ಬೆಳೆಗಳಿಗೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಎಂಆರ್‌ಪಿ ದರದಲ್ಲಿ ಮಾರಾಟ ಮಾಡಲು ಹಾಗೂ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ತಾಲೂಕುಗಳ ತಹಸೀಲ್ದಾರ್ ರವರ ಪಿಡಿ ಖಾತೆಯಲ್ಲಿ 350.77 ಲಕ್ಷ ರು.ಗಳು ಸೇರಿದಂತೆ ಮತ್ತು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 6.9 ಕೋಟಿ ರು.ಗಳ ಹಣ ಇದೆ ಎಂದರು.ಮಳೆ ಹೆಚ್ಚಾದ ಪ್ರದೇಶಗಳಲ್ಲಿ ಒಟ್ಟು 16 ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡು ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಗುರುತಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಲೆ ನಾಡು ಭಾಗದಲ್ಲಿ ಪಿಆರ್‌ಇಡಿ ಇಲಾಖೆಯಿಂದ 48 ಕಾಲು ಸುಂಕಗಳನ್ನು ಹಾಗೂ ಪಿಡಬ್ಲ್ಯೂಡಿ ಇಲಾಖೆಯಿಂದ 180 ಕಾಲು ಸುಂಕಗಳ ಸಾರ್ವಜನಿಕರ ಬೇಡಿಕೆಗಳಿದ್ದು, ಇವುಗಳನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಮತ್ತಿತರ ಖಾಯಿಲೆಗೆ ಮುಂಜಾಗ್ರತೆ ತೆಗೆದುಕೊಳ್ಳಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.ಪೋಟೋ ಫೈಲ್‌ ನೇಮ್‌ 22 ಕೆಸಿಕೆಎಂ 9

ಜಿಲ್ಲೆಯ ಮಳೆಯ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಬುಧವಾರ ನಡೆಸಿದ ವಿಡಿಯೋ ಕಾನ್ಫೆರೆನ್ಸ್‌ನಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.