ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ

| Published : May 25 2024, 12:46 AM IST / Updated: May 25 2024, 12:47 AM IST

ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಸೊಳ್ಳೆ ಉತ್ಪತ್ತಿ ತಾಣಗಳ ಮೇಲೆ ತೀವ್ರ ನಿಗಾವಹಿಸಬೇಕು ಹಾಗೂ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾವೇರಿ: ಮಳೆ ಆರಂಭವಾಗಿರುವುದರಿಂದ ಅಲ್ಲಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ವಾರದಲ್ಲಿ ಶಾಲೆಗಳು ಆರಂಭವಾಗಲಿದ್ದು, ಶಾಲಾ-ಕಾಲೇಜು ಆವರಣಗಳನ್ನು ಸ್ವಚ್ಛಗೊಳಿಸಬೇಕು. ಸೊಳ್ಳೆ ಉತ್ಪತ್ತಿ ತಾಣಗಳ ಮೇಲೆ ತೀವ್ರ ನಿಗಾವಹಿಸಬೇಕು ಹಾಗೂ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಘೀ ದಿನ ಆಚರಣೆ ಅಂಗವಾಗಿ ಜಿಲ್ಲಾ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಸ್ಪತ್ರೆಗಳು, ಸರ್ಕಾರಿ ಕಟ್ಟಡಗಳ ಸುತ್ತಮುತ್ತ ನೀರು ನಿಲ್ಲದಂತೆ ಕ್ರಮವಹಿಸಬೇಕು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸರ್ಕಾರಿ ಕಚೇರಿಗಳ ಛಾವಣಿಗಳನ್ನು ಸ್ವಚ್ಛಗೊಳಿಸಿ ಎಂದು ಸೂಚಿಸಿದರು.ಆರೋಗ್ಯ ಇಲಾಖೆ ಅಧಿಕಾರಿಗಳು ಸಾರಿಗೆ ಡಿಪೋಗಳಿಗೆ ಭೇಟಿ ನೀಡಿ ಟಯರ್‌ಗಳಲ್ಲಿ ನೀರು ನಿಲ್ಲದಂತೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಬೇಕು. ಟೈರ್‌ನಲ್ಲಿ ನೀರು ನಿಲ್ಲದಂತೆ ಸೂಕ್ತ ಕ್ರಮಕೈ ಗೊಳ್ಳಲು ಸೂಚನೆ ನೀಡಬೇಕು. ಸ್ಥಳೀಯ ನಗರ ಸಂಸ್ಥೆಗಳ ಅಧಿಕಾರಿಗಳು ನಗರ ಪಟ್ಟಣಗಳ ಗಟಾರ ನೀರು ಸರಾಗವಾಗಿ ಹರಿದುಹೋಗುವಂತೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಮಾತನಾಡಿ, ತಹಸೀಲ್ದಾರ್, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಡೆಂಘೀ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸ್ವಚ್ಛತಾ ಕಾರ್ಯವನ್ನು ತಮ್ಮ ಕಚೇರಿಯಿಂದಲೇ ಆರಂಭಿಸಿ. ಫಾಗಿಂಗ್ ಮಷಿನ್‌ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಿ, ಜಾಗೃತಿ ಕಾರ್ಯಕ್ರಮಕ್ಕೆ ಆಶಾ ಹಾಗೂ ಇತರೆ ಸಿಬ್ಬಂದಿಗಳನ್ನು ಬಳಸಿಕೊಂಡು ನರೇಗಾ ಕಾಮಗಾರಿ ಸೇರಿದಂತೆ ಜನಸಂದಣಿ ಸ್ಥಳಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು. ಡೆಂಘೀ ಪ್ರಕರಣಗಳು ಕಂಡುಬರುವ ಪ್ರದೇಶಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಹಾಗೂ ಅರಿವು ಮೂಡಿಸಬೇಕು ಎಂದು ತಿಳಿಸಿದರು.ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸರಿತಾ ಮಾತನಾಡಿ, ಡೆಂಘೀ ಈಡೀಸ್ ಈಜಿಪ್ತಿ ಸೊಳ್ಳೆ ಕಚ್ಚುವುದರಿಂದ ಬರುತ್ತದೆ. ವಿಪರೀತ ಜ್ವರ, ದೇಹದ ಮೇಲೆ ಸಣ್ಣ ಸಣ್ಣ ಗಂದೆಗಳು, ಕಣ್ಣುಗಳ ಹಿಂಭಾಗ, ಮಾಂಸ-ಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ತಲೆನೋವು ಹಾಗೂ ಬಾಯಿ, ಮೂಗು, ಒಸಡುಗಳಿದ ರಕ್ತಸ್ರಾವ ಡೆಂಘೀ ಲಕ್ಷಣಗಳಾಗಿವೆ. ರಕ್ತ ಪರೀಕ್ಷೆ ಮೂಲಕ ಡೆಂಘೀ ಜ್ವರ ಪತ್ತೆ ಹಚ್ಚಲಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಘೀ ಮತ್ತು ಚಿಕೂನ್ ಗುನ್ಯಾ ಜ್ವರದ ಪ್ರಕರಣಗಳಿಗೆ ಪ್ರತ್ಯೇಕ ವಾರ್ಡ್ ನಿರ್ವಹಣೆ ಮಾಡಲಾಗುತ್ತಿದೆ. ಸಂಶಯಾತ್ಮಕ ಎಲ್ಲ ರೋಗಿಗಳ ರಕ್ತತಪಾಸಣೆ ಮಾಡಲಾಗುತ್ತಿದೆ. ಸ್ವಚ್ಛ ವಾತಾವರಣ ನಿರ್ಮಾಣ, ಸೊಳ್ಳೆಯಿಂದ ಕಚ್ಚಿಸಿಕೊಳ್ಳುವಿಕೆಯಿಂದ ರಕ್ಷಣೆ ಪಡೆಯಲು ಸೊಳ್ಳೆಪರದೆ ಬಳಕೆ, ಸೊಳ್ಳೆಬ್ಯಾಟ್, ಸೊಳ್ಳೆಬತ್ತಿ, ಸೊಳ್ಳೆ ನಿರೋಧಕ ಮಲಾಮ, ಮೈತುಂಬ ಬಟ್ಟೆ ಧರಿಸಿ ರಕ್ಷಣೆ ಪಡೆಯುವುದು, ಡೆಂಘೀಂ ನಿಯಂತ್ರಣ ಕ್ರಮಗಳಾಗಿವೆ. ಪ್ರಸಕ್ತ ಸಾಲಿನ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ೯೭ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಯಾವುದೇ ಸಾವು ಸಂಭವಿಲ್ಲ ಎಂದು ಮಾಹಿತಿ ನೀಡಿದರು.ಸೊಳ್ಳೆ ಉತ್ಪತ್ತಿ ತಾಣಗಳಾದ ನಿಂತ ನೀರು, ಟೈರ್, ಡ್ರಂ, ತೊಟ್ಟಿ, ತೆಂಗಿನ ಚಿಪ್ಪು, ಗಣತ್ಯಾಜ್ಯ ವಸ್ತುಗಳು, ಹೂವಿನ ಕುಂಡ, ಏರ್‌ಕೂಲರ್, ಕಲ್ಲುಗಣಿಗಾರಿಕೆ, ಕೃಷಿ ಹೊಂಡಗಳು, ಇತರ ನೀರು ನಿಲುಗಡೆ ತಾಣಗಳು, ಅಸಮರ್ಪಕ ಘನತ್ಯಾಜ್ಯ ನಿರ್ವಹಣೆ, ಅನೈರ್ಮಲ್ಯ ವಾತಾವರಣ ಈ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತವೆ. ಕಾಲಕಾಲಕ್ಕೆ ಸ್ವಚ್ಛತೆ ಬಗ್ಗೆ ಆದ್ಯತೆ ನೀಡಿ, ಸೊಳ್ಳೆ ಸಂತಾನ ಉತ್ಪತ್ತಿಗೆ ಕಡಿವಾಣಹಾಕಿದರೆ ಡೆಂಘೀಂ ನಿಯಂತ್ರಣಕ್ಕೆ ತರಬಹುದು. ಈ ನಿಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳು, ಗಣಿ ಇಲಾಖೆ, ಮೀನುಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಆಡಳಿತ, ಜಿಲ್ಲಾ ಆಸ್ಪತ್ರೆ, ಕೃಷಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸಹಕಾರ ಅಗತ್ಯವಾಗಿದೆ. ಮಳೆ ನೀರು ನಿಲ್ಲದಂತೆ ಕ್ರಮ, ಚರಂಡಿಗಳ ಸ್ವಚ್ಛತೆ, ಧೂಮಿಕರಣ, ಘನತ್ಯಾಜ್ಯವಸ್ತುಗಳ ವೈಜ್ಞಾನಿಕ ವಿಲೇವಾರಿ, ಆರೋಗ್ಯ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸುವುದು, ಕೃಷಿ ಹೊಂಡದಲ್ಲಿ ಲಾರ್ವಾ ಹಾರಿ ಮೀನುಗಳನ್ನು ಬಿಡುವುದು, ಹನಿ ನೀರಾವರಿ ಪದ್ಧತಿ ಅಳವಡಿಕೆ ಸೇರಿದಂತೆ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿದರೆ ಡೆಂಘೀ ನಿಯಂತ್ರಿಸಬಹುದು. ಡೆಂಘೀ ನಿಯಂತ್ರಣಕ್ಕೆ ಎಲ್ಲರ ಸಹಕಾರ, ಪರಸ್ಪರ ಸಮನ್ವಯತೆ ಅವಶ್ಯವಾಗಿದೆ ಎಂದರು.ಸಭೆಯಲ್ಲಿ ಸವಣೂರ ಉಪವಿಭಾಗಾಧಿಖಾರಿ ಮಹ್ಮದ್ ಖಿಜರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಮತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್‌. ರಾಘವೇಂದ್ರಸ್ವಾಮಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಂ. ಜಯಾನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ನಿಲೇಶ ಎಂ.ಎನ್., ತಹಸೀಲ್ದಾರ್ ನಾಗರಾಜ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಉಪಸ್ಥಿತರಿದ್ದರು. ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.