ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ. ಮಳೆಯಾಗುವ ಸಾಧ್ಯತೆ ಕಡಿಮೆ ಇದೆ.
ಕೊಪ್ಪಳ: ಜಿಲ್ಲೆಯಲ್ಲಿಯೂ ಸಹ ಬರದ ಪರಿಸ್ಥಿತಿ ಎದುರಾಗುವ ಮುನ್ಸೂಚನೆ ದಟ್ಟವಾಗಿದೆ. ಆದ್ದರಿಂದ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಈಗಿನಿಂದಲೇ ತೆಗೆದುಕೊಳ್ಳಬೇಕು ಎಂದು ವಸತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿನ ಸದ್ಯದ ಮಳೆ, ಬೆಳೆಗಳ ಸ್ಥಿತಿಗತಿ ಹಾಗೂ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿದ ಅವರು, ಸಮಸ್ಯಾತ್ಮಕ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಪೂರೈಕೆಗೆ ಏರ್ಪಾಡು ಮಾಡಬೇಕು. ಹೊಸ ಬೋರ್‌ವೆಲ್ ಕೊರೆಯಿಸಲು ಸರ್ಕಾರದ ಮಾರ್ಗಸೂಚಿ ಕಡ್ಡಾಯ ಅನುಸರಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ಕ್ರಮ ವಹಿಸಬೇಕು. ಮಳೆ ಕೊರತೆಯಿಂದ ದನ-ಕರುಗಳಿಗೆ ಸಮಸ್ಯೆ ಆಗಬಹುದು. ಆದ್ದರಿಂದ ಪರಿಸ್ಥಿತಿ ನೋಡಿಕೊಂಡು ಮೇವು ಬ್ಯಾಂಕ್ ಸ್ಥಾಪನೆಗೆ ಕ್ರಮ ವಹಿಸಿ ಎಂದು ಕಾರ್ಯದರ್ಶಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ. ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಇನ್ನು ಮುಂದೆ ಬಿತ್ತನೆ ಮಾಡುವ ರೈತರು ಮಳೆ ಪರಿಸ್ಥಿತಿ ನೋಡಿಕೊಂಡು ಬಿತ್ತನೆ ಮಾಡುವಂತೆ ರೈತರಿಗೆ ಜಾಗೃತಿ ಮೂಡಿಸಲಾಗುತ್ತದೆ. ಕಡಿಮೆ ಮಳೆಗೆ ಇಳುವರಿ ಕೊಡುವ ಬೆಳೆ ಬೆಳೆಯಲು, ಸಾವಯವ ಕೃಷಿಯತ್ತ ಹೆಚ್ಚಿನ ಗಮನ ಕೊಡಲು ಹಾಗೂ ಬೆಳೆ ವಿಮೆಗೆ ಹೆಸರು ನೋಂದಾಯಿಸುವ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳು ಜಾಗೃತಿ ಹಮ್ಮಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಮಾಹಿತಿ ನೀಡಿದರು.
ಮೇ ಮತ್ತು ಜೂನ್ ಅಂತ್ಯದವರೆಗೆ ಜಿಲ್ಲೆಯ ವಾಡಿಕೆ ಮಳೆ 130 ಮಿಮೀ ಆಗಿದ್ದು, ವಾಸ್ತವಿಕವಾಗಿ 130 ಮಿಮಿ ಮಳೆಯಾಗಿದೆ. ಕಳೆದ 12 ರಿಂದ 15 ದಿನಗಳಿಂದ ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದ ಕಾರಣ ಮಳೆಯ ಕೊರತೆ ಕಂಡು ಬಂದಿದೆ. ಹಗಲಿನ ವೇಳೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿರುತ್ತದೆ. ಮಧ್ಯಾಹ್ನದಿಂದ ಸಂಜೆವರೆಗೆ ಮೋಡ ಕವಿದ ವಾತಾವರಣ ಇರುತ್ತದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಸಾಮಾನ್ಯ ಬಿತ್ತನೆ ಗುರಿ 3,49,892 ಹೆಕ್ಟೇರ್ ಆಗಿದ್ದು, ಇದುವರೆಗೂ 1,63,546 ಹೆಕ್ಟೆರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ಶೇ.47 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಇದುವರೆಗೂ 4,400 ಅರ್ಜಿ ಸ್ವೀಕೃತಗೊಂಡಿದ್ದು, ರೈತರ ನೋಂದಣಿ ಕಾರ್ಯ ಪ್ರಗತಿಯಲ್ಲಿದೆ. ಯೂರಿಯಾ, ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಎಸ್‌ಎಸ್‌ಪಿ ರಸಗೊಬ್ಬರಗಳ ಒಟ್ಟು ದಾಸ್ತಾನು 64,950 ಟನ್‌ಗಳಲ್ಲಿ 36,954 ಟನ್ ರಸಗೊಬ್ಬರ ಮಾರಾಟ ಮಾಡಲಾಗಿದ್ದು, ಜು.2 ರಂತೆ 27,996 ಟನ್ ರಸಗೊಬ್ಬರ ಉಳಿಕೆ ದಾಸ್ತಾನು ಲಭ್ಯವಿದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.ಸದ್ಯಕ್ಕೆ ತುಂಗಭದ್ರಾ ಜಲಾಶಯದಲ್ಲಿ 9.313 ಟಿಎಂಸಿ ನೀರು ಹಾಗೂ ಹಿರೇಹಳ್ಳ ಜಲಾಶಯದಲ್ಲಿ 1.017 ಟಿಎಂಸಿ ನೀರು ಲಭ್ಯ ಇರುತ್ತದೆ. ಕೊಪ್ಪಳ ಜಿಲ್ಲೆಗೆ ತುಂಗಭದ್ರಾ ಜಲಾಶಯದಿಂದ ಮೂರು ತಿಂಗಳ ಅವಧಿಗೆ 0.54 ಟಿಎಂಸಿ ನೀರು ಬಿಡುಗಡೆ ಮಾಡಲು ಕೋರಿ ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಕಾರ್ಯದರ್ಶಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸನ್ನವೇಶ ಎದುರಿಸಲು ಜಿಲ್ಲಾಡಳಿತ ಸಿದ್ಧವಾಗಿದೆ. ಪ್ರಸಕ್ತ ಸಾಲಿನಲ್ಲಿ ಸಿಡಿಲು ಬಡೆದು ಮೃತಪಟ್ಟ ಕುಟುಂಬದವರಿಗೆ ಹಾಗೂ ಜಾನುವಾರು ಪ್ರಾಣ ಹಾನಿ ಪ್ರಕರಣಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ. ಮಳೆಯಿಂದ ಭಾಗಶಃ ಹಾನಿಯಾದ 44 ಮನೆಗಳಿಗೆ ಪರಿಹಾರ ಒದಗಿಸಿದೆ. ಕುಡಿಯುವ ನೀರು ಪೂರೈಕೆಗೆ ಅನುದಾನದ ಕೊರತೆ ಇಲ್ಲ ಎಂದು ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಮಹಮ್ಮದ್ ಜೀಲಾನಿ, ಜಿಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಪಂ ಯೋಜನಾ ನಿರ್ದೇಶಕ ಶ್ಯಾಮ್‌ಸುಂದರ್ ಕಾಂಬ್ಳೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಜಂಟಿ ಕೃಷಿ ನಿರ್ದೇಶಕ ಜಿ.ಡಿ ಕೃಷ್ಣಮೂರ್ತಿ, ಜಂಟಿ ತೋಟಗಾರಿಕೆ ನಿರ್ದೇಶಕ ಕೃಷ್ಣ ಉಕ್ಕುಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.