ಜಿಲ್ಲೆಯಲ್ಲಿ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಬೆಳೆಗಳ ರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.

ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಜಿಲ್ಲಾಧಿಕಾರಿ

ಕನ್ನಡಪ್ರಭ ವಾರ್ತೆ ಗದಗ

ಜಿಲ್ಲೆಯಲ್ಲಿ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಬೆಳೆಗಳ ರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಗದಗ ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲೆಯ ಮಳೆ ಪ್ರಮಾಣ, ಮಳೆ ಕೊರತೆ, ಅಂತರ್ಜಲ ಮಟ್ಟ, ಕೆರೆ ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಬರ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯಿರುವ ಗ್ರಾಮಗಳು ಹಾಗೂ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ, ಪರ್ಯಾಯ ನೀರಿನ ಮೂಲಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಕೆರೆಗಳು ಹಾಗೂ ಕುಡಿಯುವ ನೀರಿನ ಮೂಲಗಳನ್ನು ಗುರುತಿಸಿ, ಅವುಗಳಲ್ಲಿನ ಹೂಳು ತೆಗೆಯುವುದು, ಸ್ವಚ್ಛಗೊಳಿಸುವುದು ಹಾಗೂ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಂಡು ನೀರಿನ ಸಂಗ್ರಹ ಮತ್ತು ಲಭ್ಯತೆ ಹೆಚ್ಚಿಸಲು ಕ್ರಮವಹಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಮೂಲಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ದುರಸ್ತಿಯಲ್ಲಿರುವ ಕೊಳವೆಬಾವಿ, ಕೈಪಂಪ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತ್ವರಿತವಾಗಿ ದುರಸ್ತಿಗೊಳಿಸಬೇಕು ಎಂದು ಸೂಚಿಸಿದರು.

ಭೀಷ್ಮ ಕೆರೆ, ಡಂಬಳ ಹಾಗೂ ಜಂತ್ಲಿ ಶಿರೂರು ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ ಸಾಧ್ಯತೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಲಭ್ಯವಿರುವ ಮೇವು ಪ್ರಮಾಣ ಹಾಗೂ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಬೇಡಿಕೆಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್ ಸ್ಥಾಪನೆಗೆ ಕ್ರಮ ವಹಿಸಬೇಕು. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶುವೈದ್ಯಕೀಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸೂಚಿಸಿದರು.

ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು. ಕುಡಿಯುವ ನೀರು, ಜಾನುವಾರುಗಳ ಮೇವು, ಕೃಷಿ ಚಟುವಟಿಕೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಪರಿಹಾರ ಕಲ್ಪಿಸಬೇಕು. ಯಾವುದೇ ತುರ್ತು ಸಮಸ್ಯೆಗಳು ಎದುರಾದಲ್ಲಿ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ವರದಿಯನ್ನು ಕಾಲಕಾಲಕ್ಕೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಕೆ.ಆರ್., ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.