ಹೀಟ್ ಸ್ಟ್ರೋಕ್ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಜಾನಕಿ ಕೆ.ಎಂ.

| Published : Apr 03 2024, 01:34 AM IST

ಹೀಟ್ ಸ್ಟ್ರೋಕ್ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಜಾನಕಿ ಕೆ.ಎಂ.
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆ ಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಹೆಚ್ಚು ಜನಸಂದಣಿ, ಮಾರುಕಟ್ಟೆ ಪ್ರದೇಶ, ಕಟ್ಟಡ ನಿರ್ಮಾಣ, ನರೇಗಾ ಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸೂಕ್ತ ಮುನ್ನಚ್ಚರಿಕೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಹೆಚ್ಚು ಜನಸಂದಣಿ, ಮಾರುಕಟ್ಟೆ ಪ್ರದೇಶ, ಕಟ್ಟಡ ನಿರ್ಮಾಣ, ನರೇಗಾ ಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸೂಕ್ತ ಮುನ್ನಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿಯಾದ ಉಷ್ಣಾಂಶದಿಂದಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಆರೋಗ್ಯ ಇಲಾಖೆ ಸಲಹೆಗಳನ್ನು ವ್ಯಾಪಕವಾಗಿ ಜಾಗೃತಿ ಮೂಡಿಸಲು ಮುಂದಾಗಬೇಕು. ಈ ಬಗ್ಗೆ ಆಯಾ ತಾಲೂಕು ಹಂತದಲ್ಲಿ ಆಶಾ ಕಾರ್ಯಕರ್ತೆರ ಮೂಲಕ ಹೀಟ್ ಸ್ಟ್ರೋಕ್ ಎದುರಿಸಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಿಗೆ ಹೆಚ್ಚಿನ ಜನರು ಬರುತ್ತಾರೆ. ನರೇಗಾ ಯೋಜಯಡಿ 15 ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಟ್ ಸ್ಟ್ರೋಕ್ ಪರಿಣಾಮ ಬೀರದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಈ ಬಗ್ಗೆ ಐಇಸಿ ಚಟುವಟಿಕೆಗಳನ್ನು ಹೆಚ್ಚಿಗೆ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಅತಿಯಾದ ಉಷ್ಣಾಂಶದಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಕ್ಕಾಗಿ ಕ್ರಿಯಾಯೋಜನೆ ರೂಪಿಸಲು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಬಿಸಿ ಗಾಳಿಯಿಂದ ಜನರ ಆರೋಗ್ಯದ ಮೇಲೆ ಉಂಟಾಗುವ ಸಮಸ್ಯೆಗಳ ಬಗ್ಗೆ ಜಿಲ್ಲೆಯಲ್ಲಿ ನಡೆಯುವ ಜಾತ್ರೆ, ಸಂತೆಗಳಲ್ಲಿ ಕರಪತ್ರ, ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಬೇಕು. ಚೆಕ್‌ ಪೋಸ್ಟ್ ಗಳಲ್ಲಿ ದಿನದ 24 ಗಂಟೆಗಳ ಕಾಲ ಚುನಟ್ಣೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಗೂ ಸಹ ಒಆರ್‌ ಎಸ್‌ ಪಾಕೀಟ್‌ ನೀಡಲು ತಿಳಿಸಿದರು. ಏಪ್ರಿಲ್‌ ತಿಂಗಳಲ್ಲಿ ನರೇಗಾ ಕೆಲಸಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಅಂದಾಜು 30 ಸಾವಿರಕ್ಕೂ ಅಧಿಕ ಕೂಲಿಕಾರ್ಮಿಕರು ಕೆಲಸ ಮಾಡಲು ಬರುತ್ತಿದ್ದಾರೆ. ಅವರ ಆರೋಗ್ಯ ತಪಾಸಣೆಗೆ ಶಿಬಿರ ಹಮ್ಮಿಕೊಳ್ಳಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯತಗಲ್ಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಸುವರ್ಣ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿರಿದ್ದರು.ಆರೋಗ್ಯ ಸಲಹೆಗಳು:ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಕುಡಿಯಬೇಕು. ವೃದ್ಧರು, ಗರ್ಭಿಣಿಯರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಮುನ್ನ ವೈದ್ಯರ ಸಲಹೆ ಪಡೆಯಬೇಕು. ಮನೆಯ ಒಳಾಂಗಣದ ಕಿಟಕಿಗಳನ್ನು ತೆರೆದಿಡಬೇಕು. ತಣ್ಣಗಿರುವ ಪರದೆಗಳು, ಷಟರ್‌ಗಳನ್ನು ಬಳಸುವುದು ಉತ್ತಮ. ರಾತ್ರಿಯ ಸಮಯದಲ್ಲಿ ಕಿಟಕಿ ತೆರೆಯಬೇಕು. ಶರೀರ ತಣ್ಣಗಿಡಲು ಫ್ಯಾನ್ ಅಥವಾ ತೇವವಾದ ಬಟ್ಟೆ ಬಳಸಬಹುದು. ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ, ಟವೆಲ್ ಬಳಸಿ ಬಿಸಿಲಿನಿಂದ ರಕ್ಷಣೆ ಪಡೆಯಬೇಕು. ಉತ್ತಮ ಗಾಳಿ ತಣ್ಣಗಿರುವ ಪ್ರದೇಶದಲ್ಲಿ ಇರಬೇಕು. ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಹೋರಹೋಗುವುದನ್ನು ತಪ್ಪಿಸಬೇಕು. ದೇಹದ ಉಷ್ಣಾಂಶ ಹೆಚ್ಚಳ ಹಾಗೂ ಪ್ರಜ್ಞೆ ತಪ್ಪುವುದು, ಬೆವರುವಿಕೆ ಸ್ಥಗಿತವಾಗಿದ್ದರೆ ತಕ್ಷಣವೇ 108/102ಗೆ ಕರೆ ಮಾಡಬೇಕು.