ಇನ್ನು ಸ್ವಲ್ಪ ದಿನದಲ್ಲಿಯೇ ಮುಂಗಾರು ಆರಂಭವಾಗುತ್ತದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುತ್ತದೆ. ಈಡಿಸ್ ಜಾತಿಯ ಸೊಳ್ಳೆಗಳ ಕಡಿತದಿಂದ ಡೆಂಘೀ ಬರುತ್ತದೆ. ರಕ್ತ ಪರೀಕ್ಷೆಯಿಂದ ಮಾತ್ರ ಜ್ವರ ಪತ್ತೆ ಮಾಡಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಜೆಡ್. ಆರ್. ಮಕಾಂದಾರ ಹೇಳಿದರು.

ಹಿರೇಕೆರೂರು: ಇನ್ನು ಸ್ವಲ್ಪ ದಿನದಲ್ಲಿಯೇ ಮುಂಗಾರು ಆರಂಭವಾಗುತ್ತದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುತ್ತದೆ. ಈಡಿಸ್ ಜಾತಿಯ ಸೊಳ್ಳೆಗಳ ಕಡಿತದಿಂದ ಡೆಂಘೀ ಬರುತ್ತದೆ. ರಕ್ತ ಪರೀಕ್ಷೆಯಿಂದ ಮಾತ್ರ ಜ್ವರ ಪತ್ತೆ ಮಾಡಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಜೆಡ್. ಆರ್. ಮಕಾಂದಾರ ಹೇಳಿದರು.ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಘೀ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡೆಂಘೀ ವೈರಲ್ ಜ್ವರವಾಗಿದ್ದು, ಸೊಳ್ಳೆ ಕಡಿತದಿಂದ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಡೆಂಘೀ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ನಡೆಸಲಾಗುತ್ತಿದೆ. ಸಾಮಾನ್ಯವಾಗಿ ಡೆಂಘೀ ಬಾಧಿತರಲ್ಲಿ ಕಣ್ಣುಗಳ ಹಿಂದೆ ನೋವು ಕಾಣಿಸಿಕೊಳ್ಳುತ್ತದೆ. ತೀವ್ರ ತಲೆನೋವು, ಸ್ನಾಯು ಮತ್ತು ಕೀಲು ನೋವು, ವಾಕರಿಕೆ ಮತ್ತು ವಾಂತಿ ಉಂಟಾಗುತ್ತದೆ. ಹಸಿವು ಕಡಿಮೆಯಾಗುತ್ತದೆ. ಜ್ವರ ಬಂದವರು ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳ ನಿರ್ಮೂಲನೆ, ಮನೆಯ ಸುತ್ತಮುತ್ತ ಮಳೆಯ ನೀರು ನಿಲ್ಲದಂತೆ ಜಾಗೃತೆ ವಹಿಸುವುದು. ಚರಂಡಿಗಳನ್ನು ಸ್ವಚ್ಛಗೊಳಿಸುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ಕಡಿಮೆ ಮಾಡಬಹುದು. ಮನೆಗಳಲ್ಲಿ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದರು. ಜಿಲ್ಲಾ ಆರೋಗ್ಯ ನೀರಿಕ್ಷಣಾಧಿಕಾರಿ ರವಿ ಕೆ.ಆರ್. ಮಾತನಾಡಿ, ಮನೆ ಸುತ್ತಮುತ್ತಲಿನ ಪ್ರದೇಶದ ಘನತ್ಯಾಜ್ಯದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಬ್ಯಾರಲ್, ಸಿಮೆಂಟ್ ಟ್ಯಾಂಕ್ ಇನ್ನಿತರ ಕಡೆಗಳಲ್ಲಿನ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುವುದನ್ನು ತಡೆಗಟ್ಟುವುದರಿಂದ ಡೆಂಘೀ ಹರಡದಂತೆ ನಿಯಂತ್ರಿಸಬಹುದು. ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.ಈ ವೇಳೆ ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ರವಿ ಕೆ.ಆರ್., ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಶಿವಪ್ರಸಾದ ಬಿ.ಎಸ್. , ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಚ್. ದುಗ್ಗತ್ತಿ , ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಮಪ್ಪ ಆರ್. ಸದರಪ್ಪನವರ, ರಾಮಚಂದ್ರಪ್ಪ , ಎಸ್.ಟಿ. ಎಸ್. ಷಣ್ಮುಖಪ್ಪ ಪಿ.ಬಿ., ಬಸನಗೌಡ ಪಾಟೀಲ್, ಮಲ್ಲಿಕಾರ್ಜುನ ಮುದಿಗೌಡ್ರ, ಮಂಜುನಾಥ ತಳವಾರ, ನಾಗರಾಜ ಪ್ಯಾಟಿ ಮತ್ತು ಇತರರು ಇದ್ದರು.