ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಕನ್ನಡಪ್ರಭ ವಾರ್ತೆ ಕಾರವಾರ

ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ನೆರೆಯಿಂದ ಯಾವುದೇ ಅನಾಹುತಗಳಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹಾಗೂ ಈ ಅವಧಿಯಲ್ಲಿ ಕಂಡುಬರುವ ಸಮಸ್ಯೆ ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ದರಾಗಿರುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಎಲ್ಲಾ ತಹಶೀಲ್ದಾರ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ 24x7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಹೆಸ್ಕಾಂ, ಬಿ.ಎಸ್.ಎನ್.ಎಲ್ ಕಚೇರಿಯ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸುವಂತೆ ತಿಳಿಸಿದರು.


ರಾಜ್ಯ ವಿಪತ್ತು ಉಪಶಮನ ನಿಧಿ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಪಂ.ರಾಜ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಾದೇಶ ನೀಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಈ ತಿಂಗಳೊಳಗೆ ಮುಕ್ತಾಯಗೊಳಿಸುವಂತೆ ಹಾಗೂ ರಸ್ತೆಗಳ ಪಕ್ಕದಲ್ಲಿ ಚರಂಡಿ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಹಾಗೂ ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಎಚ್ಚರವಹಿಸಬೇಕು, ಹೆದ್ದಾರಿಯಲ್ಲಿನ ಅಪಾಯಕಾರಿ ಪ್ರದೇಶಗಳಲ್ಲಿ ಸೂಕ್ತ ಎಚ್ಚರಿಕೆ ಫಲಕ, ಬ್ಯಾರಿಕೇಡ್ ಸೇರಿದಂತೆ ಅಗತ್ಯ ರಕ್ಷಣಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಶಿರೂರುನಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಈ ತಿಂಗಳ ಅಂತ್ಯದಲ್ಲಿ ಮುಕ್ತಾಯಗೊಳಿಸಲಾಗುವುದು, ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮಳೆ ನೀರು ನಿಲ್ಲದಂತೆ ಡ್ರಜ್ಜಿಂಗ್ ಕೈಗೊಳ್ಳಲಾಗುವುದು. ಅಪಾಯಕಾರಿ ಸ್ಥಳಗಳಲ್ಲಿ ನೋ ಪಾರ್ಕಿಂಗ್ ಝೋನ್ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ನೌಕಾನೆಲೆ ವ್ಯಾಪ್ತಿಯ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಈಗಾಗಲೇ ಕೈಗೊಂಡಿರುವ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ಮತ್ತು ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು ಮತ್ತು ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಕುರಿತಂತೆ ಮತ್ತು ಶಿಥಿಲ ಕಟ್ಟಡಗಳಿದ್ದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, ಸುರಕ್ಷತೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವರದಿ ನೀಡಬೇಕು. ಈ ಪ್ರದೇಶಗಳಲ್ಲಿ ಯಾವುದೇ ಅವಘಢಗಳು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ ಅವರು, ಜಿಲ್ಲೆಯಲ್ಲಿನ ಸೇತುವೆಗಳು, ಕಾಲು ಸಂಕಗಳ ದೃಢತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಿದರು.

ಜಿಲ್ಲೆಯ ಸಾರ್ವಜನಿಕರು ಯಾವುದೇ ವಿಪತ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆ 94835 11015 ನ್ನು 24x7 ಸಂಪರ್ಕಿಸಿ ಅಗತ್ಯ ನೆರವು ಪಡೆಯಬಹುದು. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತೆರದಿರುವ ತಾಲೂಕು ಸಹಾಯವಾಣಿ ಸಂಖ್ಯೆಯ ವಿವರಗಳನ್ನು ಸಾರ್ವಜನಿಕರ ಮಾಹಿತಿಗೆ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ವರ್ಚುವಲ್ ಮೂಲಕ ಜಿಪಂ ಸಿಇಓ ಡಾ. ದಿಲೀಷ್ ಶಶಿ, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ತಾಪಂ ಇಒಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.