ಪ್ರವಾಹ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ವಹಿಸಿ

| Published : Jun 27 2025, 12:48 AM IST

ಪ್ರವಾಹ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸ್ತುತ ಮಾನ್ಸೂನ್ ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗುವಂತೆ ಜಿಪಂ ಸಿಇಒ ಮೋನಾ ರೋತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರಸ್ತುತ ಮಾನ್ಸೂನ್ ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗುವಂತೆ ಜಿಪಂ ಸಿಇಒ ಮೋನಾ ರೋತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರವಾಹ ಪರಿಸ್ಥಿತಿ ಹಾಗೂ ಪ್ರವಾಹ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾವೇರಿ ಹಾಗೂ ಕಬಿನಿ ಜಲಾನಯನ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬೀಳುತ್ತಿದೆ. ಜಲಾಶಯಗಳಿಂದ ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರನ್ನು ಹೊರಬಿಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನದಿತೀರದಲ್ಲಿ ಪ್ರವಾಹ ಉಂಟಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಪ್ರವಾಹ ಸಂದರ್ಭವನ್ನು ಸೂಕ್ತವಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ಇದ್ದು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಬೇಕು. 24*7 ಸಹಾಯವಾಣಿ ಕಾರ್ಯವೈಖರಿಯನ್ನು ಚುರುಕುಗೊಳಿಸಬೇಕೆಂದು ನಿರ್ದೇಶನ ನೀಡಿದರು.

ಕೊಳ್ಳೇಗಾಲ ತಾಲೂಕಿನಲ್ಲಿ ಕಾವೇರಿ ನದಿದಂಡೆಯಲ್ಲಿರುವ ದಾಸನಪುರ, ಹಳೇ ಹಂಪಾಪುರ, ಹರಳೆ, ಅಗ್ರಹಾರ, ಯಡಕುರಿಯ, ಧನಗೆರೆ, ಸರಗೂರು ಹಾಗೂ ಸುವರ್ಣಾವತಿ ನದಿತೀರದಲ್ಲಿರುವ ಯಳಂದೂರು ತಾಲೂಕಿನ ಅಂಬಳೆ, ಮದ್ದೂರು, ಗಣಿಗನೂರು, ಮಾಂಬಳ್ಳಿ ಮತ್ತು ಚಾಮರಾಜನಗರ ತಾಲೂಕಿನ ಚಂದಕವಾಡಿ, ಆಲೂರು, ಸರಗೂರು, ನಲ್ಲೂರು ಮೋಳೆ, ಹೆಬ್ಬಸೂರು, ಕೂಡ್ಲೂರು ಗ್ರಾಮಗಳಲ್ಲಿ ಕಳೆದ ಬಾರಿಯು ಪ್ರವಾಹ ಉಂಟಾಗಿತ್ತು. ಈ ಬಾರಿ ಪ್ರವಾಹ ಪರಿಸ್ಥಿತಿ ಎದುರಾದರೇ ಕಾಳಜಿ ಕೇಂದ್ರಗಳನ್ನು ತೆರೆದು ಜನರನ್ನು ಸ್ಥಳಾಂತರಿಸಿ ಮೂಲಸೌಲಭ್ಯ ಒದಗಿಸಲು ಮುಂದಾಗುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಳೆಗಾಲದಲ್ಲಿ ಅತಿವೃಷ್ಠಿಯಿಂದಾಗಿ ಸಂಭವಿಸುವ ಅನಾಹುತಗಳನ್ನು ತಪ್ಪಿಸಲು ಶಿಥಿಲಗೊಂಡಿರುವ ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು, ವಸತಿ ನಿಲಯಗಳು, ರಸ್ತೆ, ಸೇತುವೆಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ನೀರು ಕಲುಷಿತಗೊಳ್ಳದಂತೆ ನಿಗಾ ವಹಿಸಬೇಕು. ಕುಡಿಯುವ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷಿಸಿ ನೀರಿನ ಶುದ್ಧತೆ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

ಎಸ್ಪಿ ಡಾ.ಬಿ.ಟಿ.ಕವಿತ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಪ್ರವಾಹ ಉಂಟಾಗಬಹುದಾದ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸಿಬ್ಬಂದಿ ನಿಯೋಜಿಸಲಾಗಿದೆ. ಜನರನ್ನು ನದಿಗೆ ಇಳಿಯದಂತೆ ತಿಳಿವಳಿಕೆ ನೀಡಲಾಗುತ್ತಿದೆ. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತವಾಗಿ ಕಾಳಜಿಕೇಂದ್ರಕ್ಕೆ ಸೇರಿಸಲಾಗುತ್ತಿದೆ. ಒಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರವಾಹ ಪರಿಸ್ಥಿತಿ ನಿರ್ವಹಿಸಲಾಗುತ್ತಿದೆ ಎಂದರು.ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಮಾತನಾಡಿ, ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಗ್ರಾಪಂ ಮಟ್ಟದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ವಿಪತ್ತು ನಿರ್ವಹಣಾ ಸಮಿತಿಯನ್ನು ಸಕ್ರಿಯಗೊಳಿಸಬೇಕು. ಪ್ರವಾಹ ಎದುರಿಸಲು ಗ್ರಾಪಂ ಅಧಿಕಾರಿಗಳು ಗ್ರಾಮಗಳಲ್ಲಿ ಟಾಂ ಟಾಂ ಹೊಡೆಸಬೇಕು. ಅಧಿಕ ಮಳೆ ನೀರಿನಿಂದ ಕೆರೆಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಚರಂಡಿ ಹೂಳು ತೆಗೆಸಿ ನೀರು ಸರಾಗವಾಗಿ ಹರಿಯಲು ಕ್ರಮ ವಹಿಸಬೇಕು. ಈ ಬಗ್ಗೆ ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ತಾಪಂ ಇಒಗಳು ಸೂಚನೆ ನೀಡಬೇಕು ಎಂದರು.

ಮಳೆಗಾಲದಲ್ಲಿ ಜನಸಾಮಾನ್ಯರಿಗೆ ಸಾಂಕ್ರಾಮಿಕ ರೋಗಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳಾಗದಂತೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳುವ ಜನರಿಗೆ ಆರೋಗ್ಯ ಚಿಕಿತ್ಸಾ ಸೇವೆಗಳನ್ನು ನೀಡಬೇಕು. ಗಾಳಿ-ಮಳೆಯಿಂದ ಯಾವುದೇ ಜೀವಹಾನಿಯಾಗಬಾರದು. ಮಳೆಗಾಲದಲ್ಲಿ ವಿದ್ಯುತ್ ಕಂಬಗಳು, ತಂತಿಗಳಿಂದ ಜನ-ಜಾನುವಾರುಗಳಿಗೆ ಯಾವುದೇ ಅವಘಡಗಳು ಸಂಭವಿಸಿ ಸಮಸ್ಯೆಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಈಗಿನಿಂದಲೇ ಎಚ್ಚರಿಕೆ ವಹಿಸಿ ಕಾರ್ಯೋನ್ಮುಖರಾಗುವಂತೆ ತಿಳಿಸಿದರು. ಜಿಪಂ ಉಪಕಾರ್ಯದರ್ಶಿ ಡಿ.ಸಿ.ಶೃತಿ, ಉಪವಿಭಾಗಾಧಿಕಾರಿ ಬಿ.ಆರ್.ಮಹೇಶ್, ತಹಸೀಲ್ದಾರ್‌ಗಳಾದ ಗಿರಿಜ, ಬಸವರಾಜು, ರಮೇಶ್ ಬಾಬು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಚಿದಂಬರ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಶಾಂತ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.