ಸಾರಾಂಶ
ಸಂಭವನೀಯ ಪ್ರವಾಹ ಪೀಡಿತ ಹಾಗೂ ಭೂಕುಸಿತ ಸ್ಥಳಗಳಲ್ಲಿ ಮುಂಜಾಗ್ರತೆಯ ಕ್ರಮವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಎಚ್ಚರದಿಂದಿರಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದರು.
ಅಧಿಕಾರಿಗಳಿಗೆ ಸೂಚನೆ । ವಿಪತ್ತು ಪ್ರಾಧಿಕಾರ ಸಭೆ
ಕನ್ನಡಪ್ರಭ ವಾರ್ತೆ ಹಾಸನಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿರುವುದರಿಂದ ಭಾರಿ ಮಳೆಯಿಂದ ಉಂಟಾಗುವ ಸಂಭವನೀಯ ಪ್ರವಾಹ ಪೀಡಿತ ಹಾಗೂ ಭೂಕುಸಿತ ಸ್ಥಳಗಳಲ್ಲಿ ಮುಂಜಾಗ್ರತೆಯ ಕ್ರಮವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಎಚ್ಚರದಿಂದಿರಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿ, ಯಾವುದೇ ರೀತಿಯ ಜನ, ಜಾನುವಾರು ಹಾನಿಯಾಗದಂತೆ ನಿಗಾವಹಿಸುವಂತೆ ತಿಳಿಸಿದರಲ್ಲದೆ, ಸಿಡಿಲಿನಿಂದ ಸಾವು ಸಂಭವಿಸುವುದನ್ನು ತಪ್ಪಿಸಲು ಜನರು ಮುನ್ನೆಚ್ಚರಿಕೆವಹಿಸಿ ಅನುಸರಿಸಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ರಾಜಕಾಲುವೆಗಳ ಹೂಳು ತೆಗೆದು ಸ್ವಚ್ಛತೆಗೆ ಕ್ರಮ, ವಿದ್ಯುತ್ ಕಂಬಗಳು ಹಾಗೂ ತಂತಿಗಳು ಸುವ್ಯವಸ್ಥಿತವಾಗಿರುವ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರು ಮೇವಿಗೆ ಯಾವುದೇ ಕೊರತೆಯಿಲ್ಲ, ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ದೊರಕುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ರೈತ ಸಂಪರ್ಕ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ದಾಸ್ತಾನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಮಳೆಗಾಲದ ಸಂದರ್ಭದಲ್ಲಿ ಕುಡಿಯುವ ನೀರು ಕಲುಷಿತಗೊಂಡು ಯಾವುದೇ ಆರೋಗ್ಯದ ಸಮಸ್ಯೆಗಳು ಉಂಟಾಗದಂತೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಮಾತನಾಡಿ, ಪ್ರತಿ ೧೫ ದಿನಗಳಿಗೊಮ್ಮೆ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.