ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಪೌರ ಕಾರ್ಮಿಕರಿಗೆ ಸಮವಸ್ತ್ರ, ಸುರಕ್ಷತಾ ಪರಿಕರಗಳು, ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸುವುದು, ಇ.ಎಸ್.ಐ, ಪಿ.ಎಫ್ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವುದು, ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ವ್ಯವಸ್ಥೆಗೆ ಕ್ರಮವಹಿಸಲು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಪೌರಕಾರ್ಮಿಕರಿಗೆ ಆದ್ಯತೆ ಮೇರೆಗೆ ನಿವೇಶನಗಳನ್ನು ಒದಗಿಸುವುದು, ಮೂಲಭೂತ ಸೌಕರ್ಯಗಳನ್ನು ಕಲ್ಪಸುವುದರ ಜೊತೆಗೆ ಅವರ ಸಮಸ್ಯೆಗಳನ್ನು ಪರಿಹರಿಸಲು ಮುತುವರ್ಜಿ ವಹಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ. ರಘು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಪೌರ ಕಾರ್ಮಿಕರಿಗೆ ಸಮವಸ್ತ್ರ, ಸುರಕ್ಷತಾ ಪರಿಕರಗಳು, ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸುವುದು, ಇ.ಎಸ್.ಐ, ಪಿ.ಎಫ್ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವುದು, ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ವ್ಯವಸ್ಥೆಗೆ ಕ್ರಮವಹಿಸಲು ತಿಳಿಸಿದರು.ಕೆ.ಎಸ್.ಆರ್‌.ಟಿ.ಸಿ. ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ಕೆ ಅಗತ್ಯವಿರುವಷ್ಟು ಸಿಬ್ಬಂದಿ ನೇಮಕ ಮಾಡಿಕೊಂಡಿಲ್ಲ, ಕಾರ್ಮಿಕರಿಗೆ ಇಎಸ್‌ಐ, ಪಿ.ಎಫ್ ಪಾವತಿ ಮಾಡುತ್ತಿಲ್ಲದಿರುವುದು ಕಂಡುಬಂದಿದೆ. ಅಲ್ಲದೆ ಕೇವಲ ೬೦೦೦ ರೂಗಳನ್ನು ನಗದು ರೂಪದಲ್ಲಿ ನೀಡುತ್ತಿದ್ದಾರೆ. ಅಧಿಕಾರಿಗಳು ಏಜೆನ್ಸಿಯೊಂದಿಗೆ ಶಾಮೀಲಾಗಬೇಡಿ ಇಂತಹ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದರು. ನೇರಪಾವತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಮರಣ ಹೊಂದಿದರೆ ಅವರ ಅವಲಂಬಿತರಿಗೆ ಉದ್ಯೋಗ ಕಲ್ಪಸಬೇಕು ಹಾಸನ ಜಿಲ್ಲೆಯಲ್ಲಿ ೩೯ ಜನರಿದ್ದರೆ ಇದರ ಬಗ್ಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ವಚ್ಚತಾ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲು ಅವಕಾಶವಿದೆ ಇದರ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಲು ಹೆಚ್ಚಿನ ಗಮನಹರಿಸಿ ಎಂದು ತಿಳಿಸಿದರಲ್ಲದೆ, ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಕ್ರಮವಹಿಸಿ, ಜಿಲ್ಲಾ ಸಮಿತಿಯಿಂದ ಕಾರ್ಪೋರೇಷನ್‌ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವವರಿಗೆ ಕೇವಲ ೬ ಸಾವಿರ ರೂಗಳನ್ನು ನಗದು ರೂಪದಲ್ಲಿ ಹಣ ಪಾವತಿ ಮಾಡುತ್ತಿದ್ಧಾರೆ ಎಂದು ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಬ್ಯಾಂಕ್ ಖಾತೆ ಪರಿಶೀಲನೆ ನಡೆಸಿ ಇ.ಎಸ್.ಐ.ಮತ್ತು ಪಿ.ಎಫ್, ಪಾವತಿಯಾಗಿದೆಯ ಪರಿಶೀಲನೆ ಮಾಡಿ ಐದು ದಿನದೊಳಗೆ ವರದಿ ನೀಡುವಂತೆ ಸೂಚಿಸಿದರಲ್ಲದೆ, ಏಜೆನ್ಸಿ ವಿರುದ್ಧ ಪ್ರಕರಣ ದಾಖಲು ಮಾಡಿ ಜೊತೆಗೆ ಸದರಿ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸ್ವಚ್ಚತಾ ಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನ ಜಮಾ ಆಗುತ್ತಿದೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೂಚಿಸಿದರು. ಕಾರ್ಮಿಕರ ಆರೋಗ್ಯ ತಪಾಸಣೆ ಕಾಲಕಾಲಕ್ಕೆ ಆಗುತ್ತಿದೆಯೇ ಎಂದು ಪರಿಶೀಲನೆ ಮಾಡುವಂತೆ ಯೋಜನ ನಿರ್ದೇಶಕರಿಗೆ ಸೂಚಿಸಿದರು.ಕೊಣನೂರಿನಲ್ಲಿ ಸರ್ವೆ ನಂಬರ್ ೧೬೩ ರಲ್ಲಿ ಮನೆ ಕಟ್ಟಿಕೊಂಡು ೬೦ ವರ್ಷದಿಂದ ವಾಸಮಾಡುತ್ತಿರುವ ೧೩೧ ಕುಟುಂಬಗಳು ಅಕ್ರಮ ಸಕ್ರಮದಲ್ಲಿ ೯೪ ಸಿ,೯೪ ಸಿಸಿ ಯಲ್ಲಿ ಅರ್ಜಿ ಸಲ್ಲಿಸಿದ್ದಾರ ಕಂದಾಯ ಗ್ರಾಮ ಮಾಡಲು ಪರಿಶೀಲಿಸಿ ಎಂದು ಉಪ ವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಭಾಗವಹಿಸಿಲ್ಲ ಅವರಿಗೆ ಮಾಹಿತಿ ನೀಡಿಲ್ಲ, ಏಜೆನ್ಸಿ ಅವರಿಗೆ ಷೋಕಾಸ್ ನೋಟಿಸ್ ನೀಡುವಂತೆ ಸೂಚಿಸಿದರು. ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಸಬಲರಾಗುವಂತೆ ಮಾಡಬೇಕು ಈ ನಿಟ್ಟಿನಲ್ಲಿ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರುಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಸುನಾಯ ಅವರು ಮಾತನಾಡಿ ಹಾಸನ, ಸಕಲೇಶಪುರ, ಚನ್ನರಾಯಪಟ್ಟಣ ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲ ತಾಣಗಳ ಮೂಲಕವು ದೂರುಗಳು ಬಂದಿವೆ. ಆಯೋಗದಿಂದ ಈಗಾಗಲೇ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲು ಸಂಬಂಧಿಸಿದವರಿಗೆ ಪತ್ರದ ಮೂಲಕ ತಿಳಿಸಿದ್ದು, ನೆನಪೋಲೆ ಕೂಡ ಹಾಕಲಾಗಿದೆ ಎಂದರು. ಸಂವಾದ ಕಾರ್ಯಕ್ರಮದಲ್ಲಿ ಕಂಡು ಬಂದ ಮಾಹಿತಿಯಂತೆ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ರೆಗ್ಯುಲರ್‌ ಆರೋಗ್ಯ ತಪಾಸಣೆ ಮಾಡಿಸಬೇಕು, ವರ್ಷಕ್ಕೊಮ್ಮೆ ಮಾಸ್ಟರ್‌ ಚೆಕ್‌ ಅಪ್ ಮಾಡಿಸಬೇಕು ಅದು ಆಗಿಲ್ಲ ಎಂದರಲ್ಲದೆ, ಇಎಸ್.ಐ, ಪಿಎಫ್ ಪಾವತಿ, ಸಂಕಷ್ಟ ಭತ್ಯೆ, ಸರ್ಕಾರದಿಂದ ದೊರಕುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಂ ಶುಕ್ಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಆಪ್ತ ಕಾರ್ಯದರ್ಶಿ ರಘು ಉಪಸ್ಥಿತರಿದ್ದರು.