ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕಳೆದ ವಾರದಿಂದ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗುತ್ತಿದ್ದು ಜಿಲ್ಲೆಯ ಕೆರೆ, ಕುಂಟೆಗಳು, ಜಲಾಶಯಗಳು ಕೊಡಿ ಹೋಗುತ್ತಿವೆ. ನೀರಿನ ತಾಣಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಳೆ ಹಾನಿಯ ವಿವರವನ್ನು ಪಡೆದು ನಂತರ ಮಾತನಾಡಿ,ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ 87 ಮಿ.ಮೀಟರ್ ಮಳೆಯಾಗಿದೆ ಎಂದರು.
ಕೋಡಿ ಹರಿದ ಕೆರೆಗಳುವಾಡಿಕೆ ಪ್ರಕಾರ ಕಳೆದ 7 ದಿನಗಳಲ್ಲಿ 25 ಮಿ.ಮೀಟರ್ ಮಳೆ ಆಗಬೇಕಾಗಿತ್ತು. ಕಳೆದ ರಾತ್ರಿ ಬಿದ್ದ ಮಳೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಜಕ್ಕಲಮಡಗು, ಗುಡಿಬಂಡೆಯ ಅಮಾನಿ ಭೈರಸಾಗರ ಕೆರೆ ಕೊಡಿ ಹೋಗುತ್ತಿವೆ. ಬಾಗೇಪಲ್ಲಿಯ ಚಿತ್ರಾವತಿ ಜಲಾಶಯ ಬಹುತೇಕ ಪೂರ್ಣಗೊಂಡಿದ್ದು, ಒಂದೆರಡು ದಿನಗಳಲ್ಲಿ ಕೊಡಿ ಹೋಗುವ ಸಾಧ್ಯತೆ ಇದೆ. ಮುಂದಿನ ಒಂದೆರಡು ದಿನಗಳಲ್ಲಿ ಮಳೆ ಪ್ರಮಾಣ ಜಾಸ್ತಿ ಆಗಲಿದೆ. ಉತ್ತರ ಪಿನಾಕಿನಿ ನದಿಯು ಉಕ್ಕಿ ಹರಿಯುತ್ತಿದೆ. ಬಹುತೇಕ ಜಿಲ್ಲೆಯ ಕೆರೆಗಳು, ಕುಂಟೆಗಳು ತುಂಬಿ ಹರಿಯುತ್ತಿವೆ ಎಂದರು.
ಮಳೆ ಹಾನಿ ಅವಗಡಗಳನ್ನು ತಡೆಗಟ್ಟಲು ಸಹಾಯವಾಣಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸಬೇಕು. ಮಳೆಯಿಂದ ಹಾನಿಗೊಳಗಾದ ಮನೆಗಳ ಮಾಲಿಕರಿಗೆ ಹಾಗೂ ಬೆಳೆ ಹಾನಿಗೆ ಒಳಗಾದ ಸಂತ್ರಸ್ತ ರೈತರಿಗೆ ಪರಿಹಾರ ನೀಡಲು ತ್ವರಿತ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಅಕ್ಟೋಬರ್ 1 ರಿಂದ ಈ ವರೆಗೆ ಗೌರಿಬಿದನೂರು ತಾಲ್ಲೂಕಿನಲ್ಲಿ 15 ಮನೆಗಳಿಗೆ ಹಾನಿಯಾಗಿದ್ದು, 5 ಮನೆಗಳಿಗೆ ಪರಿಹಾರ ನೀಡಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 10 ಮನೆಗಳು ಹಾನಿಯಾಗಿದ್ದು, 5 ಮನೆಗಳ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ. ಬಾಗೇಪಲ್ಲಿ ತಾಲ್ಲೂಕಿನಲ್ಲಿ 8 ಮನೆಗಳಿಗೆ ಹಾನಿಯಾಗಿದ್ದು, 5 ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ. ಚಿಂತಾಮಣಿ ತಾಲ್ಲೂಕಿನಲ್ಲಿ 04, ಚೇಳೂರು ತಾಲ್ಲೂಕಿನಲ್ಲಿ 04, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 04 ಮನೆಗಳು ಹಾನಿಯಾಗಿದೆ. ಗುಡಿಬಂಡೆ ತಾಲ್ಲೂಕಿನಲ್ಲಿ 12 ಮನೆಗಳು ಹಾನಿಯಾಗಿದ್ದು, 7 ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ ಎಂದರು.42.88 ಹೆ. ಪ್ರದೇಶದಲ್ಲಿ ಬೆಳೆ ನಷ್ಟಮಳೆ ಹಾನಿಯಿಂದ ಅಕ್ಟೋಬರ್ 1 ರಿಂದ 21 ರವಗೆ 42.88 ಹೆಕ್ಟೇರ್ ಪ್ರದೇಶಗಳ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ನೆನ್ನೆ ಬಿದ್ದ ಬಾರಿ ಮಳೆಗೆ ಹಾನಿಯಾಗಿರುವ ಬೆಳೆ ಮಾಹಿತಿಯನ್ನು ತ್ವರಿತವಾಗಿ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಜಂಟಿ ಸಮೀಕ್ಷೆ ಮಾಡಿ ಪರಿಹಾರ ತಂತ್ರಾಂಶದಲ್ಲಿ ಮಾಹಿತಿ ನಮೂಧಿಸುವ ಮೂಲಕ ಪರಿಹಾರ ಕ್ರಮಕ್ಕೆ ತುರ್ತಾಗಿ ಸ್ಪಂದಿಸಲು ಸಂಬಂದಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ, ಜಿಲ್ಲೆಯ ಎಲ್ಲಾ ತಹಸೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.