ಸಾರಾಂಶ
ಗದಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅ.26 ಹಾಗೂ 27 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಯಾವುದೇ ಲೋಪ ದೋಷಗಳಿಲ್ಲದಂತೆ ನಡೆಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಬುಧವಾರ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅ. 26 ರಂದು ಜರುಗುವ ಕಡ್ಡಾಯ ಕನ್ನಡ ಪರೀಕ್ಷೆಯ ದಿನದಂದು ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 1.30 ರಿಂದ ಸಂಜೆ 5.30ರ ವರೆಗೆ ಹಾಗೂ ಅ. 27 ರಂದು ಜರುಗುವ ಸ್ಪರ್ಧಾತ್ಮಕ ಪರೀಕ್ಷೆಯ ದಿನದಂದು ಬೆಳಗ್ಗೆ 8.30 ರಿಂದ ಸಂಜೆ 5.30ರ ವರೆಗೆ ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶ ನಿಷೇಧಿತ ಪ್ರದೇಶವೆಂದು ಘೋಷಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಸಮಯ ಪರಿಪಾಲನೆ ಅತ್ಯವಶ್ಯಕವಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ತಪ್ಪದೇ ಗೋಡೆ ಗಡಿಯಾರ ಅಳವಡಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ಜರುಗಲು ವೀಕ್ಷಕರು, ಜಿಲ್ಲಾ ಮಟ್ಟದ ತ್ರಿಸದಸ್ಯ ಸಮಿತಿ ಹಾಗೂ ಮಾರ್ಗಾಧಿಕಾರಿ ನೇಮಿಸಲಾಗಿದ್ದು, ನಿಗದಿಪಡಿಸಿದ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ., ಉಪವಿಭಾಗಾಧಿಕಾರಿ ಗಂಗಪ್ಪ, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಪ್ಪ ಕುರ್ತಕೋಟಿ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ರುದ್ರಗೌಡ, ಅಂಗವಿಕಲ ಕಲ್ಯಾಣ ಇಲಾಖೆಯ ಅಧಿಕಾರಿ ಮಹಾಂತೇಶ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.