ಜಿಲ್ಲೆಯಲ್ಲಿ ನ. 1ರಂದು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು.
ಕನ್ನಡಪ್ರಭ ವಾರ್ತೆ ಗದಗ
ಜಿಲ್ಲೆಯಲ್ಲಿ ನ. 1ರಂದು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಯಾವುದೇ ಲೋಪದೋಷಗಳಿಲ್ಲದೆ ಯಶಸ್ವಿಗೊಳಿಸಲು ವಿವಿಧ ಸಮಿತಿ ರಚಿಸಲಾಗಿದ್ದು, ಸಮಿತಿಯ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿ ವರ್ಷದಂತೆ ಈ ಬಾರಿಯೂ ಅ. 31 ಹಾಗೂ ನ. 1 ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು.ವೇದಿಕೆ ಕಾರ್ಯಕ್ರಮದ ಸ್ಥಳದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಶಿಷ್ಟಾಚಾರದ ಅನ್ವಯ ಆಸನಗಳ ವ್ಯವಸ್ಥೆ, ವೇದಿಕೆ ನಿರ್ವಹಣೆ ಹಾಗೂ ಗಣ್ಯರಿಗೆ ಸನ್ಮಾನಿಸುವ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು. ನ. 1ರಂದು ಬೆಳಗ್ಗೆ 7.30ಕ್ಕೆ ಗದಗ-ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜು ಆವರಣದಿಂದ ಜಾನಪದ ಕಲಾತಂಡಗಳ ಸಮೇತ ತಾಯಿ ಭುವನೇಶ್ವರಿಯ ಭವ್ಯ ಮೆರವಣಿಗೆ ಆರಂಭವಾಗಲಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬೆಳಗ್ಗೆ 9ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರಬೇಕು ಎಂದು ತಾಕೀತು ಮಾಡಿದರು.
ಪೊಲೀಸ್ ಪಡೆ, ಗೃಹರಕ್ಷಕ ದಳ ಹಾಗೂ ಭಾರತ ಸೇವಾದಳದಿಂದ ಆಕರ್ಷಕ ಪಥಸಂಚಲನ ಜರುಗಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಾಧನೆ ಬಿಂಬಿಸುವ ಸ್ತಬ್ಧಚಿತ್ರಗಳ ಪ್ರದರ್ಶನವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಶಿಷ್ಟಾಚಾರದ ಅನ್ವಯ ಅತಿಥಿ ಗಣ್ಯರ ಆಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣ ಕಾರ್ಯ ಕೈಗೊಳ್ಳಬೇಕು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.