ಸಾರಾಂಶ
ಕನ್ನಡಪ್ರಭ ವಾರ್ತೆ ರಾಯಚೂರು
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶೈಕ್ಷಣಿಕ ವರ್ಷದ ಆರಂಭದಿಂದ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಪಂ ಸಿಇಒ ಈಶ್ವರ್ ಕಾಂದೂ ಸೂಚಿಸಿದರು.ಸ್ಥಳೀಯ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆಸಿದ ಶಿಕ್ಷಣ ಇಲಾಖೆಯ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರಂತರವಾಗಿ ಶಾಲೆಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ಶಾಲೆಗಳಲ್ಲಿ ಪ್ರಿಪರೇಟರ್ ಪರೀಕ್ಷೆಗಳನ್ನು ಕಠಿಣ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಪರೀಕ್ಷೆ ನಡೆಸುವುದರ ಜೊತೆಗೆ 10 ತರಗತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಮಾಡಿ ಪಿಡಿಒ ಹಾಗೂ ಸ್ಥಳೀಯರ ನೆರವಿನೊಂದಿಗೆ ಮಕ್ಕಳ ಮನೆ ಗಳಿಗೆ ಭೇಟಿ ನೀಡಿ ಅವರು ಮತ್ತೆ ಶಾಲೆಗೆ ಬರುವಂತೆ ಮಕ್ಕಳು ಹಾಗೂ ಪಾಲಕರನ್ನು ಮನವೊಲಿಸಬೇಕು ಎಂದು ಹೇಳಿದರು.
ಸಮನ್ಬಯ ಸಮಿತಿ ಸಭೆ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆಸಿದ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಇಒ ಅವರು ಅಂಗನವಾಡಿಗಳಿಗೆ ಭೇಟಿ ನೀಡಿ ಸವಲತ್ತುಗಳನ್ನು ಪರಿಶೀಲಿಸಿ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಅಧಿಕಾರಿಗಳು ಕಾಲ-ಕಾಲಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಹಾಜರಾತಿ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಸೇರಿದಂತೆ ಮೂಲಭೂತ ಸವಲತ್ತುಗಳು ಇರುವುದನ್ನು ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಸೂಚಿಸಿದರು.ಬಾಲ್ಯ ವಿವಾಹ ತಡ್ಡೆಗಟ್ಟಿ: ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಅಗತ್ಯ ಕ್ರಮವಹಿಸಬೇಕು. 14 ರಿಂದ 18 ವರ್ಷದ ಯುವತಿಯರಿಗೆ ಕೌಶಲ ತರಬೇತಿ ನೀಡಿ ಉದ್ಯೋಗ ಅವಕಾಶ ಮಾಡಿದರೆ ಅನುಕೂಲವಾಗಲಿದ್ದು, ಈ ತರಬೇತಿ ಕಾರ್ಯಕ್ರಮದಡಿ ತಾಲೂಕು ಮಟ್ಟದಲ್ಲಿ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿ ಗ್ರಾಮೀಣ ನಿರುದ್ಯೋಗ ಯುವತಿಯರಿಗೆ ಉದ್ಯೋಗ ದೊರಕಿಸಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಅಪರಾಧಗಳು ಕಂಡುಬಂದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು. ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳು ಮತ್ತು ಜಾಗೃತ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜನೆ ಮಾಡಬೇಕು. ಬಾಲ್ಯ ವಿವಾಹಗಳ ಬಗ್ಗೆ ನಿಗಾವಹಿಸಿ ತಡೆಗಟ್ಟಲು ಮಾರ್ಗಸೂಚಿಗಳನ್ನು ರೂಪಿಸಬೇಕು. ಸಾರ್ವಜನಿಕರ ಸಹಕಾರ ಪಡೆದು ಗ್ರಾಪಂಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿಯು ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಿಇಒ ನಿರ್ದೇಶಿಸಿದರು.ಸಭೆಯಲ್ಲಿ ತಾಪಂ ಇಒ ಚಂದ್ರಶೇಖರ ಪವಾರ್, ವಿವಿಧ ಇಲಾಖೆ ಅಧಿಕಾರಿಗಳಾದ ಡಾ.ನಂದಿತಾ, ಕೆ.ಡಿ.ಬಡಿಗೇರ, ಗಿರಿಜಾ, ಸಖಿ ಒನ್ ಕೇಂದ್ರ ರೀಮ್ಸ್ ಸಿಬ್ಬಂದಿ ಭಾಗ್ಯವತಿ, ಪಾರ್ವತಿ ಸೇರಿ ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.