ಹೊಸಪೇಟೆ: ಬೇಸಿಗೆ ಆರಂಭವಾಗಿರುವುದರಿಂದ ಜಿಲ್ಲಾದ್ಯಂತ ಸಾರ್ವಜನಿಕರಿಗೆ, ಅದರಲ್ಲೂ ಗ್ರಾಮೀಣ ಭಾಗದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ನಳದ ಸಂಪರ್ಕ ಕಲ್ಪಿಸಿ ನೀರು ಪೂರೈಕೆ ಮಾಡಲಾಗುತ್ತದೆ. ವಿವಿಧ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಅಪೂರ್ಣಗೊಂಡಿದ್ದಲ್ಲಿ ತ್ವರಿತವಾಗಿ ಪೂರ್ಣಗೊಳಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡಬೇಕು. ಬಾಕಿ ಇರುವ ಪೈಪ್‌ಲೈನ್ ಅಳವಡಿಕೆ ಹಾಗೂ ಟ್ಯಾಂಕ್ ನಿರ್ಮಾಣ ಕಾರ್ಯ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆ ಆರಂಭವಾಗಿರುವುದರಿಂದ ಅಂತರ್ಜಲ ಮಟ್ಟ ಕುಸಿದಿರುವ ಹಳ್ಳಿಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿ ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ದುರಸ್ತಿಗೆ ಬಂದ ಕೈಪಂಪ್‌ಗಳನ್ನು ನಿರ್ಲಕ್ಷ್ಯ ವಹಿಸದೇ ತ್ವರಿತವಾಗಿ ದುರಸ್ತಿಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು.ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿರುವ ಘಟಕಗಳ ವಸ್ತುಸ್ಥಿತಿ ಪರಿಶೀಲಿಸಿ ಸಮಗ್ರ ವರದಿ ನೀಡಬೇಕು. ದುರಸ್ತಿಗೆ ಬಂದಿರುವ ಘಟಕಗಳನ್ನು ತಕ್ಷಣವೇ ಸರಿಪಡಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ತಿಳಿಸಿದರು.
ಮಳೆಗಾಲವೂ ಸಮೀಪಿಸುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಿರುತ್ತದೆ. ಆದ್ದರಿಂದ ನೀರಿನ ಮೂಲಗಳ ಸ್ವಚ್ಛತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ನೀರಿನ ಗುಣಮಟ್ಟ ಪರೀಕ್ಷಿಸಲು ನೀಡಲಾಗಿರುವ ಫೀಲ್ಡ್ ಟೆಸ್ಟ್ ಕಿಟ್ ಬಳಸಿ ಕಾಲಕಾಲಕ್ಕೆ ಪರೀಕ್ಷಿಸಬೇಕು. ಕಡ್ಡಾಯವಾಗಿ ಇದರ ದಾಖಲೆಯನ್ನು ಗ್ರಾಮ ಪಂಚಾಯಿತಿಯಲ್ಲಿ ನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸುವ ಅಥವಾ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
24x7 ಸಹಾಯವಾಣಿ ಆರಂಭ
ಜಿಲ್ಲೆಯ 6 ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ ಸಾಕಷ್ಟು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ ನೀರಿನ ಸಮಸ್ಯೆ ಉಲ್ಬಣಗೊಂಡಲ್ಲಿ ಸಾರ್ವಜನಿಕರ ಸಮಸ್ಯೆ ಅಥವಾ ದೂರು ದಾಖಲಿಸಿಕೊಂಡು ನಿವಾರಿಸಲು ಹಾಗೂ ಬರಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು, ಜಿಲ್ಲಾ ಪಂಚಾಯಿತಿಯಲ್ಲಿ 24x7 ಕಾರ್ಯಾಚರಣೆಯ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ನೀರಿನ ಸಮಸ್ಯೆ ಉಂಟಾದಲ್ಲಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 9480837823ಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಅವರು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಸ್. ದೀಪಾ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.