ಸಕಾಲದಲ್ಲಿ ಜನನ-ಮರಣ ಮಾಹಿತಿ ನೋಂದಣಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ

| Published : Jun 05 2025, 02:28 AM IST

ಸಕಾಲದಲ್ಲಿ ಜನನ-ಮರಣ ಮಾಹಿತಿ ನೋಂದಣಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯಲ್ಲಿ ಜನನ-ಮರಣಗಳ ವಿವರಗಳನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ಜನನ-ಮರಣಗಳ ವಿವರಗಳನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೆಸ್ವಾನ್‌ನಲ್ಲಿ ನಡೆದ ಜನನ-ಮರಣಗಳ ನಾಗರಿಕ ನೋಂದಣಿ ತ್ರೈಮಾಸಿಕ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಜನ್ಮ ತಂತ್ರಾಂಶದಲ್ಲಿ ಯಾವುದೇ ಜನನ ಮತ್ತು ಮರಣ ಘಟನೆ ನಡೆದ 21 ದಿನಗಳ ಒಳಗಾಗಿ ಕಡ್ಡಾಯವಾಗಿ ಸಂಬಂಧಿಸಿದ ನೋಂದಣಾಧಿಕಾರಿಗಳು ನೋಂದಣಿ ಮಾಡಬೇಕು. ನೋಂದಣಿ ಮಾಡದೆ ಸಾರ್ವಜನಿಕರಿಗೆ ತೊಂದರೆ ಯಾದಲ್ಲಿ ಸಂಬಂಧಿಸಿದ ನೋಂದಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಆರ್.ಶಿವಕುಮಾರ್ ಮಾತನಾಡಿ, ಜನನ-ಮರಣ ಸಂಭವಿಸಿದ 21 ದಿನಗಳ ನಂತರ 30 ದಿನಗಳ ಅವಧಿಯೊಳಗಿನ ನೋಂದಣಿಗೆ ಶುಲ್ಕ ₹20 ಸಂದಾಯದ ನಂತರ ನೋಂದಣಿ ಮಾಡಬೇಕು. ಒಂದು ತಿಂಗಳ ನಂತರ ಒಂದು ವರ್ಷದಲ್ಲಿ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರ ಮಹಜರು ವರದಿಯೊಂದಿಗೆ ತಹಸೀಲ್ದಾರರ ಆದೇಶದ ಮೂಲಕ ಗ್ರಾಮ ಆಡಳಿತಾಧಿಕಾರಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಒಂದು ವರ್ಷದ ನಂತರದ ಯಾವುದೇ ಜನನ-ಮರಣ ಹಾಗೂ ಹೆಸರು ಸೇರ್ಪಡೆಯನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ಕಟಾವು ಪ್ರಯೋಗಗಳನ್ನು ನಿಯಮಾನುಸಾರ ಕೈಗೊಳ್ಳಲು ಹಾಗೂ ಯಾವುದೇ ಪ್ರಯೋಗಗಳು ನಷ್ಟ ವಾಗದಂತೆ ನೋಡಿಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ಹೊರ ತಂದಿರುವ 2023-24 ನೇ ಸಾಲಿನ ಜಿಲ್ಲಾ ಅಂಕಿ-ಅಂಶಗಳ ನೋಟ ಮತ್ತು ಸಾಮಾಜಿಕ ಮತ್ತು ಆರ್ಥಿಕ ಅವಲೋಕನ ಪುಸ್ತಕವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

ಸಭೆಯಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದೇವರಾಜ್, ಚಿಕ್ಕಮಗಳೂರು ತಾಲೂಕು ತಹಸೀಲ್ದಾರ್ ರೇಷ್ಮಾಶೆಟ್ಟಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಕೆ.ವಿಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಅಶ್ವತ್ಥಬಾಬು, ಡಿವೈಎಸ್‌ಪಿ ಶೈಲೇಂದ್ರ ಉಪಸ್ಥಿತರಿದ್ದರು.

4 ಕೆಸಿಕೆಎಂ 4