ಕನ್ನಡಪ್ರಭ ವಾರ್ತೆ, ತುಮಕೂರು
ಜಾನುವಾರುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಕಾಲ-ಕಾಲಕ್ಕೆ ಲಸಿಕೆ ನೀಡುವುದು ಸೇರಿದಂತೆ ಪಶು ಆಸ್ಪತ್ರೆಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ. ಪುಟ್ಟರಂಗ ಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪಶುವೈದ್ಯ ಸೇವಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಶುಪಾಲನೆ ಮತ್ತು ರೇಷ್ಮೆ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೆ.ಡಿ.ಪಿ. ಸಭೆಯಲ್ಲಿ ನಿಗದಿಪಡಿಸಿದ್ದ ಗುರಿಯನ್ನು ಕಾಲಮಿತಿಯೊಳಗೆ ಸಾಧಿಸಲು ಶ್ರಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪ್ರಶಂಸಿಸಿದರು.
ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರ ಕನಸಿನ ಕೂಸಾದ ಈ ಯೋಜನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸೂಚಿಸಿದ ಅವರು, ಸಭೆಯಲ್ಲಿ ಪಶು ವೈದ್ಯಕೀಯ ಸೇವೆಗಳ ಕುರಿತು ಚರ್ಚಿಸಿದರು. ಮುಂದಿನ ದಿನಗಳಲ್ಲಿ ಪಶು ಆಸ್ಪತ್ರೆಗಳ ಮೂಲಸೌಕರ್ಯವನ್ನು ಉತ್ತಮಪಡಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.ರೈತರಿಗೆ ನೆರವು:ಜಿಲ್ಲೆಯಲ್ಲಿ ಕೆಲವು ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾಲಕಾಲಕ್ಕೆ ಲಸಿಕೆ ಹಾಕಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಆಕಸ್ಮಿಕವಾಗಿ ಮೃತಪಟ್ಟ ಪಶುಗಳ ಮಾಲೀಕರಿಗೆ ಬಾಕಿ ಇರುವ ಪರಿಹಾರ ಧನವನ್ನು ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆದ್ಯತೆ ನೀಡುವುದರ ಜೊತೆಗೆ, 1000 ಲೀಟರ್ ಸಾಮರ್ಥ್ಯದ ಬಿ.ಎಂ.ಸಿ ಘಟಕವನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ ಅವರು ಜಿಲ್ಲೆಯಲ್ಲಿ ಇಲಾಖೆಯ ಕಾರ್ಯವೈಖರಿ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ಸಚಿವರ ಗಮನಕ್ಕೆ ತಂದರು.
ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಚ್.ಎಂ. ಶಿವಪ್ರಸಾದ್ ಅವರು ಇಲಾಖೆಯ ಪ್ರಗತಿ ವರದಿಯನ್ನು ಮಂಡಿಸಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ಲಿಂಗರಾಜು, ನಿರ್ದೇಶಕ ಡಾ. ಶ್ರೀನಿವಾಸ್, ಕುರಿ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ. ರಮೇಶ್, ಸಚಿವರ ಆಪ್ತ ಕಾರ್ಯದರ್ಶಿ ರಾಜೀವ್ ಕುಲೆರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪಶುವೈದ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.