ಕೊಪ್ಪಳ ಜಿಲ್ಲೆಯ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಿ: ನಲಿನ್ ಅತುಲ್

| Published : Mar 23 2024, 01:01 AM IST / Updated: Mar 23 2024, 01:02 AM IST

ಕೊಪ್ಪಳ ಜಿಲ್ಲೆಯ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಿ: ನಲಿನ್ ಅತುಲ್
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಏ. 1ರಿಂದ ಏ. 30ರ ವರೆಗೆ ನಡೆಯಲಿದೆ.

ಕೊಪ್ಪಳ: ಜಿಲ್ಲೆಯ ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ (ಎನ್.ಎ.ಡಿ.ಸಿ.ಪಿ.) ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಸಿದ್ಧತೆಗಳ ಪರಿಶೀಲನೆಗಾಗಿ ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಏ. 1ರಿಂದ ಏ. 30ರ ವರೆಗೆ ನಡೆಯಲಿದ್ದು, ಎಲ್ಲ ಜಾನುವಾರುಗಳಿಗೆ ಲಸಿಕೆ ಸಿಗುವಂತಾಗಬೇಕು. ಕಾಲುಬಾಯಿ ಲಸಿಕೆಯಿಂದ ಜಿಲ್ಲೆಯ ಯಾವುದೇ ಜಾನುವಾರು ಬಿಟ್ಟು ಹೋಗದಂತೆ ನೋಡಿಕೊಳ್ಳಿ. ಲಸಿಕೆಯ ಬಗ್ಗೆ ಜಿಲ್ಲೆಯ ಎಲ್ಲ ರೈತರಿಗೆ ಜಾಗೃತಿ ಮೂಡಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು, ಲಸಿಕಾ ತಂಡದ ಮುಖ್ಯಸ್ಥರು ಹಾಗೂ ಎಲ್ಲ ಲಸಿಕಾದಾರರು ತಮ್ಮ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು. ಲಸಿಕೆಯ ಬಳಿಕ ಜಾನುವಾರುಗಳ ಉಪಚಾರ ಬಗ್ಗೆಯೂ ರೈತರಿಗೆ ತಿಳಿವಳಿಕೆ ನೀಡಿ ಎಂದು ಹೇಳಿದರು.

ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳಿ: ಆಕಾಶವಾಣಿ ಬಾನುಲಿ ಕೇಂದ್ರಗಳಲ್ಲಿ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಕುರಿತಂತೆ ಪ್ರಚಾರ ಕೈಗೊಳ್ಳಬೇಕು. ಲಸಿಕಾ ಅಭಿಯಾನದ ಪ್ರಚಾರಕ್ಕೆ ಕರಪತ್ರಗಳನ್ನು ಹಂಚಬೇಕು. ಬ್ಯಾನರ್‌ಗಳನ್ನು ಪ್ರದರ್ಶಿಸಬೇಕು. ಸ್ಥಳೀಯ ದಿನಪತ್ರಿಕೆಗಳಲ್ಲಿ ಪ್ರಕಟಣೆಗಳನ್ನು ಹೊರಡಿಸಿ ಕ್ರಮ ಕೈಗೊಳ್ಳಬೇಕು. ಲಸಿಕೆಯ 2 ದಿನದ ಮುಂಚಿತವಾಗಿ ತಿಳಿಸಿ ಗ್ರಾಪಂ ವತಿಯಿಂದ ರೈತರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ಲಸಿಕಾ ಅಭಿಯಾನಕ್ಕೆ ಅಗತ್ಯ ಸಿದ್ಧತೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ ಅವರು ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಕೊಪ್ಪಳ ಜಿಲ್ಲೆಯಲ್ಲಿ ಇರುವ ಒಟ್ಟು 2,72,467 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಲಸಿಕಾ ಪ್ರತಿಕೂಲ ಪರಿಣಾಮ ಮತ್ತು ನಿರ್ವಹಣೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕೊಪ್ಪಳ ಘಟಕದ ಸಹಾಯಕ ನಿರ್ದೇಶಕ ಹಾಗೂ ಪಾಲಿಕ್ಲಿನಿಕ್‌ನ ಮುಖ್ಯ ಪಶುವೈದ್ಯಾಧಿಕಾರಿ ಡಾ. ಯಮನಪ್ಪ ಬಿ.ಎಚ್. ಉಪಸ್ಥಿತರಿದ್ದರು.