ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಿ

| Published : Feb 11 2025, 12:49 AM IST

ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹಿಳೆಯರು ಸ್ವ-ಉದ್ಯೋಗ ರೂಪಿಸಿಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು

ಹರಪನಹಳ್ಳಿ: ಮಹಿಳೆಯರು ಸ್ವ-ಉದ್ಯೋಗ ರೂಪಿಸಿಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಡಿ.ಸುಬ್ರಮಣ್ಯ ಸಲಹೆ ನೀಡಿದರು.

ತಾಲೂಕಿನ ನೀಲಗುಂದ ಗ್ರಾಮದ ಗುಡ್ಡದ ವಿರಕ್ತಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ಯೋಜನೆಯು ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಲ್ಲಿ ಆರೋಗ್ಯ ಮತ್ತು ನೈರ್ಮಲ್ಯ, ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಸೇವನೆಯ ಬಗ್ಗೆಯೂ ಜಾಗೃತಿ ಮೂಡಿಸುತ್ತಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ, ನಮ್ಮೂರು ನಮ್ಮ ಕೆರೆ, ಜ್ಞಾನದೀಪ, ಶಿಕ್ಷಕರ ಆಯ್ಕೆ, ಶಾಲೆಗಳಿಗೆ ಬೆಂಚ್‌-ಡೆಸ್ಕ್‌ ವಿತರಣೆ, ವಾತ್ಸಲ್ಯ ಕಾರ್ಯಕ್ರಮ ಮೂಲಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಸುವರ್ಣ ಅರುಂಡಿ ನಾಗರಾಜ್‌, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಮಹಿಳೆಯರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಜತೆಗೆ ಅವರು ಸಾಮಾಜಿಕ ಹಾಗೂ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗಿವೆ ಎಂದರು.

ಸಂಪನ್ಮೂಲ ವ್ಯಕ್ತಿ ವಕೀಲೆ ಜೆ. ಸೀಮಾ ಮಹಿಳಾ ಕಾನೂನು ಅರಿವು ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್. ನಾಗರತ್ನಾ, ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮಹಿಳೆಯರ ಸಬಲೀಕರಣ ಕುರಿತು ಮಾತನಾಡಿದರು.

ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ, ವಲಯದ ಮೇಲ್ವಿಚಾರಕಿ ನೇತ್ರಾಬಾಯಿ, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಎಲ್ಲ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.