ಸಾರಾಂಶ
ಗದಗ: ತಾಲೂಕು ಹಾಗೂ ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮತ್ತು ಬಾಲಕಾರ್ಮಿಕ, ಭಿಕ್ಷಾಟನೆ, ಪೊಕ್ಸೋದಂತಹ ಪ್ರಕರಣಗಳಲ್ಲಿ ತಹಸೀಲ್ದಾರರು ತುರ್ತು ಕ್ರಮ ವಹಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ನಗರದ ಜಿಪಂ ಸಭಾಂಗಣದ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಕುರಿತು ತಹಸೀಲ್ದಾರರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರಿ ಸೌಲಭ್ಯವನ್ನು ಪಡೆಯುತ್ತಿರುವ ಫಲಾನುಭವಿಗಳ ಕುಟುಂಬದವರಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ, ಪೊಕ್ಸೋ ಮತ್ತು ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುತ್ತೇನೆ ಎಂದು ಫಲಾನುಭವಿಗಳಿಂದ ಬದ್ಧತಾ ಪ್ರಮಾಣ ಪತ್ರವನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.
ತಹಸೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಶಿಕ್ಷಣ ಇಲಾಖೆಯಿಂದ ಪ್ರತಿ ಶಾಲಾ ಕಟ್ಟಡಗಳ ಹಾಗೂ ಕಂಪೌಂಡ್ ಮೇಲೆ ಮಕ್ಕಳ ಸಹಾಯವಾಣಿ ೧೦೯೮ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ, ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ಹಾಗೂ ಪ್ರಹಾರಿ ಕ್ಲಬ್ ರಚಿಸುವಂತೆ. ಕಡ್ಡಾಯವಾಗಿ ಪ್ರತಿ ಶಾಲೆಯಲ್ಲಿ ಸಲಹಾ ಪೆಟ್ಟಿಗೆ ಇಡುವಂತೆ ಹಾಗೂ ದೂರು ಸಲ್ಲಿಸುವ ಮಕ್ಕಳ ಹೆಸರನ್ನು ಬಹಿರಂಗಪಡಿಸದೇ, ಮಕ್ಕಳಿಗಾಗುವ ಶೋಷಣೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಸಾಮಾಜಿಕ ಕಳಕಳಿಯಿಂದ ಶಾಲಾ ಶಿಕ್ಷಕರು ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ತಹಸೀಲ್ದಾರರು ಸಲಹಾ ಪೆಟ್ಟಿಗೆಯಲ್ಲಿನ ಪತ್ರಗಳನ್ನು ಪರಿಶೀಲಿಸಬೇಕು. ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ ಸಂಪೂರ್ಣವಾಗಿ ಸದ್ಬಳಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಹಾಗೂ ಅದಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯನ್ನು ಕಡ್ಡಾಯವಾಗಿ ಆಯೋಜಿಸಬೇಕು. ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.