ನೀರಿನ ಸಮಸ್ಯೆ ಇರುವ ಮಂಡ್ಯ ತಾಲೂಕಿನ ೧೫ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಮೂಲಕ ನೀಡಲಾಗುತ್ತಿದೆ. ಎರಡು ಗ್ರಾಮಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಸ್ಧಳಕ್ಕೆ ಭೇಟಿ ನೀಡಿ ವಾಸ್ತವ ವಿಷಯ ತಿಳಿದು ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಲು ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮೀಣ ಹಾಗೂ ನಗರ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.
ನೀರಿನ ಸಮಸ್ಯೆ ಇರುವ ೧೫ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಮೂಲಕ ನೀಡಲಾಗುತ್ತಿದೆ. ಎರಡು ಗ್ರಾಮಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಸ್ಧಳಕ್ಕೆ ಭೇಟಿ ನೀಡಿ ವಾಸ್ತವ ವಿಷಯ ತಿಳಿದು ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು.ಕೊಳವೆ ಬಾವಿಗಳಲ್ಲಿ ಇಳುವರಿ ಪರಿಶೀಲನೆ ಮಾಡಬೇಕು. ಬೇಸಿಗೆ ಮುಗಿಯುವವರೆಗೆ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜನರಿಂದ ನಮಗೆ ಕುಡಿಯುವ ನೀರಿನ ಬಗ್ಗೆ ದೂರಿನ ಸಮಸ್ಯೆ ಆಗದಂತೆ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಮೊದಲ ಆದ್ಯತೆಯ ಮೇಲಿನ ತಹಸೀಲ್ದಾರ್‌ಗಳು, ತಾಲೂಕು ಪಂಚಾಯ್ತಿ ಇಒಗಳು ಮತ್ತು ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಯಾವುದೇ ಹಣದ ಕೊರತೆಯಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ಸಮಸ್ಯೆಗೆ ತುರ್ತು ಕ್ರಮ ವಹಿಸಬೇಕು ನದಿ, ಕೆರೆ ಅಥವಾ ಜಲಮೂಲಗಳಿಂದ ಅನಧಿಕೃತವಾಗಿ ಪಂಪ್‌ಸೆಟ್ ಬಳಸಿ ನೀರನ್ನು ಎತ್ತುವುದು ಕಾನೂನುಬಾಹೀರ ಚಟುವಟಿಕೆಯಾಗಿದೆ. ಇದರಿಂದ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತದೆ. ಈ ಸಂಬಂಧ ನದಿ ತೀರದ ಸ್ಧಳಗಳಿಗೆ ತಹಸೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಚೆಸ್ಕಾಂ ಅಧಿಕಾರಿ ಹಾಗೂ ಪೊಲೀಸ್ ಇಲಾಖೆಯವರು ತಕ್ಷಣವೇ ಸ್ಧಳಕ್ಕೆ ಭೇಟಿ ನೀಡಿ ವಿದ್ಯುತ್ ಕಡಿತಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ನೀರು ಶುದ್ಧಿಕರಣ ಘಟಕಗಳ ಕಾರ್ಯನಿರ್ವಹಣೆ ಬಗ್ಗೆ ಹಾಗೂ ನೀರಿನ ಗುಣಮಟ್ಟದ ಬಗ್ಗೆ ಪರೀಕ್ಷೆ ನಡೆಸಬೇಕು. ಜಿಲ್ಲೆಯಲ್ಲಿ ೪೦ ವಾರಗಳವರೆಗೂ ಮೇವಿನ ಸಮಸ್ಯೆಯಿರುವುದಿಲ್ಲ ಎಂದರು.ಅಪರ ಜಿಲ್ಲಾಧಿಕಾರಿ ಶಿವಾನಂದಾಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎನ್.ಜಿ.ಪ್ರಮೋದ್‌ಕುಮಾರ್, ಜಂಟಿ ಕೃಷಿ ನಿರ್ದೇಶಕ ಅಶೋಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್.ನರಸಿಂಹಮೂರ್ತಿ, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಶಿವಲಿಂಗಯ್ಯ, ಜಿಲ್ಲೆಯ ಎಲ್ಲಾ ತಹಸೀಲ್ದಾರರು, ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪೌರಾಯುಕ್ತರು, ನಗರಸಭೆ, ಪಟ್ಟಣ ಪಂಚಾಯ್ತಿಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.