ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ: ಸಚಿವ ಡಿ.ಸುಧಾಕರ್

| Published : Jan 17 2024, 01:45 AM IST

ಸಾರಾಂಶ

ಕುಡಿಯುವ ನೀರಿನ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ನೀರಿನ ಸಮಸ್ಯೆ ಗಳನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

- ಕರಿಯಾಲ ಪಂಚಾಯಿತಿ ಗ್ರಾಮಗಳಿಗೆ ಭೇಟಿ ನೀಡಿ, ಅಹವಾಲು ಸ್ವೀಕಾರ

ಕನ್ನಡಪ್ರಭ ವಾರ್ತೆ ಹಿರಿಯೂರು

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರು ಸೋಮವಾರ ಜವಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ಕರಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.

ಗ್ರಾಮಗಳಲ್ಲಿನ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ರೈತರ ಸಮಸ್ಯೆ ಹಾಗೂ ರಸ್ತೆಗಳ ಅಭಿವೃದ್ಧಿಯ ಬಗ್ಗೆ ಗ್ರಾಮಸ್ಥರ ಮನವಿಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ರೈತರ ಪಂಪ್‌ಸೆಟ್‌ಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಕುಡಿಯುವ ನೀರಿನ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ನೀರಿನ ಸಮಸ್ಯೆಗಳನ್ನು ಪರಿಹರಿಸಬೇಕು. ಜನರು ಸಣ್ಣಪುಟ್ಟ ಸಮಸ್ಯೆಯನ್ನು ಸಹ ನನ್ನ ಬಳಿ ತರುತ್ತಾರೆಂದರೆ ಎಲ್ಲಿ ತಪ್ಪಾಗಿದೆ ಎಂದು ನೀವೇ ಊಹಿಸಿಕೊಳ್ಳಿ. ಅಧಿಕಾರಿಗಳು ಕಾರಣ ಹೇಳುವುದನ್ನು ಬಿಟ್ಟು ಕೆಲಸ ಮಾಡುವುದಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರಲ್ಲದೆ, ಗ್ರಾಮಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಿ. ಪಂಚಾಯ್ತಿ ಸದಸ್ಯರು, ಗ್ರಾಮಸ್ಥರು ಸೇರಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಿ, ಸ್ವಚ್ಛತೆಯಿದ್ದಲ್ಲಿ ಆರೋಗ್ಯವಿರುತ್ತದೆ ಎಂದೂ ಸಲಹೆಯಿತ್ತರು.

ಕೆಲವು ಸಮಸ್ಯೆಗಳನ್ನು ಸಂಬಂಧ ಅಧಿಕಾರಿಗಳ ಕರೆಸಿ ಶೀಘ್ರದಲ್ಲಿಯೇ ಆ ಸಮಸ್ಯೆಗಳ ಇತ್ಯರ್ಥಕ್ಕೆ ಆದೇಶಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ನಾಗೇಂದ್ರ ನಾಯ್ಕ,ಜೆಜೆ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಲ್ತಾಫ್, ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಮ್ಮ, ಮುಖಂಡರಾದ ಪಿ.ಎಸ್.ಪಾತಯ್ಯ, ಪುಟ್ಟರಾಜು, ಮಂಜುನಾಥ್, ನರಸಿಂಹಸ್ವಾಮಿ, ವೇದ ಮೂರ್ತಿ, ತಿಪ್ಪಮ್ಮ, ಫಕ್ರುದ್ದೀನ್, ಚಿತ್ರಲಿಂಗಪ್ಪ, ಶ್ರೀನಿವಾಸ ನಾಯಕ, ಗಿರೀಶ್, ವಿ.ಶಿವಕುಮಾರ್, ರಾಮಣ್ಣ, ಪ್ರಶಾಂತ್ ಮುಂತಾದವರು ಹಾಜರಿದ್ದರು.