ಸಾರಾಂಶ
ಕನ್ನಡಪ್ರಭ ವಾರ್ತೆ ಕೊಪ್ಪಳ
ಛಲವಾದಿ ಸಮಾಜದಿಂದ ಮೊದಲ ಬಾರಿಗೆ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ನ. 26ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಛಲವಾದಿ ಜಾಗೃತಿ ವೇದಿಕೆಯ ಸಂಚಾಲಕ ಕೃಷ್ಣ ಎಂ. ಇಟ್ಟಂಗಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದ ಛಲವಾದಿ ಸಮಾಜದ ವಿದ್ಯಾರ್ಥಿಗಳಿಗೆ ನಗರದ ಹೊಸಪೇಟೆ ರಸ್ತೆಯ ಮೇಘರಾಜ ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಸಮರ್ಪಣೆಯಾಗಿ 75ನೇ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅಂದು ಈ ಕಾರ್ಯಕ್ರಮ ವಿಶೇಷವಾಗಿ ಆಯೋಜನೆ ಮಾಡಿದ್ದೇವೆ. ಶೇ. 60ಕ್ಕಿಂತ ಹೆಚ್ಚು ಅಂಕ ಗಳಿಸಿದ ಎಸ್‌ಎಸ್‌ಎಲ್‌ಸಿ 26, ಪಿಯುಸಿ 16 ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಿಕೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು.ಜಿ.ಎಂ. ಬೆಲ್ಲದ ಹಾಗೂ ಕೃಷ್ಣ ಇಟ್ಟಂಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೊಳಚೆ ನಿಗಮದ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವರು.
ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕ ಡಾ. ಚನ್ನಬಸವ ಛಲವಾದಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. 1 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಇದೇ ವೇಳೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಛಲವಾದಿ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಎಂ. ಬೆಲ್ಲದ, ಪ್ರಮುಖರಾದ ಅನಿಲ ಬೇಗಾರ, ಸಿದ್ದರಾಮ ಹೊಸಮನಿ, ಗುತ್ತಿಗೆದಾರ ಗವಿಸಿದ್ದಪ್ಪ ಬೆಲ್ಲದ, ಕಾಶಪ್ಪ ಚಲವಾದಿ ಇದ್ದರು.