ಪ್ರತಿಭಾ ಕಾರಂಜಿ ಸ್ಪರ್ಧೆಗಳು ವಿವಿಧ ಹಂತಗಳಲ್ಲಿ ನಡೆಯುತ್ತವೆ ಕ್ಲಸ್ಟರ್, ಬ್ಲಾಕ್, ತಾಲೂಕು,ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳು ನಡೆಯುತ್ತದೆ, ಈ ಸ್ಪರ್ಧೆಗಳು ವಿದ್ಯಾರ್ಥಿಗಳ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ವಿಭಾಗಗಳನ್ನು ಒಳಗೊಂಡಿರುತ್ತವೆ. ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಸಹಕಾರಿ.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಂಸ್ಕೃತಿಕ ಮತ್ತು ಸಾಹಿತ್ಯ ಪ್ರತಿಬೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮವಾದ ವೇದಿಕೆಯಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಹಮ್ಮಿಕೊಂಡಿದೆ. ಇದು ಕೇವಲ ಶೈಕ್ಷಣಿಕ ವಿಷಯಗಳಿಗೆ ಸೀಮಿತವಾಗಿರದೇ, ವಿಭಿನ್ನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದರು.

ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ

ಪ್ರತಿಭಾ ಕಾರಂಜಿ ಸ್ಪರ್ಧೆಗಳು ವಿವಿಧ ಹಂತಗಳಲ್ಲಿ ನಡೆಯುತ್ತವೆ ಕ್ಲಸ್ಟರ್, ಬ್ಲಾಕ್, ತಾಲೂಕು,ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳು ನಡೆಯುತ್ತದೆ, ಈ ಸ್ಪರ್ಧೆಗಳು ವಿದ್ಯಾರ್ಥಿಗಳ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ವಿಭಾಗಗಳನ್ನು ಒಳಗೊಂಡಿರುತ್ತವೆ. ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಸಹಕಾರಿ. ಇದು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ, ಶಿಕ್ಷಣ ಮತ್ತು ಮನರಂಜನೆಯನ್ನು ಸಂಯೋಜಿಸುತ್ತದೆ ಎಂದರು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಪೋಷಕರು ಮತ್ತು ಶಿಕ್ಷಕರು ಒಟ್ಟಾಗಿ ಕೆಲಸ ಮಾಡುವುದರಿಂದ ಮಕ್ಕಳ ವ್ಯಕ್ತಿತ್ವವನ್ನು ರೂಪಿಸಲು ಮತ್ತು ಅವರಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದರು.ಮಕ್ಕಳಿಗೆ ಹಿಂಜರಿಕೆ ಬೇಡ

ಪ್ರತಿಭಾ ಕಾರಂಜಿ ಎಲ್ಲಾ ವಿದ್ಯಾರ್ಥಿಗಳಿಗೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಂದು ಸೂಕ್ತವಾದ ವೇದಿಕೆಯಾಗಿದೆ. ಕೆಲ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲು ಹಿಂಜರಿಕೆ ಪಡದೆ ಧೈರ್ಯವಾಗಿ ಪ್ರದರ್ಶಿಸಿ ಸಮಾಜದ ಮುಖ್ಯವಾಹಿನಿಗೆ ಬನ್ನಿ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಗೋವಿಂದ,ಬಿಇಒ ಶಶಿಕಲಾ,ನೌಕರ ಸಂಘದ ಅಧ್ಯಕ್ಷ ರವಿಕುಮಾರ್, ಯುವರಾಜು, ಆಂಜನೇಯಗೌಡ, ಶಂಕರಪ್ಪ, ವಗ್ಗರ್, ಎಲ್.ರಾಮಕೃಷ್ಣ, ಸುಜಾತ, ನಾಗರಾಜ್, ರಾಜಪ್ಪ, ನಾರಾಯಣಸ್ವಾಮಿ ಇತರರು ಇದ್ದರು.