ಪಲ್ಸ್ ಪೊಲಿಯೋ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಜರುಗಿತು.

ಕಂಪ್ಲಿ: ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಜರುಗಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ, ದೇಶವನ್ನು ಸಂಪೂರ್ಣವಾಗಿ ಪೊಲಿಯೋ ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಕೈಗೊಂಡಿರುವ ಗುರಿಯನ್ನು ಶೇ.100ರಷ್ಟು ಸಾಧಿಸಬೇಕಾಗಿದೆ. ಈ ಕಾರ್ಯದಲ್ಲಿ ಆರೋಗ್ಯ ಇಲಾಖೆ ಮಾತ್ರವಲ್ಲದೆ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ಟಾಸ್ಕ್‌ಫೋರ್ಸ್ ಸಮಿತಿ ರೂಪಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಮೂಲಕ ಪಲ್ಸ್ ಪೊಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ ಎಂದು ತಿಳಿಸಿದರು.ತಾಲೂಕು ಆರೋಗ್ಯ ಮೇಲ್ವಿಚಾರಣಾಧಿಕಾರಿ ಡಾ.ಜಿ.ಅರುಣ್ ಮಾತನಾಡಿ, ಪಲ್ಸ್ ಪೊಲಿಯೋ ಅಭಿಯಾನ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮನೆಮನೆಗೆ ಲಸಿಕೆ ತಲುಪಿಸುವ ಕಾರ್ಯಕ್ಕಾಗಿ ಮೇಲ್ವಿಚಾರಕರ ನೇಮಕ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನೂ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಬೀದಿ ನಾಯಿ ವಿಷಯ:ಸಭೆಯಲ್ಲಿ ಬೀದಿ ನಾಯಿಗಳ ಸಮಸ್ಯೆ ಕುರಿತೂ ಚರ್ಚೆ ನಡೆಯಿತು. ಮುಖ್ಯ ಪಶು ವೈದ್ಯಾಧಿಕಾರಿ ಡಾ.ಕೆ.ಯು.ಬಸವರಾಜ ಮಾತನಾಡಿ, ಬೀದಿ ನಾಯಿ ಹಾವಳಿ ನಿಯಂತ್ರಣಕ್ಕಾಗಿ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಅಂಕಿಸಂಖ್ಯೆ ವಿವರವನ್ನು ಕಡ್ಡಾಯವಾಗಿ ಪುರಸಭೆಗೆ ಸಲ್ಲಿಸಬೇಕು ಎಂದು ಸೂಚಿಸಿದರು.ಬಳಿಕ ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಮಾತನಾಡಿ, ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಾತ್ಕಾಲಿಕ ಶೆಡ್ ತೆರೆಯಲಾಗಿದ್ದು, ಅಲ್ಲಿ ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆಯನ್ನು ನಡೆಸಿ ನಂತರ ಅವುಗಳನ್ನು ರಕ್ಷಿಸಿ ಪುನರ್ವಸತಿ ಮಾಡಲಾಗುತ್ತದೆ ಎಂದರು. ಬೀದಿ ನಾಯಿಗಳ ಉಪಟಳ ತಪ್ಪಿಸುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ. ಆಹಾರ ಮಾರಾಟಗಾರರಿಗೆ ಸೂಕ್ತ ತಿಳುವಳಿಕೆ ನೀಡಲಾಗುವುದು. ಅಲ್ಲದೆ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸ ವಿಲೇವಾರಿ ವಾಹನಗಳಿಗೆ ನೀಡುವ ಮೂಲಕ ಬೀದಿ ನಾಯಿಗಳ ಸಮಸ್ಯೆಯನ್ನು ಬಹುತೇಕ ಮಟ್ಟಿಗೆ ನಿಯಂತ್ರಿಸಬಹುದಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.