ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನು ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಕ.ದ.ಸಂ.ಸ ದಿಂದ ಬೃಹತ್ ತಮಟೆ ಚಳುವಳಿಯನ್ನು ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಿ.ಎನ್.ಗಂಗಾಧರಪ್ಪ ನೇತೃತ್ವದಲ್ಲಿ ನಡೆಸಿತು.ನಗರದಲ್ಲಿ ಗುರುವಾರ ಬಿ.ಆರ್.ಅಂಬೇಡ್ಕರ್ ಭವನದ ಬಳಿಯಿಂದ ತಮಟೆ ಚಳುವಳಿ ಪ್ರಾರಂಭಿಸಿದ ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ಮೂಲಕ ಸಂಚರಿಸಿ, ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೋರ್ಟ್ ತೀರ್ಪು ಜಾರಿಯಾಗಲಿಈ ವೇಳೆ ಗಂಗಾಧರಪ್ಪ ಮಾತನಾಡಿ, ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಕಳೆದ ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕು. ಕಳೆದ 30 ವರ್ಷಗಳಿಂದ ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಅಲ್ಲದೇ ಇದು ಮೀಸಲಾತಿ ವ್ಯವಸ್ಥೆಯಲ್ಲಿ ಮುಖ್ಯವಾದ ಹೆಜ್ಜೆಯಾಗಿದೆ ಎಂದರು. ಒಳಮೀಸಲಾತಿ ಕಲ್ಪಿಸುವುದರೊಂದಿಗೆ ಕರ್ನಾಟಕ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಅವರ ಜನ್ಮದಿನವಾದ ಜೂನ್ 9 ನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕು. ಒಳಮೀಸಲಾತಿ ಜಾರಿಯಾಗುವವರೆಗೂ ರಾಜ್ಯ ಸರ್ಕಾರದ ಎಲ್ಲಾ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕು. ಬಗರ್ ಹುಕುಂ ಸಾಗುವಳಿ ಯನ್ನು ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಯಮಾತಿ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ದಸಂಸ ಜಿಲ್ಲಾ ಸಂಚಾಲಕ ಗಂಗಪ್ಪ,ಜಿಲ್ಲಾ ಸಂಘಟನಾ ಸಂಚಾಲಕರಾದ ಹೆಚ್.ಎಂ.ವೆಂಕಟೇಶ್, ಕೃಷ್ಣಮೂರ್ತಿ, ಶ್ರೀನಿವಾಸ್, ಮಂಜುತುಳಸಿ, ತಾಲ್ಲೂಕು ಸಂಚಾಲಕ ಎಂ.ಎನ್.ಮುನಿರಾಜು, ತಾಲ್ಲೂಕು ಸಂಘಟನಾ ಸಂಚಾಲಕರಾದ ಡಿ.ಸಿ.ಮುನಿರಾಜು, ಬಿ.ನಾಗೇಶ್, ಅಂಬರೀಶ್,ಜೆ.ಡಿ.ಲಕ್ಷ್ಮೀನಾರಾಯಣಪ್ಪ, ಎನ್.ಗಾಯತ್ರಿ , ಆದಿನಾರಾಯಣ್, ಶಿವಶಂಕರ್, ನರಸಿಂಹಪ್ಪ ,ಮತ್ತಿತರರು ಇದ್ದರು.