ಸಾರಾಂಶ
ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೆ.12ರಂದು ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ತಿಳಿಸಿದರು. ತಿಪಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡಪ್ರಭವಾರ್ತೆ ತಿಪಟೂರು
ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ದವಾದ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೆ.12ರಂದು ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಒಳಮೀಸಲಾತಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಆಗಸ್ಟ್‌ನಲ್ಲಿ ಆದೇಶ ನೀಡಿದೆ. ಆದರೆ ತಿಂಗಳು ಕಳೆದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಬಗ್ಗೆ ಚಕಾರವೆತ್ತಿಲ್ಲ. ಒಳಮೀಸಲಾತಿ ಜಾರಿಗಾಗಿ ಕಳೆದ ೩೦ ವರ್ಷಗಳಿಂದಲೂ ನಮ್ಮ ಸಮಿತಿ ಹೋರಾಟ ಮಾಡಿಕೊಂಡು ಬಂದಿದ್ದು ನಮ್ಮ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಅಲ್ಲದೆ ಇದು ಮೀಸಲಾತಿ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಹೆಜ್ಜೆಯಾಗಿದೆ. ಉಪ ಜಾತಿಗಳಿಗೆ ಒಳ ಮೀಸಲಾತಿ ಇಲ್ಲದೆ ಅಭಿವೃದ್ದಿಯಲ್ಲಿ ಹಿಂದಿವೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಒಳಮೀಸಲಾತಿ ನೀಡುವುದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ಆಗ್ರಹಿಸಿದ್ದರು. ಆದರೆ ಒಳಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದು ಆದೇಶ ನೀಡಿದ್ದರೂ ಮುಖ್ಯಮಂತ್ರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಆದ್ದರಿಂದ ಸರ್ಕಾರವನ್ನು ಬಡಿದೆಬ್ಬಿಸಲು ತಮಟೆ ಚಳುವಳಿಯನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು, ದಸಂಸ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ ಅವರು, ಈ ಚಳುವಳಿಗೂ ಸರ್ಕಾರ ಮಣಿಯದಿದ್ದರೆ ಮುಖ್ಯಮಂತ್ರಿಗಳ ಮನೆ ಮುಂದೆ ಹಾಗೂ ವಿಧಾನಸೌಧದ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಆದಿಜಾಂಭವ ಸಮಾಜದ ಮುಖಂಡ ಪೆದ್ದಿಹಳ್ಳಿ ನರಸಿಂಹಯ್ಯ ಮಾತನಾಡಿ, ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದರೂ ರಾಜ್ಯ ಸರ್ಕಾರ ಜಾಣಕುರುಡು ವಹಿಸುತ್ತಿದೆ. ಚುನಾವಣೆ ಸಮಯದಲ್ಲಿ ಮತ ಕೇಳುವ ನೆಪದಲ್ಲಿ ರಾಜಕಾರಣಿಗಳು ಒಳಮೀಸಲಾತಿಯ ಬಗ್ಗೆ ಮಾತನಾಡುತ್ತಾರೆ. ಆದರೆ ಅಧಿಕಾರ ಸಿಕ್ಕ ನಂತರ ನಮ್ಮನ್ನು ಕಾಲಕಸದಂತೆ ನೋಡುತ್ತಾರೆ. ದಲಿತರಿಗೆ ಯಾವ ಸೌಲಭ್ಯಗಳು ಸಿಗುತ್ತಿಲ್ಲ. ನಮ್ಮ ಅಭಿವೃದ್ದಿಯ ಹಣವನ್ನೆಲ್ಲಾ ಗ್ಯಾರಂಟಿಗೆ ಸರ್ಕಾರ ಬಳಕೆ ಮಾಡಿಕೊಳ್ಳುತ್ತಿದೆ. ಸೌಲಭ್ಯ ಸಿಗದೆ ವಂಚಿತರಾಗುತ್ತಿರುವ ನಮಗೆ ಒಳಮೀಸಲಾತಿ ಅನಿವಾರ್ಯವಿದೆ. ಒಳಮೀಸಲಾತಿಯನ್ನು ಸರ್ಕಾರ ಕಡ್ಡಾಯವಾಗಿ ಜಾರಿ ಮಾಡಬೇಕು. ಪ್ರಾಣ ಹೋದರೂ ಚಿಂತೆಯಿಲ್ಲ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದರು.ಸುದ್ದಿಗೋಷ್ಠಿಯಲ್ಲಿ ಕಾನೂನು ಸಲಹೆಗಾರ ವೆಂಕಟೇಶ್, ಮಹಿಳಾ ಒಕ್ಕೂಟದ ಶೋಭಾ, ಮುಖಂಡರುಗಳಾದ ಅಶೋಕ್‌ಗೌಡನಕಟ್ಟೆ, ಪ್ರಸನ್ನಕುಮಾರ್, ಅಲ್ಲಪ್ಪ, ಜಯಶಂಕರ್, ರಾಜಣ್ಣ, ಗವಿರಂಗಯ್ಯ, ರವೀಶ್, ರಂಗಸ್ವಾಮಿ, ಕರಿಯಪ್ಪ ಮತ್ತಿತರರಿದ್ದರು.