ಸಾರಾಂಶ
ನಂಜನಗೂಡು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದು, ಗ್ಯಾರಂಟಿ ಯೋಜನೆಗಳು ತಲುಪದಿರುವ ಮನೆಗಳಿಗೆ ತೆರಳಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಕ್ರಮವಹಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ತಾಪಂ ಸಭಾಂಗಣದಲ್ಲಿ ಸೋಮವಾರ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎನಿಸಿದೆ. ಗೃಹಲಕ್ಷ್ಮಿ, ಗೃಹಜೋತಿ, ಶಕ್ತಿಯೋಜನೆ, ಯುವನಿಧಿ, ಅನ್ನಭಾಗ್ಯ ಯೋಜನೆಗಳಿಂದ ಬಡವರು, ಮತ್ತು ಜನಸಾಮಾನ್ಯರ ಜೀವನವನ್ನೇ ಬದಲಾಯಿಸುವ ಗುರಿಯನ್ನು ಹೊಂದಿದೆ ಎಂದರು.
ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮವಹಿಸಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು, ಕ್ಷೇತ್ರಾದ್ಯಂತ ಗ್ರಾಮಗಳ ಪ್ರವಾಸ ಮಾಡಿ ಪ್ರತಿ ಮನೆ ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೂ ತಲುಪಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಂಡು, ತಲುಪದಿರುವ ಅರ್ಹ ಫಲಾನುಭವಿಗಳ ಪಟ್ಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿ ನಮ್ಮ ಗ್ಯಾರಂಟಿ ಯೋಜನೆಗಳು ತ್ವರಿತವಾಗಿ ತಲುಪುವಂತೆ ಮಾಡಬೇಕು ಎಂದು ಸೂಚಿಸಿದರು.
ತಾಪಂ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಮತ್ತು ಮುಖಂಡರ ಜನಸಂಪರ್ಕ ಸಭೆ ನಡೆಸಿ ಅಹವಾಲುಗಳನ್ನು ಆಲಿಸಿದರು. ಸ್ಥಳದಲ್ಲೇ ಬಗೆಹರಿಯುವ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಶೀಘ್ರವಾಗಿ ಬಗೆಹರಿಸುವಂತೆ ನಿರ್ದೇಶನ ನೀಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಕೆ. ಮಾರುತಿ, ತಾಪಂ ಇಓ ಜೆರಾಲ್ಡ್ ರಾಜೇಶ್, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳಾದ ದೇವರಾಜಯ್ಯ, ಕಿರಣ್ ಕುಮಾರ್ ಇದ್ದರು.