ಚಿಕ್ಕಮಗಳೂರುಜೂನ್ 28 ರಿಂದ ಜುಲೈ 1 ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಬೇಕು. 0-5 ವರ್ಷದೊಳಗಿನ ಯಾವ ಮಗುವೂ ಪೋಲಿಯೋ ಹನಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಭನ್ವರ್‌ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿಯ ಜಿಲ್ಲಾ ಕಾರ್ಯಪಡೆ ಸಭೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಜೂನ್ 28 ರಿಂದ ಜುಲೈ 1 ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಬೇಕು. 0-5 ವರ್ಷದೊಳಗಿನ ಯಾವ ಮಗುವೂ ಪೋಲಿಯೋ ಹನಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಭನ್ವರ್‌ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಜಿಲ್ಲಾ ಕಾರ್ಯಪಡೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆ ಗಳನ್ನು ಕೈಗೊಳ್ಳಬೇಕು. ಜೂನ್ 28 ರಿಂದ ಜುಲೈ 1 ರವರೆಗೆ ಜಿಲ್ಲೆಯ ವಿವಿಧ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಲಸಿಕಾ ಕಾರ್ಯ ನಡೆಯಲಿದೆ ಎಂದರು.ಜೂನ್ 28 ರಂದು ಬೂತ್ ಮಟ್ಟದಲ್ಲಿ ಹಾಗೂ ಜೂನ್ 29 ಮತ್ತು 30 ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶಗಳಲ್ಲಿ, ಜೂನ್ 29 ರಿಂದ ಜುಲೈ 1 ರವರೆಗೆ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಕಾರ್ಯಕರ್ತರು 1ರಿಂದ 5 ವರ್ಷದ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದ್ದಾರೆ. ಸಾರ್ವಜನಿಕರು ತಮ್ಮ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದರು.ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳ ಸಂಖ್ಯೆ 74,622 ಇದ್ದು, ಗ್ರಾಮೀಣ ಪ್ರದೇಶದಲ್ಲಿ 782, ನಗರ ಪ್ರದೇಶದಲ್ಲಿ 97ಸ್ಥಿರ ಬೂತ್‌ಗಳನ್ನು ಗುರುತಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಸೂಕ್ಷ್ಮ ಕ್ರಿಯಾ ಯೋಜನೆ ತಯಾರಿಸಿ ಒಟ್ಟು 5ವಿಧದ ವಲಸೆ ಪ್ರದೇಶಗಳನ್ನು ಗುರುತಿಸಲಾಗಿದೆ. ಇಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಕ್ರಮ ವಹಿಸಲಾಗುತ್ತದೆ.

ನಗರ ಪ್ರದೇಶದಲ್ಲಿ 19 ಮತ್ತು ಗ್ರಾಮೀಣ ಪ್ರದೇಶದಲ್ಲಿ 26 ಬೂತ್‌ಗಳನ್ನು ಟ್ರಾನ್ಸಿಟ್ ಪಾಯಿಂಟ್‌ಗಳಲ್ಲಿ ಗುರುತಿಸಲಾಗಿದೆ. ನಗರ ಪ್ರದೇಶದಲ್ಲಿ 2 ಮತ್ತು ಗ್ರಾಮೀಣ ಪ್ರದೇಶದಲ್ಲಿ 74 ಮೊಬೈಲ್ ಟೀಂಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಮೇಲ್ವಿ ಚಾರಣೆಗೆ ನಗರ ಪ್ರದೇಶದಲ್ಲಿ 19, ಗ್ರಾಮೀಣ ಪ್ರದೇಶದಲ್ಲಿ 180 ಮೇಲ್ವಿಚಾರಕರನ್ನು ಗುರುತಿಸಲಾಗಿದ್ದು, ಲಸಿಕಾ ಕಾರ್ಯ ಕ್ರಮದಲ್ಲಿ ಲಸಿಕೆ ನೀಡಲು ನಗರ ಪ್ರದೇಶಕ್ಕೆ 396, ಗ್ರಾಮೀಣ ಪ್ರದೇಶಕ್ಕೆ 2280 ಲಸಿಕಾ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಎಚ್.ಕೆ.ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು.ಅಭಿಯಾನಕ್ಕೆ ಅಗತ್ಯ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರೋಗ್ಯ ಇಲಾಖೆಗೆ ನೀಡಬೇಕು. ಪೋಲಿಯೋ ಲಸಿಕೆ ಸಂಗ್ರಹಿಸಿರುವ ಆಸ್ಪತ್ರೆ ಹಾಗೂ ಲಸಿಕಾ ಸಂಗ್ರಹಣಾಗಾರಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಲು ಮೆಸ್ಕಾಂ ಇಲಾಖೆಗೆ ತಿಳಿಸಿದ ಅವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು.ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಡೀನ್ ಡಾ.ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ಡಾ.ಬಾಲಕೃಷ್ಣ, ಡಾ.ಹರೀಶ್ ಬಾಬು, ತಾಲೂಕು ಆರೋಗ್ಯಾಧಿಕಾರಿಗಳು ಇದ್ದರು.

ಫೋಟೋ

ಪೊಲಿಯೋ ಅಭಿಯಾನದ ಜಾಗೃತಿಯ ಪೋಸ್ಟರ್‌ ಅನ್ನು ಗುರುವಾರ ಜಿಲ್ಲಾಧಿಕಾರಿ ಭನ್ವರ್‌ ಸಿಂಗ್‌ ಮೀನಾ ಬಿಡುಗಡೆ ಮಾಡಿದರು. ಈ ವೇಳೆ ಜಿಪಂ ಸಿಇಓ ಕೀರ್ತನಾ ಸೇರಿದಂತೆ ಮೊದಲಾದವರಿದ್ದರು.