ಸಾರಾಂಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024- 25ನೇ ಸಾಲಿನ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.
ಮಾರ್ಚ್ ಅಂತ್ಯದಲ್ಲಿ ನಿವೇಶನ ನೀಡುವ ಗುರಿ ಹೊಂದಲಾಗಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಏಪ್ರಿಲ್ ನಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.ಪ್ರತಿ ಗ್ರಾಮ ಪಂಚಾಯತಿಯಲ್ಲಿ ಹೊಸ ಮಾದರಿ ಶಾಲೆಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾದಲ್ಲಿ ಭವಿಷ್ಯದಲ್ಲಿ ಮಕ್ಕಳು ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತೆ ಎಂದು ಹೇಳಿದರು.
ಮಕ್ಕಳ ಪೋಷಣೆ, ಪಾಲನೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಅಹಾರವನ್ನು ಅಂಗನವಾಡಿ ಮುಖಾಂತರ ಕ್ರಮಬದ್ದವಾಗಿ ವಿತರಿಸಬೇಕು. ಇಲ್ಲವಾದಲ್ಲಿ ಅಪೌಷ್ಟಿಕ ಮಕ್ಕಳ ಜನನವಾಗಿ ಸಮಾಜಕ್ಕೆ, ಕುಟುಂಬಕ್ಕೂ ಹೊರೆಯಾಗಲಿದ್ದಾರೆ. ಹಾಗಾಗಿ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪಗಳು ಉಂಟಾಗದೇ ಅಹಾರ ವಿತರಿಸುವ ಮೂಲಕ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.ಗ್ರಾಮ ಸಭೆಯಲ್ಲಿ ವಿಶೇಷಚೇತನರಿಗೆ ಸೋಲಾರ್ ಕಿಟ್ ವಿತರಣೆ , ತಾಂತ್ರಿಕ ಮತ್ತು ವೈದ್ಯಕೀಯ ಪದವಿಯ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ, ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕನ್ನಮಂಗಲ ಪಂಚಾಯತಿ ಅಭಿವೃದ್ಧಿ ಕಾರ್ಯಗಳಲ್ಲಿ ಇತರೆ ಪಂಚಾಯತಿಗಳಿಗೆ ಮಾದರಿ ಪಂಚಾಯತಿಯಾಗಲಿ ಎಂದು ಸಚಿವರು ಆಶಿಸಿದರು.
ಪಿಡಿಒ ಶ್ರೀನಿವಾಸ್, ಪರಿಸರದ ಕಾಳಜಿ, ನೀರಿನ ಮೌಲ್ಯ, ಸ್ವಚ್ಛತೆ ನೈರ್ಮಲ್ಯದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.ಸಭೆಯಲ್ಲಿ ಬಯಪ ಅಧ್ಯಕ್ಷ ಶಾಂತಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ
ಜಗನ್ನಾಥ, ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಲಿನಿ, ಉಪಾಧ್ಯಕ್ಷೆ ವನಜಾಕ್ಷಿಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಿ.ಡಿ.ಒ ಶ್ರೀನಿವಾಸ್, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.----------