ಕೊಪ್ಪಳ ನಗರದ ಅಗಸ್ತ್ಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ-2026ರ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಕೊಪ್ಪಳ: ರಕ್ತದಾನದಿಂದ ಸಂಕಷ್ಟದಲ್ಲಿರುವವರ ಜೀವ ಉಳಿಸುವ ಜತೆಗೆ ರಕ್ತದಾನಿಗಳ ಆರೋಗ್ಯಕ್ಕೂ ಅನುಕೂಲವಾಗಲಿದೆ. ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಸವಡಿ ಹೇಳಿದರು.

ನಗರದ ಅಗಸ್ತ್ಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ-2026ರ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ''''''''ಮಾನವೀಯತೆಯ ಒಂದು ಹನಿ, ರಕ್ತ ನೀಡಿ, ಜೀವ ಉಳಿಸಿ'''''''' ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನ ಆಚರಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, ಒಂದು ಯೂನಿಟ್ ರಕ್ತದಿಂದ ಸಂಕಷ್ಟದಲ್ಲಿರುವ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ರಕ್ತದಾನ ಮಾಡುವುದರಿಂದ ದೇಹಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಬದಲಾಗಿ ದೇಹದಲ್ಲಿ ಹೊಸ ರಕ್ತಕಣಗಳ ಉತ್ಪತ್ತಿಗೆ ಸಹಕಾರಿಯಾಗುತ್ತದೆ ಎಂದರು.

ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ 5ರಿಂದ 6 ಲೀಟರ್ ರಕ್ತವಿರುತ್ತದೆ. ರಕ್ತದಾನ ಶಿಬಿರದಲ್ಲಿ ಕೇವಲ 250 ಮಿ.ಲೀ. ರಕ್ತ ಸಂಗ್ರಹಿಸಲಾಗುತ್ತದೆ. ರಕ್ತದಾನದಿಂದ ಮೂಳೆ ಮಜ್ಜೆ ಸೇರಿದಂತೆ ದೇಹದ ರಕ್ತ ಉತ್ಪಾದನಾ ವ್ಯವಸ್ಥೆ ಚುರುಕುಗೊಳ್ಳುತ್ತದೆ. ವಿದ್ಯಾರ್ಥಿಗಳು ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

500 ಯೂನಿಟ್ ರಕ್ತ ಸಂಗ್ರಹದ ಗುರಿ: ಸರ್ಕಾರದ ಸೂಚನೆಯಂತೆ ಆರೋಗ್ಯ ಇಲಾಖೆಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಜಿಲ್ಲೆಯಾದ್ಯಂತ ಕನಿಷ್ಠ 500 ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ಶಿಬಿರದಲ್ಲಿ 100 ಯೂನಿಟ್ ರಕ್ತ ಸಂಗ್ರಹಿಸುವ ನಿರೀಕ್ಷೆಯಿದೆ. ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಅಗಸ್ತ್ಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಮಹಾಂತಗೌಡ ಬಿರಾದಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎ. ಶಶಿಧರ್ ಇದ್ದರು.

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮೇಲ್ವಿಚಾರಕ ಮಾಲತೇಶ್ ಸಜ್ಜನರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.