ಸಾರಾಂಶ
ಕಾರವಾರ:
ಮಾ. 3ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ನಿಗದಿತ ಗುರಿಯಂತೆ ಜಿಲ್ಲೆಯ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಬೇಕು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ಸೂಚಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಲ್ಸ್ ಪೋಲಿಯೋ ಜಿಲ್ಲಾಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ನಡೆಯಲಿರುವ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 98,473 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ 833 ಲಸಿಕಾ ಕೇಂದ್ರ, 32 ಟ್ರಾನ್ಸಿಸ್ಟ್ ತಂಡ, 3630 ಲಸಿಕೆ ನೀಡುವ ಸಿಬ್ಬಂದಿ, 211 ಸೂಪರ್ ವೈಸರ್ ನಿಯೋಜಿಸಲಾಗಿದೆ. ಈ ಕಾರ್ಯಕ್ಕಾಗಿ 190 ವಾಹನಗಳ ಅಗತ್ಯವಿದ್ದು ಎಲ್ಲ ಇಲಾಖೆಗಳು ತಮ್ಮ ಅಗತ್ಯ ಸಹಕಾರ ನೀಡುವ ಮೂಲಕ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ನಿಡುವ ಸಂಪೂರ್ಣ ಗುರಿ ಸಾಧನೆಗೆ ಸಹಕರಿಸುವಂತೆ ತಿಳಿಸಿದರು.ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕತೆಯರು ತಮ್ಮ ವ್ಯಾಪ್ತಿಯಲ್ಲಿ ಮನೆ-ಮನೆಗೆ ಭೇಟಿ ನೀಡಿ 5 ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ಮಾಹಿತಿ ನೀಡುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿ, ಎಲ್ಲ ಶಾಲೆಗಳಲ್ಲಿ ಈ ಬಗ್ಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಜಾಗೃತಿ ಮೂಡಿಸುವಂತೆ ತಿಳಿಸಿದರು.ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮದ ಕುರಿತಂತೆ ವ್ಯಾಪಕ ಜಾಗೃತಿ ಮೂಡಿಸಿ, ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಅಗತ್ಯ ಸಹಕಾರ ನೀಡಬೇಕು. ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು ಮತ್ತು ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವವರಿಗ ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ತಿಳಿಸಬೇಕು ಎಂದರು.ರೋಟರಿ, ಲಯನ್ಸ್, ರೆಡ್ ಕ್ರಾಸ್ ಸೇರಿದಂತೆ ಎಲ್ಲ ಸ್ವಯಂ ಸೇವಾ ಸಂಘಟನೆಗಳು ಜಿಲ್ಲೆಯಲ್ಲಿ ನಡೆಯುವ ಪಲ್ಸ್ ಪೋಲೀಯೋ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.ಸಭೆಯಲ್ಲಿ ಕಾರವಾರ ಉಪವಿಭಾಗಾಧಿಕಾರಿ ಕನಿಷ್ಕ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ. ಸಿದ್ದಲಿಂಗಯ್ಯ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.