ಸಮಾಜದಲ್ಲಿ ಶಿಕ್ಷಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ಜೀವನ ಶೈಲಿ, ಅವರ ವಿಚಾರಗಳನ್ನು ಮಕ್ಕಳು ನೋಡಿ ಅನುಸರಿಸುತ್ತಾರೆ. ಆದ್ದರಿಂದ ಶಿಕ್ಷಕರು ವೃತ್ತಿನಿಷ್ಠೆ, ಶ್ರದ್ಧೆಯಿಂದ ಸೇವೆ ಸಲ್ಲಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬ್ರಹ್ಮಾವರ: ಸಮಾಜದಲ್ಲಿ ಶಿಕ್ಷಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ಜೀವನ ಶೈಲಿ, ಅವರ ವಿಚಾರಗಳನ್ನು ಮಕ್ಕಳು ನೋಡಿ ಅನುಸರಿಸುತ್ತಾರೆ. ಆದ್ದರಿಂದ ಶಿಕ್ಷಕರು ವೃತ್ತಿನಿಷ್ಠೆ, ಶ್ರದ್ಧೆಯಿಂದ ಸೇವೆ ಸಲ್ಲಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಶನಿವಾರ ಇಲ್ಲಿನ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಗೀತಾನಂದ ಫೌಂಡೇಶನ್‌ಗಳ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮುಖ್ಯ ಅತಿಥಿಗಳಾಗಿದ್ದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮತ್ತು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು. ನಿವೃತ್ತ ಪ್ರಾಂಶುಪಾಲ ಬಿ. ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಸರ್ಕಾರಿ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿ ಮತ್ತು ಪ್ರೌಢಶಾಲೆಗಳ 15 ಮಂದಿ ಶಿಕ್ಷಕರನ್ನು ಸನ್ಮಾನಿಸಲಾಯಿತು. ಅಲ್ಲದೇ ನಿವೃತ್ತರಾದ ಶಿಕ್ಷಕರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಪಂ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಡಾ. ಅಶೋಕ್ ಕಾಮತ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಶಾಲಿನಿ ಜಿ. ಶಂಕರ್, ಗೀತಾನಂದ ಫೌಂಡೇಶನ್‌ನ ಆನಂದ್ ಸಿ ಕುಂದರ್, ಶಿಕ್ಷಕ ಸಂಘಟನೆಯ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಶಿಕ್ಷಕರಾದ ಮಂಜುಳಾ ಜಯಕರ್ ಹಾಗೂ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿ, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ. ವಂದಿಸಿದರು.