ಸಾರಾಂಶ
ಶಿಕಾರಿಪುರ: ಶ್ರದ್ಧೆ, ಪ್ರಾಮಾಣಿಕ ಶಿಕ್ಷಕರು ಮಾತ್ರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿ, ಸದೃಢ ಸಮಾಜ ನಿರ್ಮಿಸುವ ಶಕ್ತಿಯನ್ನು ಹೊಂದಿದ್ದು, ವಿದ್ಯಾರ್ಥಿಗಳ ಮೂಲಕ ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಕರು ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಭಾನುವಾರ ತಾಲೂಕಿನ ಬೇಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ತಾಕತ್ತು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದರು.ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಶಿಕ್ಷಕರ ಕರ್ತವ್ಯ, ಪ್ರಾಮಾಣಿಕ ಸೇವೆ ಬಹುಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪೋಷಕರ ಪ್ರೋತ್ಸಾಹ ಅತ್ಯಗತ್ಯ ಎಂದು ಹೇಳಿದರು.
ಬೇಗೂರು ಸರ್ಕಾರಿ ಶಾಲೆಯು 100 ವರ್ಷ ಪೂರೈಸಿರುವುದಕ್ಕೆ ಅತ್ಯಂತ ಸಂತೋಷವಾಗಿದ್ದು, ಇತ್ತೀಚಿನ ಸರ್ಧಾತ್ಮಕ ದಿನಗಳಲ್ಲಿ ಖಾಸಗಿ ಶಾಲೆಗಳ ಪ್ರಚಾರದ ಅಬ್ಬರದ ಮಧ್ಯೆ ಈ ಸರ್ಕಾರಿ ಶಾಲೆಯು 100 ವರ್ಷ ಪೂರೈಸಿ ಸಹಸ್ರಾರು ಪ್ರತಿಭೆಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಶಾಲೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಸ್.ಪಿ.ನಾಗರಾಜಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ಡೊನೇಶನ್ ಹಾವಳಿ ಹೆಚ್ಚಾಗಿದ್ದು, ಪೋಷಕರು ಅವರ ಪ್ರಚಾರಕ್ಕೆ ಮರುಳಾಗದೇ ಸರ್ಕಾರಿ ಶಾಲೆಗಳಲ್ಲಿ ನೀಡುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸಹಿತ ಇತಿಹಾಸದಲ್ಲಿನ ಬಹುತೇಕ ಸಾಧಕರು ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಸ್ಥಾನದ ಮೂಲಕ ದೇಶದ ಅಭಿವೃದ್ಧಿಗೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ. ಶಿಕ್ಷಣ ಸಚಿವರಾದ ನಂತರದಲ್ಲಿ ಮಧು ಬಂಗಾರಪ್ಪ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬಗ್ಗೆ ವಿಶೇಷವಾಗಿ ಗಮನ ಹರಿಸಿದ್ದು, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.ಮಾಜಿ ಕಾಡಾ ಅಧ್ಯಕ್ಷ ನಗರದ ಮಹದೇವಪ್ಪ ಮಾತನಾಡಿದರು.
ಬಿಇಒ ಲೊಕೇಶ್, ತಾ.ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಧುಕೇಶ್ವರ್, ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್ ಮಾರವಳ್ಳಿ, ಉದ್ಯಮಿ ಈರೇಶ್.ಎನ್.ವಿ, ಶಾಲೆಯ ಮುಖ್ಯ ಶಿಕ್ಷಕ ಪ್ರಸನ್ನಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ವೀರನಗೌಡ, ಗ್ರಾಪಂ ಅಧ್ಯಕ್ಷೆ ಶೋಭಾ ಉಮೇಶ್, ಸದಸ್ಯ ಲಕ್ಷ್ಮಣ, ಶಾಲಾ ಉಪ ಶಿಕ್ಷಕರು ಮತ್ತು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಬೇಗೂರು ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.