ಹಿಂದಿನ ಕಾಲದಲ್ಲಿ ಮನೆಯಲ್ಲಿ ಅನೇಕ ಮಂದಿ ಹಿರಿಯರು ಮಕ್ಕಳೊಂದಿಗೆ ಬೆರೆತು ಅವರಿಗೆ ಬುದ್ಧಿಮಾತು ಹೇಳುತ್ತಿದ್ದರು.

ಕಾರ್ಕಳ: ಹಿಂದಿನ ಕಾಲದಲ್ಲಿ ಮನೆಯಲ್ಲಿ ಅನೇಕ ಮಂದಿ ಹಿರಿಯರು ಮಕ್ಕಳೊಂದಿಗೆ ಬೆರೆತು ಅವರಿಗೆ ಬುದ್ಧಿಮಾತು ಹೇಳುತ್ತಿದ್ದರು. ಇಂದಿನ ಕಾಲಘಟ್ಟದಲ್ಲಿ ಪೋಷಕರು ತಮ್ಮ ಉದ್ಯೋಗ ಹಾಗೂ ಇತರ ಚಟುವಟಿಕೆಗಳಲ್ಲಿ ಹೆಚ್ಚಿನ ಸಮಯ ಕಳೆಯುತ್ತಿರುವುದರಿಂದ ಮಕ್ಕಳ ಕಡೆಗೆ ಅಗತ್ಯ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಲೆಯಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಳಜಿವಹಿಸಬೇಕಿದೆ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಹೇಳಿದರು.ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ನಮ್ಮ ಹಿರಿಯರು ಮಾಡಿದ ತ್ಯಾಗ ಮತ್ತು ಬಲಿದಾನಗಳನ್ನು ಇಂದಿನ ಯುವ ಪೀಳಿಗೆ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಹಿರಿಯರು ತೋರಿದ ಆದರ್ಶದ ಹಾದಿಯಲ್ಲಿ ಸಾಗುವ ಮೂಲಕ ಅವರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ, ಮುಂದಿನ ಪೀಳಿಗೆಗೆ ತಲುಪಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸ್ವಾತಂತ್ರ್ಯದ ಮೌಲ್ಯವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ, ಎಸ್.ಆರ್. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್., ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ ಆಚಾರ್ಯ, ದೈಹಿಕ ಶಿಕ್ಷಣ ಶಿಕ್ಷಕರಾದ ಜಯಲಕ್ಷ್ಮೀ ಮತ್ತು ಬಸವರಾಜ್ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಆರ್. ಪದವಿಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅಶ್ವಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.