ಸಾರಾಂಶ
ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ
ಕನ್ನಡಪ್ರಭ ವಾರ್ತೆ ಕೂಡ್ಲಿಗಿಇಂದು ಯುವಕರು ದುಶ್ಚಟಗಳ ದಾಸರಾಗುತ್ತಿದ್ದಾರೆ. ಮಕ್ಕಳು ಚಿಕ್ಕವಯಸ್ಸಿನಿಂದಲೇ ದಾರಿ ತಪ್ಪುತ್ತಿರುವುದನ್ನು ಎಲ್ಲೆಡೆ ಕಾಣುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದ್ದು, ಪಠ್ಯದ ಜೊತೆ ಸಂಸ್ಕಾರ, ವಾಸ್ತವ ಸಮಾಜದ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಇನ್ನೊಬ್ಬರಿಗೆ ನೆರವಾಗುವ ಗುಣಗಳನ್ನು ಬೆಳೆಸುವ ಅಗತ್ಯತೆ ಇದೆ ಎಂದು ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಹೇಳಿದರು.
ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ಶಾಲಾ ಶಿಕ್ಷಣ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಪರಿಪೂರ್ಣ ಹಾಗೂ ಉತ್ತಮ ನಾಗರಿಕರನ್ನು ರೂಪಿಸುವಂಥ ಶಕ್ತಿ ಶಿಕ್ಷಕರಿಗಿದೆ. ಪ್ರತಿ ವಿದ್ಯಾರ್ಥಿಗಳಿಗೂ ಗುಣಮಟ್ಟದ ಕಲಿಕೆಗೆ ಒತ್ತು ನೀಡುವ ಮೂಲಕ ನಮ್ಮ ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತಿರೆಂಬ ಸದಾಶಯ ನನ್ನದು ಎಂದರು.ತಾಲೂಕು ಕೇಂದ್ರದಲ್ಲಿ ಗುರು ಭವನ ನಿರ್ಮಾಣಕ್ಕೆ ತಾಂತ್ರಿಕ ಅಡ್ಡಿಯಾಗಿದೆ. ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದರ ಜತೆಗೆ ಶಿಕ್ಷಕರ ಬೇಡಿಕೆಗ ಈಡೇರಿಸುವುದಾಗಿ ಭರವಸೆ ನೀಡಿದರು.
ಕೂಡ್ಲಿಗಿ ತಾಪಂ ಇಒ ನರಸಪ್ಪ, ತಹಸೀಲ್ದಾರ್ ವಿ.ಕೆ. ನೇತ್ರಾವತಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಾಪುರ ವೆಂಕಟೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಬಿ. ಶಿವಾನಂದ, ಪಪಂ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ ಸೇರಿ ಇತರರು ಮಾತನಾಡಿದರು. ಕೂಡ್ಲಿಗಿ ಹಿರೇಮಠ ಸಂಸ್ಥಾನದ ಪಟ್ಟಾಧ್ಯಕ್ಷರಾದ ಪ್ರಶಾಂತಸಾಗರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪ್ರಭಾರ ಬಿಇಒ ಎಸ್.ಎಸ್. ಜಗದೀಶ್ ಪ್ರಾಸ್ತಾವಿಕ ನುಡಿದರು.ಈ ಸಂದರ್ಭ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶಿವನಾಯಕ ದೊರೆ, ಶಿಕ್ಷಕರ ಸಂಘಟನೆಯ ಗೀತಾ ವಾಲ್ಮೀಕಿ, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿಗಳಾದ ಮಂಜುನಾಥ, ಪದ್ಮನಾಭ ಕರಣಂ, ಕಾರ್ಮಿಕರ ಸಂಘಟನೆ ಮುಖಂಡ ಗುನ್ನಳ್ಳಿ ರಾಘವೇಂದ್ರ, ಉಪನ್ಯಾಸಕ ಕೊಟ್ರಪ್ಪನವರ ನಾಗರಾಜ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಹಮ್ಮದ್ ಜಿಲಾನ್, ಕೆಂಚಮಲ್ಲನಹಳ್ಳಿ ಡಾ.ಎ.ಕರಿಬಸಪ್ಪ, ಎಚ್.ಹನುಮಂತಪ್ಪ ಸೇರಿ ಇತರರಿದ್ದರು. ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ನಾನಾ ಶಾಲೆಯ ಶಿಕ್ಷಕರನ್ನು ಶಾಸಕರು ಸನ್ಮಾನಿಸಿದರು. ಅದ್ಧೂರಿಯ ಮೆರವಣಿಗೆ
ಕೂಡ್ಲಿಗಿಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಪಟ್ಟಣದ ಗಾಂಧೀಜಿ ಚಿತಾಭಸ್ಮವಿರುವ ಹುತಾತ್ಮರ ರಾಷ್ಟ್ರೀಯ ಸ್ಮಾರಕದ ಬಳಿ ಡಾ. ಎಸ್.ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಗೆ ತಹಸೀಲ್ದಾರ್ ವಿ.ಕೆ. ನೇತ್ರಾವತಿ ಚಾಲನೆ ನೀಡಿದರು. ಪಟ್ಟಣದ ಮುಖ್ಯರಸ್ತೆಯಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆದಿದ್ದು, ಶಿಕ್ಷಕರು, ಶಿಕ್ಷಕಿಯರು ಕುಣಿದು ಸಂಭ್ರಮಿಸಿದರು. ಡೊಳ್ಳು ಕುಣಿತ ಸೇರಿ ನಾನಾ ವಾದ್ಯಗಳು ಮೆರಗು ಹೆಚ್ವಿಸಿದವು.