ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಂ.ಎ. ಸಂಗನಾಳ, ಮಕ್ಕಳನ್ನು ಭವಿಷ್ಯದ ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರು ಮತ್ತು ಸಮಾಜದ ಪಾತ್ರ ದೊಡ್ಡದಿದೆ ಎಂದರು.
ಗದಗ: ಮಕ್ಕಳಿಗೆ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ವ್ಯತ್ಯಾಸ, ವೈಯಕ್ತಿಕ ಮಿತಿ ಹಾಗೂ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ) ಕುರಿತು ಶಿಕ್ಷಕರು ಅರಿವು ಮೂಡಿಸಬೇಕು. ಮಕ್ಕಳು ಭಯವಿಲ್ಲದೆ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಶಾಲೆಗಳಲ್ಲಿ ವಿಶ್ವಾಸದ ವಾತಾವರಣ ನಿರ್ಮಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಶ್ರೀಮತಿ ನಾಗವೇಣಿ ಹೇಳಿದರು.
ಗದಗ ನಗರದ ಜಿಲ್ಲಾ ನ್ಯಾಯಾಲಯದ ಆವರಣದ ಪರ್ಯಾಯ ವಿವಾದ ಪರಿಹಾರ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಪೊಲೀಸ್, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಸುರಕ್ಷಿತ ಬಚಪನ್ ಅಭಿಯಾನ, ಹಂತ 2 ರ ಅಡಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಂ.ಎ. ಸಂಗನಾಳ, ಮಕ್ಕಳನ್ನು ಭವಿಷ್ಯದ ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರು ಮತ್ತು ಸಮಾಜದ ಪಾತ್ರ ದೊಡ್ಡದಿದೆ ಎಂದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಡಿ. ಬಡಿಗೇರ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶಿಕ್ಷಕರು ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಜಿಲ್ಲೆಯ 189 ಶಾಲೆಗಳಲ್ಲಿ ಈಗಾಗಲೇ ಅರಿವು ಮೂಡಿಸಿದ್ದು, ಪ್ರತಿ ಶಾಲೆಯ ಇಬ್ಬರು ಶಿಕ್ಷಕರಿಗೆ ಇಂದು ತರಬೇತಿ ನೀಡಲಾಗುತ್ತಿದೆ ಎಂದರು.ಡಿವೈಎಸ್ಪಿ ಮಹಾಂತೇಶ ಸಜ್ಜನ ಅಂತರ್ಜಾಲ ಸುರಕ್ಷತೆ ಹಾಗೂ ಸೈಬರ್ ಅಪರಾಧಗಳ ಕುರಿತು, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯದೇವಿ ಕವಲೂರ ಬಾಲ ನ್ಯಾಯ ಕಾಯ್ದೆ ಹಾಗೂ 1098, 15100, 112 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎಸ್.ವಿ. ಗ್ರಾಮಪುರೋಹಿತ್ ಉಪಸ್ಥಿತರಿದ್ದರು. ಬಸವರಾಜ ಕುಕನೂರ ನಿರೂಪಿಸಿದರು. ಗುರುರಾಜ ಗೌರಿ ಸ್ವಾಗತಿಸಿ, ವಂದಿಸಿದರು.