ಸಾರಾಂಶ
ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಹೇಳಿದರು. ತುಮಕೂರಿನಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟದಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ತುಮಕೂರು
ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಹೇಳಿದರು.ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಾರೆ. ಹಾಗಾಗಿ ಆ ಮಕ್ಕಳಿಗೆ ಪಾಠ ಬೋಧನೆಯಲ್ಲಿ ಕಿಂಚಿತ್ತೂ ಲೋಪವಾಗದಂತೆ ಪಾಠ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಇದನ್ನು ಪ್ರತಿಯೊಬ್ಬ ಶಿಕ್ಷಕರು ಅರ್ಥೈಸಿಕೊಂಡು ಕಾರ್ಯೋನ್ಮುಖರಾಗಬೇಕು ಎಂದರು.ಸರ್ಕಾರಿ ಶಾಲೆಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಪೋಷಕರಿಂದ ತಿರಸ್ಕಾರದ ಮಾತುಗಳು ಕೇಳಿ ಬರುತ್ತಿವೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ಶ್ರಮ ವಹಿಸಿ ಪಾಠ ಬೋಧನೆಯಲ್ಲಿ ತೊಡಗಬೇಕು. ಜತೆಗೆ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಿದರು. ಪಾಠ ಬೋಧನೆಯ ಜತೆಗೆ ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಬೇಕು. ಜತೆಗೆ ಶಿಕ್ಷಕರು ಸಹ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದರು. ಶಿಕ್ಷಕರು ಸದಾ ಪಾಠ ಬೋಧನೆಯಲ್ಲಿ ತೊಡಗಿಕೊಳ್ಳುವುದರಿಂದ ಇಂತಹ ಕ್ರೀಡಾಕೂಟಗಳು ಒತ್ತಡ ನಿವಾರಣೆಗೆ ಸಹಕಾರಿಯಾಗಲಿವೆ. ಹಾಗಾಗಿ ಶಿಕ್ಷಕರು ಪಾಠದ ಜತೆಗೆ ಆಟದಲ್ಲೂ ಸಕ್ರಿಯರಾದರೆ ಮಕ್ಕಳಿಗೆ ಆದರ್ಶಪ್ರಾಯರಾಗಬಹುದು. ಮಕ್ಕಳನ್ನು ಉತ್ತಮ ನಾಗರಿಕ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪೋಷಕರ ಪಾತ್ರ ಎಷ್ಟು ಇರುತ್ತದೆಯೇ ಅಷ್ಟೇ ಪಾತ್ರವೂ ಶಿಕ್ಷಕರದ್ದು ಇರುತ್ತದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಹನುಮಂತಪ್ಪ ಮಾತನಾಡಿ, ಶಿಕ್ಷಕರು ಕ್ರೀಡಾಕೂಟ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳಿಗೆ ಮಾದರಿಯಾಗಬೇಕು ಎಂದರು.ಕ್ರೀಡಾಕೂಟ ಸ್ನೇಹ, ಬಾಂಧವ್ಯದ ಸಂಕೇತ. ಹೀಗಾಗಿ ಎಲ್ಲರೂ ಸೌಹಾರ್ದತೆಯಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಜತೆಗೆ ಮಕ್ಕಳಿಗೆ ಪಾಠ ಬೋಧನೆ ಜತೆಗೆ ಕ್ರೀಡಾಕೂಟಗಳಲ್ಲೂ ಭಾಗವಹಿಸುವಂತೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಿ.ಜಿ.ತಿಮ್ಮೇಗೌಡ ಮಾತನಾಡಿ, ಕಳೆದ 10 ವರ್ಷಗಳಿಂದ ನಿರಂತರವಾಗಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇದು ಶಿಕ್ಷಕರಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು.ಈ ಕ್ರೀಡಾಕೂಟದಲ್ಲಿ ಸುಮಾರು 300 ರಿಂದ 400 ಜನ ಶಿಕ್ಷಕರು ಭಾಗವಹಿಸಿದ್ದು, ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತಿದೆ. ಶಿಕ್ಷಕರ ಸಮಸ್ಯೆಗಳಿಗೆ ಸಂಘವು ಸದಾ ಸ್ಪಂದಿಸುತ್ತಿದ್ದು, ಶಿಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲೂ ಸಹ ಶ್ರಮ ವಹಿಸುತ್ತಿದೆ. ಶಿಕ್ಷಕರ ಹಿತರಕ್ಷಣೆ ಸಂಘದ ಪ್ರಮುಖ ಧ್ಯೇಯವಾಗಿದೆ ಎಂದರು.ಸರ್ಕಾರಿ ಶಾಲೆಯ ಶಿಕ್ಷಕರು ಪಾಠ ಬೋಧನೆಯ ಜತೆಗೆ ಕ್ರೀಡೆ, ಸಾಂಸ್ಕೃತಿ ಚಟುವಟಿಕೆಗಳಿಗೂ ಒತ್ತು ನೀಡುತ್ತಿದ್ದಾರೆ. ಮಕ್ಕಳನ್ನು ಪಾಠ, ಆಟ, ಸಾಂಸ್ಕೃತಿಕ ಚಟುವಟಿಕೆಗಳಿಕೆಗಳಲ್ಲೂ ತೊಡಗಿಸಿಕೊಂಡು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.ವಾಲಿಬಾಲ್, ಷಟಲ್ ಬಾಡ್ಮಿಂಟನ್, ಕ್ರಿಕೆಟ್, 100 ಮೀ., 200 ಮೀ ಓಟ, ರಿಲೇ ಓಟ, ಥ್ರೋಬಾಲ್, ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭಾವಗೀತೆ, ಜಾನಪದಗೀತೆ ಕಾರ್ಯಕ್ರಮಗಳು ನಡೆದವು.
ಶಿಕ್ಷಕರುಗಳಾದ ಪಿ.ಎಸ್. ಅನುಸೂಯದೇವಿ, ಗಂಗಹನುಮಯ್ಯ, ಬಿ.ಆರ್. ಅನ್ನಪೂರ್ಣ, ಪಿ.ಎನ್. ದಿನೇಶ್, ಸಿ. ಶಿವಕುಮಾರ್, ಪದ್ಮರಾಜ್ ಡಿ., ಕೆ.ಎ. ಮಂಜುಳ, ಮಂಜಣ್ಣ, ಲಕ್ಷ್ಮೀದೇವಿ, ಮಹದೇವಯ್ಯ, ಹನುಮಂತರಾಯಪ್ಪ, ಲೋಕೇಶ್, ಕೋಮಲ, ಶಾಂತಕುಮಾರಿ, ಯಶೋಧಮ್ಮ, ಷಡಕ್ಷರಿ, ಚನ್ನಿಗರಾಯ, ರಾಜಕುಮಾರ್, ದೊಡ್ಡರಂಗಪ್ಪ, ಪ್ರವೀಣ್‌ಕುಮಾರ್, ಸಿದ್ದಮ್ಮ, ಮುಸ್ತಾಕ್ ಅಹಮದ್, ಗಂಗೇಶ್, ಚಿಕ್ಕಣ್ಣ ಉಪಸ್ಥಿತರಿದ್ದರು.