ಭಿನ್ನ ಶೈಕ್ಷಣಿಕತೆಯಿಂದ ಶಿಕ್ಷಕರಿಗೆ ಒತ್ತಡ: ಮಹಾಬಲೇಶ್ವರ ರಾವ್

| Published : Sep 06 2025, 01:00 AM IST

ಭಿನ್ನ ಶೈಕ್ಷಣಿಕತೆಯಿಂದ ಶಿಕ್ಷಕರಿಗೆ ಒತ್ತಡ: ಮಹಾಬಲೇಶ್ವರ ರಾವ್
Share this Article
  • FB
  • TW
  • Linkdin
  • Email

ಸಾರಾಂಶ

ಬದಲಾಗುತ್ತಿರುವ ಶೈಕ್ಷಣಿಕ ವ್ಯವಸ್ಥೆಗಳಿಂದಾಗಿ ಶಿಕ್ಷಕರು ತಮ್ಮ ಕರ್ತವ್ಯದಲ್ಲಿ ಸಾಕಷ್ಟು ಒತ್ತಡಕ್ಕೆ ಒಳಗಾಗುವಂತಾಗಿದೆ. ಮತ್ತೊಂದು ಕಡೆ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದಾಗಿ ಮನುಷ್ಯ ಸಮಾಜಕ್ಕೆ ವಿರುದ್ಧವಾದ ಮತ್ತೊಂದು ಸಮಾಜ ನಿರ್ಮಾಣಗೊಳ್ಳುತ್ತಿದೆ ಎಂದು ಉಡುಪಿ ಟಿಎಂಎಪೈ ಶಿಕ್ಷಣ ಸಂಸ್ಥೆ ಸಮನ್ವಯಾಧಿಕಾರಿ ಡಾ.ಮಹಾಬಲೇಶ್ವರ ರಾವ್ ಕಳವಳ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಬದಲಾಗುತ್ತಿರುವ ಶೈಕ್ಷಣಿಕ ವ್ಯವಸ್ಥೆಗಳಿಂದಾಗಿ ಶಿಕ್ಷಕರು ತಮ್ಮ ಕರ್ತವ್ಯದಲ್ಲಿ ಸಾಕಷ್ಟು ಒತ್ತಡಕ್ಕೆ ಒಳಗಾಗುವಂತಾಗಿದೆ. ಮತ್ತೊಂದು ಕಡೆ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದಾಗಿ ಮನುಷ್ಯ ಸಮಾಜಕ್ಕೆ ವಿರುದ್ಧವಾದ ಮತ್ತೊಂದು ಸಮಾಜ ನಿರ್ಮಾಣಗೊಳ್ಳುತ್ತಿದೆ ಎಂದು ಉಡುಪಿ ಟಿಎಂಎಪೈ ಶಿಕ್ಷಣ ಸಂಸ್ಥೆ ಸಮನ್ವಯಾಧಿಕಾರಿ ಡಾ.ಮಹಾಬಲೇಶ್ವರ ರಾವ್ ಕಳವಳ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆಯ `ಶಿಕ್ಷಕರ ದಿನ’ದಲ್ಲಿ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿದರು.

ಹೊಸ ತಲೆಮಾರಿನ ಪಠ್ಯಕ್ರಮ, ಆಡಳಿತ ನಡೆಸುತ್ತಿರುವ ಸರ್ಕಾರಗಳು ರೂಪಿಸುತ್ತಿರುವ ಶೈಕ್ಷಣಿಕ ಯೋಜನೆಗಳು ಹಾಗೂ ಪ್ರತಿಯೊಂದಕ್ಕೂ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವುತ್ತಿರುವುದು ವಿಪರ್ಯಾಸದ ಸಂಗತಿ ಎಂದರು.

ಪ್ರತಿ ವರ್ಷ ಸರ್ಕಾರ ಸಾವಿರಾರು ಶಿಕ್ಷಕರನ್ನು ನೇಮಕಗೊಳಿಸುವುದಾಗಿ ಭರವಸೆ ನೀಡುತ್ತಿದೆ. ಆದರೆ ಶಿಕ್ಷಕರ ಕೊರತೆ ನಿರೀಕ್ಷೆಗೂ ಮೀರಿ ಹೆಚ್ಚಿನ ಪ್ರಮಾಣದಲ್ಲಿದೆ. ಇದರಿಂದಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಲ್ಲಿ ಒತ್ತಡ ಹೆಚ್ಚಾಗಿದೆ. ಮತ್ತೊಂದೆಡೆ ವಿವಿಧ ಶ್ರೇಣಿಯ ಶಿಕ್ಷಕರಿಗೆ ನೀಡುತ್ತಿರುವ ವೇತನ ಸಹ ತೀರ ಕಡಿಮೆ ಪ್ರಮಾಣದಲ್ಲಿದೆ. ಕುಟುಂಬ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ ಎಂದರು.

ಇಂದು ಪ್ರತಿಯೊಬ್ಬರೂ ಮೊಬೈಲ್ ಬಳಕೆ ಮಾಡುತ್ತಿದ್ದು, ಇದರಿಂದಾಗಿ ಸಮಾಜದಲ್ಲಿ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಇವರು ಶಿಕ್ಷಣದ ಕಡೆ ಗಮನ ಹರಿಸುವಂತೆ ಮಾಡಬೇಕಾಗಿದೆ. ಮೊಬೈಲ್ ಅತಿಯಾದ ಬಳಕೆಯಿಂದ ಮಾನವೀಯ ಸಂಬಂಧಗಳು ಕಳೆದುಹೋಗಿ ಮತ್ತೊಂದು ಸಮಾಜ ನಿರ್ಮಾಣಗೊಳ್ಳುತ್ತಿದೆ ಎಂದರು.

ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ್, ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪೌರಾಯುಕ್ತ ಹೇಮಂತ್, ಸದಸ್ಯ ಬಸವರಾಜ ಬಿ. ಆನೇಕೊಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಆರ್ ಶ್ರೀಧರ್ ಸಾವಂತ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ. ಕೊಟ್ರಪ್ಪ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಎಸ್. ಉಮಾ, ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪೋಲಾರ್ ಮುರಳಿಧರ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆರ್.ಯು ಚಂದ್ರಶೇಖರ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎಚ್.ವಿ.ಪಂಚಾಕ್ಷರಿ, ಸರ್ಕಾರಿ ನೌಕರರ ಸಂಘದ ವೆಂಕಟೇಶ್ ಇತರರು ಹಾಜರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಹೆಚ್ಚು ಅಂಕ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೆ ತಾಲೂಕು ಮಟ್ಟದ ಉತ್ತಮ ಶಿಕ್ಷಕರು ಹಾಗೂ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನಿವೃತ್ತಿ ಹೊಂದಿರುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಸಂಗಡಿಗರು ರೈತ ಗೀತೆ ಹಾಡಿದರು.

ತಾಲೂಕಿನ ಸರ್ಕಾರಿ, ಅನುದಾನ ಹಾಗು ಅನುದಾನ ರಹಿತ ಶಾಲೆಗಳ, ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ವರ್ಗ ಇದ್ದರು.