ಗೃಹಲಕ್ಷ್ಮೀ ಹಣ ಪಾವತಿಗೆ ತಾಂತ್ರಿಕ ಸಮಸ್ಯೆ: ಡಾ.ಪುಷ್ಪಾ ಅಮರನಾಥ್

| Published : Sep 24 2024, 01:48 AM IST

ಸಾರಾಂಶ

ಜೂನ್ ತಿಂಗಳವರೆಗೆ ಗೃಹಲಕ್ಷ್ಮೀ ಹಣ ಪಾವತಿಯಾಗಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ತಿಂಗಳ ಹಣ ಪಾವತಿ ಬಾಕಿ ಇದೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವ ಕಾರಣ ಫಲಾನುಭವಿಗಳ ಖಾತೆಗೆ ಹಣ ತಲುಪಿಲ್ಲ. ಶೀಘ್ರದಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಗಮನಕ್ಕೆ ತಂದು ತೊಂದರೆ ನಿವಾರಿಸಿ ಹಣ ಪಾವತಿಗೆ ಕ್ರಮ ವಹಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಗೃಹಲಕ್ಷ್ಮೀ ಯೋಜನೆಯಡಿ ಮೂರು ತಿಂಗಳ ಹಣ ಪಾವತಿಯಾಗಬೇಕಿದ್ದು, ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವುದರಿಂದ ಶೀಘ್ರದಲ್ಲೇ ಅರ್ಹ ಫಲಾನುಭವಿಗಳಿಗೆ ಹಣ ತಲುಪಿಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂನ್ ತಿಂಗಳವರೆಗೆ ಗೃಹಲಕ್ಷ್ಮೀ ಹಣ ಪಾವತಿಯಾಗಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ತಿಂಗಳ ಹಣ ಪಾವತಿ ಬಾಕಿ ಇದೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವ ಕಾರಣ ಫಲಾನುಭವಿಗಳ ಖಾತೆಗೆ ಹಣ ತಲುಪಿಲ್ಲ. ಶೀಘ್ರದಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಗಮನಕ್ಕೆ ತಂದು ತೊಂದರೆ ನಿವಾರಿಸಿ ಹಣ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಗೃಹಲಕ್ಷ್ಮೀ ಹಣ ಯಾರಿಗೆ ತಲುಪಿಲ್ಲವೋ ಅವರಿಗೆ ಯೋಜನೆಯ ಹಣ ತಲುಪಿಸುವುದೇ ನಮ್ಮ ಸವಾಲಾಗಿದೆ. ಅರ್ಹ ಫಲಾನುಭವಿಗಳಿಗೆಲ್ಲರಿಗೂ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಶಕ್ತಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಕ್ಕಾಗಿ ಜಿಲ್ಲೆಯೊಳಗೆ ೫೨ ಸಂಚಾರಿ ಮಾರ್ಗಗಳನ್ನು ಹೆಚ್ಚುವರಿಯಾಗಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಬಸ್‌ಗಳು ಸಮರ್ಪಕವಾಗಿ ದೊರಕಿಸಿಕೊಡುವಂತೆ ಹೇಳಿರುವುದಾಗಿ ತಿಳಿಸಿದರು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವ ಸಮಯದಲ್ಲಿ ನಿರ್ವಾಹಕರು ತಾಳ್ಮೆ, ಸಹನೆ ಕಳೆದುಕೊಂಡು ಮಾತನಾಡುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದರ ಬಗ್ಗೆ ನಿರ್ವಾಹಕರಿಗೆ ಕಾರ್ಯಾಗಾರ ನಡೆಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದ್ದೇನೆ. ಮಹಿಳೆಯರನ್ನು ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದು ನುಡಿದರು.

ಅನ್ನಭಾಗ್ಯ ಯೋಜನೆಯಡಿ ೫ ಕೆಜಿ ಅಕ್ಕಿ ನೀಡಿ ಉಳಿದ ೫ ಕೆಜಿಗೆ ಹಣ ನೀಡಲಾಗುತ್ತಿದ್ದು, ಈ ಹಣ ಕೊಡುವ ಬದಲು ಧಾನ್ಯಗಳನ್ನೇ ನೀಡುವಂತೆ ಜನರಿಂದ ಬೇಡಿಕೆ ಬರುತ್ತಿದೆ. ಈ ಕುರಿತಂತೆ ಸರ್ಕಾರದ ಗಮನಕ್ಕೆ ತಂದು ಕ್ರಮ ವಹಿಸುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ತಿಂಗಳಿಗೊಂದು ಗ್ಯಾರಂಟಿ ಅದಾಲತ್ ನಡೆಸುವ ಬಗ್ಗೆಯೂ ಯೋಚಿಸಲಾಗುತ್ತಿದೆ. ಈ ಸಭೆಗೆ ಜಿಲ್ಲಾಧಿಕಾರಿ, ಸಿಇಒ ಮತ್ತು ಜಿಲ್ಲೆಯ ಅಧಿಕಾರಿಗಳು ಪಾಲ್ಗೊಳ್ಳುವುದು. ಗ್ಯಾರಂಟಿ ಯೋಜನೆಗಳನ್ನು ನಿರ್ದಿಷ್ಟ ದಿನಗಳೊಳಗೆ ಕಾರ್ಯರೂಪಕ್ಕೆ ತರುವುದಕ್ಕೆ ಪ್ರಯತ್ನಿಸಲಾಗುವುದು. ದಸರಾ ನಂತರ ಗ್ಯಾರಂಟಿ ಅದಾಲತ್ ನಡೆಸುವ ಕುರಿತು ಚರ್ಚಿಸಿ ತಿಳಿಸಲಾಗುವುದು ಎಂದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಯೋಜನಾಧಿಕಾರಿ ಧನುಷ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ಉಪಾಧ್ಯಕ್ಷರಾದ ಪ್ರಶಾಂತ್‌ಬಾಬು, ರಾಜೇಂದ್ರ, ಹನುಮಂತಯ್ಯ ಇತರರಿದ್ದರು.