ಕನ್ನಡಪ್ರಭ ವಾರ್ತೆ ಹೊಸದುರ್ಗ
ರೈತರ ಅಭಿಪ್ರಾಯ, ಸಮಸ್ಯೆ ಹಾಗೂ ಸ್ಥಳೀಯ ಪರಿಸ್ಥಿತಿಯ ಅಧ್ಯಯನದ ಆಧಾರದ ಮೇಲೆ ತಾಂತ್ರಿಕ ಪರಿಹಾರಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ವಿ.ಧನಂಜಯ ತಿಳಿಸಿದರು.ಪಟ್ಟಣದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆ ಆಯೋಜಿಸಿದ್ದ ತೆಂಗು ಮತ್ತು ಅಡಕೆ ಬೆಳೆಗಳ ವಿಚಾರ ಸಂಕಿರಣದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಡಕೆ ಮತ್ತು ತೆಂಗು ಬೆಳೆಗಳ ನಿರ್ವಹಣೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಿವಮೊಗ್ಗ ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ವಿಶೇಷ ಕಾರ್ಯಯೋಜನೆ ರೂಪಿಸುತ್ತಿದ್ದು, ವಿಶ್ವವಿದ್ಯಾಲಯ ವ್ಯಾಪ್ತಿಯ ನಾಲ್ಕು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ಸಾವಿರಾರು ರೈತರನ್ನು ನೇರವಾಗಿ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಾಗುವುದು ಎಂದರು.
ಹವಾಮಾನ ವೈಪರೀತ್ಯ, ಮಣ್ಣಿನ ಫಲವತ್ತತೆ ಕುಸಿತ, ನೀರಿನ ಕೊರತೆ ಹಾಗೂ ಕೃಷಿ ವೆಚ್ಚದ ಏರಿಕೆ ಇಂದಿನ ರೈತರ ಮುಂದೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂತಹ ಪರಿಸ್ಥಿತಿಯಲ್ಲಿ ವೈಜ್ಞಾನಿಕ ಕೃಷಿ ಪದ್ಧತಿ, ಸಂಶೋಧನಾ ಸಂಸ್ಥೆಗಳ ಸಲಹೆ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಮಾತ್ರ ಕೃಷಿಯನ್ನು ಲಾಭದಾಯಕವಾಗಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಎನ್. ಸಿದ್ದರಾಮಪ್ಪ ಮಾತನಾಡಿ ಕೃಷಿಯೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ದೀರ್ಘಾವಧಿ ಹಾಗೂ ಅಲ್ಪಾವಧಿ ಬೆಳೆಗಳನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಯುವುದು ಅನಿವಾರ್ಯವಾಗಿದೆ. ರೈತರು ಇಂತಹ ವಿಚಾರ ಸಂಕಿರಣಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೃಷಿ ವಿಜ್ಞಾನಿಗಳು ನೀಡುವ ಮಾಹಿತಿಯನ್ನು ತಮ್ಮ ಹೊಲಗಳಲ್ಲಿ ಅಳವಡಿಸಿಕೊಂಡರೆ ಮಾತ್ರ ನಷ್ಟದಿಂದ ಹೊರಬಂದು ಸ್ಥಿರ ಆದಾಯ ಗಳಿಸಲು ಸಾಧ್ಯ ಎಂದು ಹೇಳಿದರು.
ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಪುರುಷರಾಂ ಚಂದ್ರವಂಶಿ ಮಾತನಾಡಿ, ರೈತರು ವಿಜ್ಞಾನಿಗಳಂತೆ ಯೋಚಿಸಿ ಕೃಷಿ ಕೈಗೊಳ್ಳಬೇಕಾದ ಅಗತ್ಯವಿದೆ . ಮಣ್ಣಿನ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೋಷಕಾಂಶಗಳ ಸಮತೋಲನ ನಿರ್ವಹಣೆ, ಜಿಪ್ಸಂ ಬಳಕೆ, ಸಾವಯವ ಗೊಬ್ಬರ ಹಾಗೂ ಜೈವಿಕ ಪೋಷಕಾಂಶಗಳ ಬಳಕೆಯಿಂದ ದೀರ್ಘಾವಧಿಯಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಿ ಉತ್ತಮ ಇಳುವರಿ ಪಡೆಯಬಹುದು ಎಂದು ವಿವರಿಸಿದರು.
ಕೃಷಿ ವಿಜ್ಞಾನಿ ಡಾ. ಓಂಕಾರಪ್ಪ ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ವಿಚಾರ ಸಂಕಿರಣದಲ್ಲಿ ಕೃಷಿ ಕ್ಷೇತ್ರದ ನವೀನ ತಂತ್ರಜ್ಞಾನಗಳು, ಹವಾಮಾನಕ್ಕೆ ಹೊಂದಿಕೊಂಡ ಬೆಳೆ ನಿರ್ವಹಣೆ, ಮಣ್ಣಿನ ಆರೋಗ್ಯ ಸುಧಾರಣೆ, ನೀರಿನ ಸಮರ್ಪಕ ಬಳಕೆ, ಸೂಕ್ಷ್ಮಜೀವಿಗಳ ಸಂರಕ್ಷಣೆ ಹಾಗೂ ಸುಸ್ಥಿರ ತೋಟಗಾರಿಕೆ ಪದ್ಧತಿಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ರೈತರು ಕೇಳಿದ ಪ್ರಶ್ನೆಗಳಿಗೆ ತಜ್ಞರು ವೈಜ್ಞಾನಿಕ ಉತ್ತರಗಳನ್ನು ನೀಡಿ ಪ್ರಾಯೋಗಿಕ ಸಲಹೆಗಳನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಮರಿದಿಮ್ಮಪ್ಪ ವಹಿಸಿದ್ದರು. ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಟಿ. ಬಸವರಾಜ ನಾಯ್ಕ, ಯೋಗೇಶ್ವರ್, ನಿವೃತ್ತ ಪ್ರಾಧ್ಯಾಪಕ ಡಾ. ಎಚ್. ನಾರಾಯಣಸ್ವಾಮಿ ಸೇರಿದಂತೆ ಗಣ್ಯರು ಮಾತನಾಡಿದರು.
ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು, ಕೃಷಿ ಆಸಕ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ವಿಚಾರ ಸಂಕಿರಣದ ಪ್ರಯೋಜನ ಪಡೆದರು.