ಕನ್ನಡಪ್ರಭವಾರ್ತೆ ಚನ್ನಪಟ್ಟಣ

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಪರೀಕ್ಷಾರ್ಥಿಗಳು ಶೇ.೯೪.೬೪ ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದು ಈ ಸಾಧನೆಗೆ ಶಾಲೆಗಳ ಶಿಕ್ಷಕರು ಶ್ರಮ ಹಾಗೂ ಪೋಷಕರು ಪ್ರೋತ್ಸಾಹ ಮತ್ತು ವಿದ್ಯಾರ್ಥಿಗಳು ಇಚ್ಚಾಶಕ್ತಿ ಮತ್ತು ದೃಢ ಸಂಕಲ್ಪವೇ ಕಾರಣವಾಗಿದೆ ಎಂದು ತಹಸೀಲ್ದಾರ್ ಗಿರೀಶ್ ಸಂತಸ ವ್ಯಕ್ತಪಡಿಸಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಹೆಚ್ಚು ಫಲಿತಾಂಶ ದಾಖಲಾಗಿರುವುದು ಉತ್ತಮ ಬೆಳವಣಿಗೆ ಎಂದರು.

ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಮಕ್ಕಳು ಉತ್ತಮವಾಗಿ ಸಾಧನೆ ಮಾಡಬೇಕು ಎಂಬ ನಿಟ್ಟಿನಲ್ಲಿ ನಾನು ಸಹ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳ ಮಾಹಿತಿ ಪಡೆದು ಅವರ ಮನೆಗಳಿಗೆ ಭೇಟಿ ನೀಡಿದ್ದೆ. ಅವರಿಗೆ ಮನೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಪೂರಕ ವಾತಾವರಣ ನಿರ್ಮಾಣ ಮಾಡಿಕೊಡಲು ಶ್ರಮಿಸಿದ್ದೆವು. ನಮ್ಮ ಜೊತೆ ಶಾಲೆಯ ಮುಖ್ಯಶಿಕ್ಷಕರು, ವಿಷಯವಾರು ಶಿಕ್ಷಕರು ಆಗಮಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಇದ್ದ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ಆತ್ಮಸ್ಥೈರ್ಯ ತುಂಬುವ ಜೊತೆಗೆ ಅವರಿಗೆ ಸಮಸ್ಯೆ ಇದ್ದ ವಿಷಯವಾರು ಪಠ್ಯಕ್ರಮದ ಬಗ್ಗೆ ಆಯಾ ಶಿಕ್ಷಕರ ಮೂಲಕ ವಿಶೇಷ ಕಾರ್ಯಾಗಾರಗಳನ್ನು ಮಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪೂರಕ ವಾತಾವರಣ ನಿರ್ಮಾಣ ಮಾಡಿಕೊಡಲಾಗಿತ್ತು. ನಮ್ಮೆಲ್ಲರ ಶ್ರಮಕ್ಕೆ ಇಂದು ಫಲ ಸಿಕ್ಕಿರುವುದು ಸಂಸತ ತಂದಿದೆ ಎಂದರು.ತಾಲೂಕಿನಲ್ಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಕೆಲವು ವಿಷಯವಾಗಿ ಶಿಕ್ಷಣದಲ್ಲಿ ಹಿಂದೆ ಉಳಿದವರ ಪಟ್ಟಿ ಪಡೆದು ಅವರಿಗೆ ಈ ವಿಷಯದ ಬಗ್ಗೆ ಸಾಕಷ್ಟು ಮಾಹಿತಿಯನ್ನು ನೀಡಲಾಗಿತ್ತು. 3 ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಸದಂತೆ ಸೂಚನೆ ನೀಡುವ ಜೊತೆಗೆ ಪೋಷಕರು ಸಹ ಮೊಬೈಲ್ ನೆಟ್ ಬಳಸದಂತೆ ಹಾಗೂ ಮನೆಯಲ್ಲಿ ಟೀವಿ ಹಾಕದಂತೆ ಸಲಹೆ ನೀಡಲಾಗಿತ್ತು. ನಮ್ಮ ಮಾರ್ಗದರ್ಶನವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಚಿತ್ತದಿಂದ ಸ್ವೀಕರಿಸಿದ್ದರು ಎಂದರು.ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳು ಸಹ ಮುಂದಿನ ಶಿಕ್ಷಣದಲ್ಲಿ ಸಾಧನೆ ಮಾಡಬೇಕು. ಪರೀಕ್ಷೆಯಲ್ಲಿ ಕೆಲ ವಿಷಯದಲ್ಲಿ ಅನುತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವ ಜೊತೆಗೆ ಅವರಿಗೆ ವಿಷಯವಾಗಿ ವಿಶೇಷ ಕಾರ್ಯಾಗಾರದ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಸ್ವಚ್ಚತೆಗೆ ಆಧ್ಯತೆ ನೀಡಿ ಉತ್ತಮ ವಾತಾವರಣ ನಿರ್ಮಾಣ ಮಾಡುವ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಹತ್ತಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಇದಕ್ಕೆ ಕ್ಷೇತ್ರದ ಶಾಸಕರು ಸೇರಿದಂತೆ ದಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.