ಸಕಲೇಶಪುರ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವುದರಿಂದ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಬೇಲೂರು–ಸಕಲೇಶಪುರ ಮಾರ್ಗದಲ್ಲಿ ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೇಜಸ್ವಿ ವೃತ್ತದ ಬಳಿ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ಸಾರ್ವಜನಿಕರು, ಪ್ರವಾಸಿಗರು ಹಾಗೂ ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ರಸ್ತೆ ಹಾಗೂ ವೃತ್ತವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ತೇಜಸ್ವಿ ವೃತ್ತದ ಅಗಲೀಕರಣಕ್ಕೆ ಸಂಬಂಧಿಸಿದಂತೆ ಖಾತೆದಾರರು ಹಾಗೂ ವರ್ತಕರೊಂದಿಗೆ ನಡೆದ ಸಭೆಯಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಿ ಖಾತೆದಾರರು ಹಾಗೂ ವರ್ತಕರ ಅಭಿಪ್ರಾಯ ಮತ್ತು ದಾಖಲೆಗಳನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ತಿಳಿಸಿದರು.ಪಟ್ಟಣದ ಪುರಭವನದಲ್ಲಿ ಪುರಸಭೆ ಆಡಳಿತದ ವತಿಯಿಂದ ಆಯೋಜಿಸಿದ್ದ ತೇಜಸ್ವಿ ವೃತ್ತದ ವರ್ತಕರು, ಖಾತೆದಾರರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ, ಅಸಮರ್ಪಕ ಪಾರ್ಕಿಂಗ್ ಹಾಗೂ ಕಿರಿದಾದ ರಸ್ತೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ತೇಜಸ್ವಿ ವೃತ್ತದ ಸುತ್ತಮುತ್ತ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ಪೀಕ್ ಅವಧಿಯಲ್ಲಿ ವಾಹನ ದಟ್ಟಣೆಯಿಂದಾಗಿ ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ತವಾಗುತ್ತಿದೆ ಎಂದರು. ಸಕಲೇಶಪುರ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವುದರಿಂದ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಬೇಲೂರು–ಸಕಲೇಶಪುರ ಮಾರ್ಗದಲ್ಲಿ ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೇಜಸ್ವಿ ವೃತ್ತದ ಬಳಿ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ಸಾರ್ವಜನಿಕರು, ಪ್ರವಾಸಿಗರು ಹಾಗೂ ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ರಸ್ತೆ ಹಾಗೂ ವೃತ್ತವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದರು.ವೃತ್ತದ ಅಗಲೀಕರಣದ ಕುರಿತು ಚರ್ಚಿಸಲು ಸಭೆ ಕರೆಯಲಾಗಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪುರಸಭೆಗೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡಿರುವವರ ತೆರವು ಕಾರ್ಯ ನಡೆಯುತ್ತಿದೆ. ನೈಜ ಖಾತೆದಾರರು ಇದ್ದಲ್ಲಿ ಅವರ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು. ಅಸಮರ್ಪಕ ಪಾರ್ಕಿಂಗ್ ನಿಯಂತ್ರಿಸಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಯೋಜನ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫೀಜ್ ಮಾತನಾಡಿ, ಕಳೆದ ತಿಂಗಳು ಜಿಲ್ಲಾಧಿಕಾರಿಗಳು ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ವಿ ವೃತ್ತದ ಸಮೀಪದ ಸ್ಥಳ ಕಿರಿದಾಗಿರುವುದು ಹಾಗೂ ವಾಹನ ಸಂಚಾರಕ್ಕೆ ಉಂಟಾಗುತ್ತಿರುವ ತೊಂದರೆ ಗಮನಕ್ಕೆ ಬಂದಿತ್ತು. ವರ್ಷಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಪ್ರವಾಸಿಗರ ವಾಹನ ದಟ್ಟಣೆಯಿಂದ ರಸ್ತೆ ಸಂಚಾರ ಗಂಟೆಗಟ್ಟಲೆ ಜಾಮ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ತೇಜಸ್ವಿ ಚಿತ್ರಮಂದಿರದ ಸಮೀಪ ಹೊಸ ವೃತ್ತ ನಿರ್ಮಿಸಿ ರಸ್ತೆ ಅಗಲೀಕರಣ ಮಾಡುವ ಉದ್ದೇಶದಿಂದ ಸಭೆ ನಡೆಸಲಾಗಿದೆ. ಪಟ್ಟಣದ ಅಭಿವೃದ್ಧಿಯ ಹಿತದೃಷ್ಟಿಯಿಂದ ಖಾತೆದಾರರು ಹಾಗೂ ಜಮೀನು ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದರು.ಸಭೆಯಲ್ಲಿ ಖಾತೆದಾರರು ಹಾಗೂ ವರ್ತಕರು ತಮ್ಮ ಜಾಗ, ಕಟ್ಟಡ ಮತ್ತು ವ್ಯಾಪಾರಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಎಲ್ಲರ ಅಭಿಪ್ರಾಯ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಮತ್ತೊಂದು ಸುತ್ತಿನ ಸಭೆ ನಡೆಸಲು ಅಧಿಕಾರಿಗಳು ನಿರ್ಧರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ, ಯೋಜನಾ ಪ್ರಾಧಿಕಾರದ ಸದಸ್ಯರಾದ ದೇವರಾಜ್, ಚರಣ್, ವಿಜಯ ಕುಮಾರ್‌, ವರ್ತಕರ ಸಂಘದ ಅಧ್ಯಕ್ಷ ಮಧು ಸೇರಿದಂತೆ ಹಲವರು ಉಪಸ್ಥಿತರಿದ್ದರು.