ಸಾರಾಂಶ
ಹಾವೇರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಭೂಮಿ ವಶಕ್ಕೆ ಪಡೆದಿದ್ದಕ್ಕೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಟ್ವೀಟ್ ಮಾಡುವ ಮೂಲಕ ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಹಾವೇರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಭೂಮಿ ವಶಕ್ಕೆ ಪಡೆದಿದ್ದಕ್ಕೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಟ್ವೀಟ್ ಮಾಡುವ ಮೂಲಕ ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.ತೇಜಸ್ವಿ ಸೂರ್ಯ ಅವರ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ಕಾಯ್ದಿರಿಸಿದೆ.
ವಿಚಾರಣೆ ವೇಳೆ ಸಂಸದ ತೇಜಸ್ವಿ ಸೂರ್ಯ ಪರ ವಕೀಲರು, ರೈತ ರುದ್ರಪ್ಪ ಅವರ ಕುಟುಂಬಸ್ಥರ ಹೇಳಿಕೆ ಆಧರಿಸಿ ಅರ್ಜಿದಾರರು ಟ್ವೀಟ್ ಮಾಡಿದ್ದಾರೆ. ಆದರೆ ಸಾಲಬಾಧೆಯಿಂದ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ ಕೂಡಲೇ ಅರ್ಜಿದಾರರು ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಹೀಗಿದ್ದರೂ ಪೊಲೀಸರು ಸ್ವಯಂ ಪ್ರೇರಿತವಾಗಿ ದುರುದ್ದೇಶದಿಂದ ಅರ್ಜಿದಾರರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಕ್ರಮ ಒಪ್ಪುವಂತದಲ್ಲ. ಅರ್ಜಿದಾರರು ಸಂಸದರಾಗಿದ್ದು, ಜವಾಬ್ದಾರಿಯುತ ಹುದ್ದೆಯಲ್ಲಿದ್ದಾರೆ. ಅವರು ಯಾವುದೇ ಸಮುದಾಯಗಳ ಮಧ್ಯೆ ದ್ವೇಷ ಬಿತ್ತುವ ಕೆಲಸ ಮಾಡಿಲ್ಲ. ಆದ್ದರಿಂದ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.ಸರ್ಕಾರಿ ವಕೀಲರು, ರಾಜಕೀಯ ನೆಲೆಯಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷದ ಮುಖಂಡರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಸನ್ನಿವೇಶ ನಿಜಕ್ಕೂ ವಿಷಾದನೀಯ. ಒಂದು ಜೀವ ಹೋಗಿದೆ. ರೈತನ ಮಗ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ನೀವೆಲ್ಲರೂ ಅದರಲ್ಲಿ ರಾಜಕೀಯ ಮಾಡುತ್ತಿದ್ದೀರಲ್ಲ ಎಂದು ಬೇಸರ ಹೊರಹಾಕಿತು.